ಬೆಳಗಾವಿ ಯ ಕೆಎಲ್‌ಇ ಸಂಸ್ಥೆಯ ಜವಾಹರಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯಕ್ಕೆ ಮಂಗಳವಾರ ಭೇಟಿ ನೀಡಿದ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ, ಮಹಿಳೆಯರ ಸಮಸ್ಯೆಗಳು ಮತ್ತು ಅವುಗಳನ್ನು ಎದುರಿಸುವ ವಿಧಾನಗಳ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಕನ್ನಡಪ್ರಭ ವಾರ್ತೆ ಬೆಳಗಾವಿ
ಇಲ್ಲಿನ ಕೆಎಲ್‌ಇ ಸಂಸ್ಥೆಯ ಜವಾಹರಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯಕ್ಕೆ ಮಂಗಳವಾರ ಭೇಟಿ ನೀಡಿದ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ, ಮಹಿಳೆಯರ ಸಮಸ್ಯೆಗಳು ಮತ್ತು ಅವುಗಳನ್ನು ಎದುರಿಸುವ ವಿಧಾನಗಳ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ವಿದ್ಯಾರ್ಥಿನಿಯರು ಹಾಗೂ ಮಹಿಳಾ ಬೋಧಕಿಯರಿಗೆ ಕರ್ತವ್ಯ ನಿರ್ವಹಿಸುವಾಗ ಎದುರಾಗುವ ಸಮಸ್ಯೆಗಳ ಬಗ್ಗೆ ಚರ್ಚಿಸಿದ ಅವರು, ಲೈಂಗಿಕ ದೌರ್ಜನ್ಯ ಸೇರಿದಂತೆ ಯಾವುದೇ ಸಮಸ್ಯೆಗಳು ಎದುರಾದರೆ ತಕ್ಷಣವೇ ಪೊಲೀಸ್ ಹಾಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರಬೇಕು. ಒಂದು ವೇಳೆ ಸ್ಥಳೀಯವಾಗಿ ಸಮಸ್ಯೆಗೆ ಸೂಕ್ತ ಸ್ಪಂದನೆ ದೊರಕದಿದ್ದರೆ ನೇರವಾಗಿ ಮಹಿಳಾ ಆಯೋಗಕ್ಕೆ ಮಾಹಿತಿ ನೀಡುವಂತೆ ತಿಳಿಸಿದರು.
ಆಧುನಿಕ ಕಾಲಘಟ್ಟದಲ್ಲಿ ಮಹಿಳೆಯರ ಮೇಲಾಗುತ್ತಿರುವ ದೌರ್ಜನ್ಯಗಳ ವಿವಿಧ ವಿಧಗಳನ್ನು ವಿವರಿಸಿದ ಅವರು, ಪ್ರತಿಯೊಂದು ಸಮಸ್ಯೆ ನಿವಾರಣೆಗೆ ಸರ್ಕಾರ ವಿವಿಧ ಬಗೆಯ ವ್ಯವಸ್ಥೆ ಕಲ್ಪಿಸಿದೆ. ಇವುಗಳ ಸದ್ಬಳಕೆ ಮಾಡಿಕೊಂಡು ರಕ್ಷಣೆ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಎಪಿಎಂಸಿ ಠಾಣೆಯ ಪಿಎಸ್.ಐ. ತ್ರಿವೇಣಿ ಮಾತನಾಡಿ, ಸಾಮಾಜಿಕ ಜಾಲತಾಣಗಳ ಕುರಿತು ಮಹಿಳೆಯರು ತುಂಬಾ ಜಾಗರೂಕರಾಗಿರಬೇಕು. ಇಲ್ಲದಿದ್ದರೆ ಪ್ರತಿಕ್ಷಣ ಭಯದಲ್ಲಿ ಬದುಕುವ ಸನ್ನಿವೇಶ ಎದುರಾಗಬಹುದು ಎಂಬುದನ್ನು ಇಲಾಖೆಯ ವಿವಿಧ ಪ್ರಕರಣ ಉಲ್ಲೇಖಿಸುವ ಮೂಲಕ ತಿಳಿಸಿಕೊಟ್ಟರು.
ಸಂವಾದದಲ್ಲಿ ವಿದ್ಯಾರ್ಥಿನಿಯೋರ್ವಳ ಪ್ರಶ್ನೆಗೆ ಉತ್ತರಿಸಿದ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ, ಮಹಿಳೆಯರಿಗೆ ಶಿಕ್ಷಣ ಸಂಸ್ಥೆಗಳು ಅಥವಾ ಕೆಲಸದ ಸ್ಥಳಗಳಲ್ಲಿ ದೌರ್ಜನ್ಯಗಳಾದಾಗ ನ್ಯಾಯ ಸಿಗದೇ ಹೋದಲ್ಲಿ ಜಿಲ್ಲಾ ಮಟ್ಟದಲ್ಲಿರುವ ಅಧಿಕಾರಿಗಳನ್ನು ಸಂಪರ್ಕಿಸಬೇಕು. ಸ್ಥಳೀಯವಾಗಿ ನ್ಯಾಯ ದೊರಕದೇ ಹೋದಲ್ಲಿ ನೇರವಾಗಿ ಮಹಿಳಾ ಆಯೋಗಕ್ಕೆ ಮಾಹಿತಿ ನೀಡಿದರೆ ಆಯೋಗ ತುರ್ತಾಗಿ ಕ್ರಮ ವಹಿಸಲಿದೆ ಎಂದು ತಿಳಿಸಿದರು. ಆರೋಗ್ಯ ಇಲಾಖೆಯ ಅಧಿಕಾರಿಗಳು, ವೈದ್ಯಕೀಯ ಮಹಾವಿದ್ಯಾಲಯದ ಬೋಧಕ-ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.