ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆ
ರಾಜ್ಯ ಸರ್ಕಾರ ಘೋಷಿಸಿರುವ ಐದು ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಹೇಳಿದ್ದು, ವಿಪಕ್ಷಗಳ ಮಾತಿಗೆ ಫಲಾನುಭವಿಗಳು ತಲೆ ಕೆಡಿಸಿಕೊಳ್ಳಬೇಡಿ ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಅಭಯ ನೀಡಿದ್ದಾರೆ.ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ಸರ್ಕಾರ, ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಹಾಗೂ ತಾಲೂಕು ಸ್ತ್ರೀಶಕ್ತಿ ಒಕ್ಕೂಟದ ಸಹಯೋಗದಲ್ಲಿ ನಡೆದ ಐದು ಗ್ಯಾರಂಟಿಗಳ ಫಲಾನುಭವಿಗಳ ಪ್ರಗತಿ ಪರಿಶೀಲನಾ ಸಮಾವೇಶ ಹಾಗೂ ಮೇಲ್ವಿಚಾರಕಿಯರು, ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ, ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಾಜ್ಯ ಸರ್ಕಾರ ಘೋಷಿಸಿದ ಐದು ಗ್ಯಾರಂಟಿಗಳನ್ನು ಕ್ಷೇತ್ರದ ಜನತೆಗೆ ತಲುಪಿಸುವುದು ನನ್ನ ಜವಾಬ್ದಾರಿಯಾಗಿದ್ದು, ಎಲ್ಲಾ ಗ್ಯಾರಂಟಿಗಳನ್ನು ನೂರಕ್ಕೆ ನೂರು ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ ಎಂದರು.ತಾಲೂಕಿನಲ್ಲಿ ಗೃಹಲಕ್ಷ್ಮೀ ಯೋಜನೆಗೆ 60831 ಮಂದಿ ಮಹಿಳೆಯರು ನೋಂದಣಿ ಮಾಡಿಸಿದವರಲ್ಲಿ 55714 ಮಂದಿ ಮಹಿಳೆಯರ ಖಾತೆಗೆ ಹಣ ಜಮಾ ಆಗಿದೆ. ಆದರೆ, 4800 ಮಂದಿಗೆ ಹಣ ಬಂದಿಲ್ಲ, ಮುಂದಿನ ತಿಂಗಳೊಳಗೆ ಹಣ ತಲುಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ಕ್ಷೇತ್ರದ ಜನರು ಕಳೆದ ವಿಧಾನಸಭೆ ಚುನಾವಣೆಯಲ್ಲಿ 36 ಸಾವಿರಕ್ಕೂ ಹೆಚ್ಚು ಮತಗಳಿಂದ ನನ್ನನ್ನು ಗೆಲ್ಲಿಸಿದ್ದಾರೆ. ಸರ್ಕಾರದ ಎಲ್ಲಾ ಯೋಜನೆಗಳನ್ನು ತಲುಪಿಸುವುದು ನನ್ನ ಕರ್ತವ್ಯ. ಹೊಸ ಮನೆಗೆ ಪಡೆದವರಿಗೆ ಉಚಿತ ವಿದ್ಯುತ್ ಸಿಗುತ್ತಿಲ್ಲ ಎಂಬ ದೂರು ಕೇಳಿ ಬಂದಿದ್ದು, ಈ ಸಂಬಂಧ ಸಚಿವರು, ಇಲಾಖೆಯ ಮುಖ್ಯಸ್ಥರೊಂದಿಗೆ ಚರ್ಚಿಸಿ ಸಮಸ್ಯೆಗೆ ಸ್ಪಂದಿಸುವುದಾಗಿ ಭರವಸೆ ನೀಡಿದರು.ನಮ್ಮಲ್ಲೇ ಕಡಿಮೆ?:
ನೆರೆ ರಾಜ್ಯಗಳಾದ ತಮಿಳುನಾಡು,ಕೇರಳದಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ನಮ್ಮ ರಾಜ್ಯಕ್ಕಿಂತ ಹೆಚ್ಚಿದೆ, ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಅನಿವಾರ್ಯ. ಅಭಿವೃದ್ಧಿಗೆ ಹಿನ್ನಡೆಯಾಗಿಲ್ಲ.ಲೋಕಸಭೆ ಚುನಾವಣೆ ಬಂದ ಕಾರಣ ಅಭಿವೃದ್ಧಿ ಕುಂಠಿತವಾಗಿತ್ತು, ಮುಂದೆ ಸರಿಹೋಗಲಿದೆ ಎಂದರು.ಶಾಲಾ ವಿದ್ಯಾರ್ಥಿಗಳಿಗೆ 20 ಬಸ್ ಬೇಕು:
ಮಹಿಳೆಯರಿಗೆ ಉಚಿತ ಬಸ್ ಸೇವೆ ಒದಗಿಸುವ ಕಾರಣ ಶಾಲಾ, ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳಿಗೆ ಬಸ್ ಸಮಸ್ಯೆಯಿದೆ, ಇನ್ನೂ 20 ಬಸ್‌ಗಳು ಬೇಕಿದ್ದು, ಬಸ್ ಗಾಗಿ ಮನವಿ ಮಾಡಲಾಗಿದ್ದು, ಬಸ್ ಬಂದರೆ ವಿದ್ಯಾರ್ಥಿಗಳ ಬಸ್ ಸಮಸ್ಯೆ ಬಗೆಹರಿಯಲಿದೆ ಎಂದರು.ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ.ಚಂದ್ರು ಮಾತನಾಡಿ, ಜಿಲ್ಲೆಯಲ್ಲಿ 5.14 ಲಕ್ಷ ಮಹಿಳೆಯರು ಬಸ್‌ನಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಉಚಿತವಾಗಿ ಓಡಾಟ ನಡೆಸಿದ್ದು,ಸರ್ಕಾರ 1.77 ಕೋಟಿ ಕೆಎಸ್‌ಆರ್‌ಟಿಸಿಗೆ ಹಣ ಭರಿಸಿದೆ. ಚಾಮರಾಜನಗರ, ಗುಂಡ್ಲುಪೇಟೆ ಉಪ ವಿಭಾಗದಲ್ಲಿ 57 ಸಾವಿರಕ್ಕೂ ಹೆಚ್ಚು ಮನೆಗಳಿಗೆ ಉಚಿತ ವಿದ್ಯುತ್ ನೀಡಲಾಗಿದೆ. ಉಚಿತ ವಿದ್ಯುತ್ ಗೆ ಸರ್ಕಾರವೇ ಹಣವನ್ನು ಭರಿಸಿದೆ. ಅಲ್ಲದೆ,ಅನ್ನ ಭಾಗ್ಯ ಯೋಜನೆಯಲ್ಲಿ 2.59 ಲಕ್ಷ ಪಡಿತರ ಚೀಟಿದಾರರ ಖಾತೆಗೆ 5 ಕೆಜಿ ಅಕ್ಕಿ ಬದಲಾಗಿ ಹಣ ನೀಡಲಾಗಿದೆ. ಯುವನಿಧಿ, ಗೃಹಲಕ್ಷ್ಮೀ ಯೋಜನೆಗಳಲ್ಲೂ ಫಲಾನುಭವಿಗಳಿಗೆ ಹಣ ಬರುತ್ತಿದೆ, ಕೆಲವರಿಗೆ ತಾಂತ್ರಿಕ ಸಮಸ್ಯೆಯಿಂದ ಹಣ ಬಂದಿಲ್ಲ, ತಾಂತ್ರಿಕ ಸಮಸ್ಯೆ ಬಗೆಹರಿಸಿದ ನಂತರ ಎಲ್ಲಾ ಗೃಹಲಕ್ಷ್ಮೀಯರ ಖಾತೆಗೆ ಹಣ ಜಮಾ ಆಗಲಿದೆ ಎಂದರು.ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಕೆ.ಎನ್.ಪ್ರದೀಪ್ ಕುಮಾರ್(ದೀಪು ಕಬ್ಬಹಳ್ಳಿ), ಸ್ತ್ರೀ ಶಕ್ತಿ ಒಕ್ಕೂಟದ ಅಧ್ಯಕ್ಷೆ ದ್ರಾಕ್ಷಾಯಣಮ್ಮ,ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿ ಎಂ.ಹೇಮಾವತಿ ಮಾತನಾಡಿದರು.
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್‌ಆರ್‌ಎಸ್ ರಾಜಶೇಖರ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸದಸ್ಯರಾದ ಉಮಾಪತಿ, ಎಂ.ಪ್ರದೀಪ್, ತಹಸೀಲ್ದಾರ್ ಟಿ.ರಮೇಶ್ ಬಾಬು, ಎಪಿಎಂಸಿ ಅಧ್ಯಕ್ಷ ಮೊಳ್ಳಯ್ಯನಹುಂಡಿ ಬಸವರಾಜು, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪಿ.ಬಿ.ರಾಜಶೇಖರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಮಂಜುನಾಥ್ ಸೇರಿ ತಾಲೂಕು ಮಟ್ಟದ ಕೆಲ ಅಧಿಕಾರಿಗಳಿದ್ದರು.ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ವಿತರಣೆ:
ಮೇಲ್ವಿಚಾರಕಿಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಸ್ಮಾರ್ಟ್ ಫೋನ್ ವಿತರಿಸಿದರು. ಅಲ್ಲದೆ ನಿವೃತ್ತಿಗೊಂಡ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕರಿಯರಿಗೆ ಬೀಳ್ಕೊಟ್ಟು ಸನ್ಮಾನಿಸಿದರು.ನಂತರ ಶಾಸಕರು ಮಾತನಾಡಿ, ಮುಖ್ಯಮಂತ್ರಿಯವರನ್ನು ಆಹ್ವಾನಿಸಿ ಮುಂದಿನ ದಿನಗಳಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ನಡೆಸುವ ಉದ್ದೇಶವಿದೆ ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಹೇಳಿದರು. ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ,ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಚಾಚು ತಪ್ಪದೇ ಅನುಷ್ಠಾನಗೊಳಿಸಿದ್ದಾರೆ. ಮುಖ್ಯಮಂತ್ರಿ,ಉಪ ಮುಖ್ಯಮಂತ್ರಿಗಳಿಗೆ ಸಚಿವ ಸಂಪುಟದ ಸದಸ್ಯರು, ಶಾಸಕರು ಕೈ ಜೋಡಿಸಿದ್ದ ಕಾರಣ ರಾಜ್ಯದಲ್ಲಿ ಐದು ಗ್ಯಾರಂಟಿಗಳು ಜಾರಿಗೆ ಬರಲ್ಲ ಎನ್ನುತ್ತಿದ್ದವರಿಗೆ ಗ್ಯಾರಂಟಿ ಅನುಷ್ಠಾನಗೊಳಿಸುವ ಮೂಲಕ ಉತ್ತರ ನೀಡಲಾಗಿದೆ ಎಂದು ಬಿಜೆಪಿಗೆ ಟಾಂಗ್ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಗುಂಡ್ಲುಪೇಟೆಗೆ ಕರೆಯಿಸಿ, ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಮಾಡಬೇಕೆಂಬ ಆಸೆ ಇದೆ ಎಂದರು.
ಇದೇ ವೇಳೆ ತಾಲೂಕಿನ ಅಂಗನವಾಡಿ ಕೇಂದ್ರಗಳಲ್ಲಿ ನಡೆದ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಶಾಸಕರು ನೆನಪಿನ ಕಾಣಿಕೆ ನೀಡಿ ಶುಭ ಹಾರೈಸಿದರು.