ಗ್ರಾಮಾಭಿವೃದ್ಧಿಗೆ ಗ್ರಾಪಂ ಸದಸ್ಯರ ಕಾಳಜಿ ಅಗತ್ಯ

KannadaprabhaNewsNetwork |  
Published : Dec 21, 2023, 01:15 AM IST
ದೊಡ್ಡಬಳ್ಳಾಪುರದಲ್ಲಿ ನಡೆದ ಗ್ರಾಪಂ ಅಧ್ಯಕ್ಷರು, ಪಿಡಿಓಗಳ ತರಬೇತಿ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಚಾಲನೆ ನೀಡಿದರು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ಸಮಾಜದ ಕಟ್ಟಕಡೆಯ ವ್ಯಕ್ತಿಗೂ ‌ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮಾನತೆ ಸಿಗುವಂತಾಗಬೇಕು. ಪಂಚಾಯತಿಯ ಅಧ್ಯಕ್ಷರು, ಅಧಿಕಾರಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸುವ ಮೂಲಕ ಗ್ರಾಮ ಪಂಚಾಯತಿಗಳನ್ನು ಅಭಿವೃದ್ಧಿಯತ್ತ ಕೊಂಡೊಯ್ಯಬೇಕು ಎಂದು ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು.

ದೊಡ್ಡಬಳ್ಳಾಪುರ: ಸಮಾಜದ ಕಟ್ಟಕಡೆಯ ವ್ಯಕ್ತಿಗೂ ‌ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮಾನತೆ ಸಿಗುವಂತಾಗಬೇಕು. ಪಂಚಾಯತಿಯ ಅಧ್ಯಕ್ಷರು, ಅಧಿಕಾರಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸುವ ಮೂಲಕ ಗ್ರಾಮ ಪಂಚಾಯತಿಗಳನ್ನು ಅಭಿವೃದ್ಧಿಯತ್ತ ಕೊಂಡೊಯ್ಯಬೇಕು ಎಂದು ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ವತಿಯಿಂದ‌ ದೊಡ್ಡಬಳ್ಳಾಪುರದ ನಗರ ಹೊರವಲಯದಲ್ಲಿರುವ ವಿದ್ಯಾದಾನ್ ಶಾಲೆ ಮುಂಭಾಗದಲ್ಲಿರುವ ಲೋಟಸ್ ಅರೇನಾದಲ್ಲಿ ಬುಧವಾರ ನಡೆದ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರಿಗೆ, ಉಪಾಧ್ಯಕ್ಷರಿಗೆ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಒಂದು ದಿನದ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮೂಲಭೂತವಾಗಿ ಗ್ರಾಮಗಳು ಅಭಿವೃದ್ಧಿಯಾಗಬೇಕಾದರೆ ಪಂಚಾಯತಿಯ ಚುನಾಯಿತ ಪ್ರತಿನಿಧಿಗಳ ಪ್ರಮುಖ ಪಾತ್ರವಿದೆ. ಗ್ರಾಮ ಸ್ವರಾಜ್ಯ ಮಹಾತ್ಮ ಗಾಂಧೀಜಿಯವರ ಕನಸಾಗಿತ್ತು. ಗ್ರಾಮಗಳ ಅಭಿವೃದ್ಧಿಯಿಂದಲೇ ದೇಶದ ಅಭಿವೃದ್ಧಿ ಸಾಧ್ಯ. ಸ್ವದೇಶಿ ಉತ್ಪನ್ನಗಳನ್ನು ತಯಾರಿಸಿ ಸ್ವಾವಲಂಬಿಗಳಾಗಿ ಬೇರೆಯವರ ಮೇಲೆ ಅವಲಂಬಿತರಾಗದೆ ಬದುಕಬೇಕು ಎಂದರು.

ಶಾಲೆ-ಕೆರೆಗಳ ಅಭಿವೃದ್ದಿಗೆ ಒತ್ತು:

ದೇಶದ ಸ್ವಾತಂತ್ರ್ಯಕ್ಕೆ ಅನೇಕ ಮಹನೀಯರು ಪ್ರಾಣ ಬಲಿದಾನ ನೀಡಿ ಸ್ವಾತಂತ್ರ್ಯ ತಂದುಕೊಟ್ಟರು. ಸ್ವಾತಂತ್ರ್ಯ ಎಂದರೆ ಯಾರ ಮೇಲು ಅವಲಂಬನೆಯಾಗದೆ ಬದುಕುವುದು. ಗ್ರಾಮಗಳಲ್ಲಿನ ಕೆರೆಗಳ ಅಭಿವೃದ್ಧಿಗೆ ಶ್ರಮಿಸಬೇಕು. ನರೇಗಾ ಕೆಲಸಗಳು ಪ್ರಾಮಾಣಿಕವಾಗಿ ನಡೆಯಬೇಕು. ಗ್ರಾಮ ಪಂಚಾಯತಿ ನಮ್ಮದೆಂಬ ಭಾವನೆಯಿಂದ ಅದನ್ನು ಅಭಿವೃದ್ಧಿ ಪಡಿಸಲು ಒಗ್ಗೂಡಿ ಚಿಂತನೆ ನಡೆಸಬೇಕು. ಶಾಲೆಗಳ‌ ಅಭಿವೃದ್ಧಿ ಜೊತೆಗೆ ಕೆರೆಗಳ ಅಭಿವೃದ್ಧಿಯು ಬಹಳ ಮುಖ್ಯ. ಒಟ್ಟಾರೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ವೋತೋಮುಖ ಅಭಿವೃದ್ಧಿಗೆ ಶ್ರಮ ವಹಿಸಲಾಗುವುದು. ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ಅಭಿವೃದ್ಧಿಯನ್ನು ಪರಿಶೀಲನೆ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.

ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜ್ ಮಾತನಾಡಿ, ಗ್ರಾಮದ ಜನರಿಗೆ ಮೂಲಭೂತ ಸೌಕರ್ಯಗಳ ಒದಗಿಸುವುದು ಗ್ರಾಮ ಪಂಚಾಯತಿಗಳ ಕರ್ತವ್ಯ. ಗ್ರಾಮದ ಹಿತಾಸಕ್ತಿಗೆ ಅಧ್ಯಕ್ಷರು, ಉಪಾಧ್ಯಕ್ಷರು, ಅಧಿಕಾರಿಗಳ ಪಾತ್ರ ಬಹುಮುಖ್ಯ. ಗ್ರಾಮ ಪಂಚಾಯತಿ ಮಟ್ಟದಲ್ಲಿ ಸಮಸ್ಯೆ ಬಗೆಹರಿದರೆ ತಾಲ್ಲೂಕು ಮಟ್ಟದಲ್ಲಿ ಜನರ ಅಲೆದಾಟ ತಪ್ಪುತ್ತದೆ. ರೈತರ, ಜನಸಾಮಾನ್ಯರ ಸಮಸ್ಯೆಗೆ ಸಕಾರಾತ್ಮಕವಾಗಿ ಸ್ಪಂದಿಸಿ. ಜನಸ್ನೇಹಿ ಆಡಳಿತ ನೀಡಿ. ಸಾರ್ವಜನಿಕ ಪರವಾಗಿ ಕೆಲಸ ಮಾಡಿ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಅ.ದೇವೇಗೌಡ ಮಾತನಾಡಿ, ಡಾ.ಬಿ.ಆರ್ ಅಂಬೇಡ್ಕರ್ ಅವರು ರೂಪಿಸಿದ ಸಂವಿಧಾನದಿಂದ ಮಹಿಳೆಯರಿಗೆ ಸೇರಿದಂತೆ ಎಲ್ಲರಿಗೂ ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನ ಸಿಗುತ್ತಿದೆ. ಅಧಿಕಾರಿಗಳು, ಅಧ್ಯಕ್ಷರುಗಳು ಸಮನ್ವಯ ಸಾಧಿಸಿ ಕಾನೂನಿನ ಚೌಕಟ್ಟಿನಲ್ಲಿ ಕೆಲಸ ಮಾಡಬೇಕು. ಗ್ರಾಮ ಪಂಚಾಯತಿಗೆ ಹೆಚ್ಚಿನ ಅಧಿಕಾರವನ್ನು ಸರ್ಕಾರ ನೀಡಿದೆ. ಭಾರತದ ನಿಜವಾದ ಶಕ್ತಿ ಗ್ರಾಮಗಳು. ಗ್ರಾಮಗಳ ಅಭಿವೃದ್ಧಿಯಿಂದ ದೇಶದ ಅಭಿವೃದ್ಧಿ ಸಾದ್ಯ. ಇದು ಮಹಾತ್ಮ ಗಾಂಧೀಜಿಯವರ ಕನಸು. ಕನ್ನಡ ಶಾಲೆಯ ಉಳಿವಿಗೆ ಶ್ರಮ ವಹಿಸಿ ಕನ್ನಡ ಭಾಷೆಯನ್ನು ಬಳಸಬೇಕು. ಭಾರತದ ಆತ್ಮ ಗ್ರಾಮಗಳು. ಸ್ವಚ್ಚ ಭಾರತಕ್ಕೆ ಒತ್ತು ನೀಡಿ ಗ್ರಾಮದ ಸ್ವಚ್ಚತೆಗೆ ಆದ್ಯತೆ ನೀಡಿ ಎಂದು ಅವರು ಹೇಳಿದರು.ಕಾರ್ಯಕ್ರಮದಲ್ಲಿ 5ನೇ ಹಣಕಾಸು ಆಯೋಗದ ಅಧ್ಯಕ್ಷ ಸಿ.ನಾರಾಯಣಸ್ವಾಮಿ, ಉಮಾ ಮಹದೇವನ್, ಅಪರ ಮುಖ್ಯ ಕಾರ್ಯದರ್ಶಿಗಳು ಗ್ರಾಮೀಣಾಭಿವೃದ್ಧಿ ಇಲಾಖೆ, ಪವನ್ ಕುಮಾರ್ ಮಾಲಾಪತಿ ಆಯುಕ್ತರು ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ, ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್, ಜಿಪಂ ಸಿಇಒ ಡಾ‌.ಕೆ.ಎನ್ ಅನುರಾಧ, ಜಿಪಂ ಉಪಕಾರ್ಯದರ್ಶಿ ಟಿ.ಕೆ ರಮೇಶ್, ದೊಡ್ಡಬಳ್ಳಾಪುರ ತಹಸೀಲ್ದಾರ್ ವಿದ್ಯಾ ವಿಭಾ ರಾಥೋಡ್, ತಾಪಂ ಇಒ ಮುನಿರಾಜು, ಜಿಲ್ಲಾ ಮಟ್ಟದ ಅಧಿಕಾರಿಗಳು, ಕೊನಘಟ್ಟ ಗ್ರಾಪಂ ಅಧ್ಯಕ್ಷರಾದ ಮಂಗಳ ಮಂಜುನಾಥ್, ಉಪಾಧ್ಯಕ್ಷರಾದ ಪುಷ್ಪ ಶಿವಕುಮಾರ್, ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಪಿಡಿಒಗಳು ಉಪಸ್ಥಿತರಿದ್ದರು.20ಕೆಡಿಬಿಪಿ1- ದೊಡ್ಡಬಳ್ಳಾಪುರದಲ್ಲಿ ನಡೆದ ಗ್ರಾಪಂ ಅಧ್ಯಕ್ಷರು, ಪಿಡಿಒಗಳ ತರಬೇತಿ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಚಾಲನೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ