ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ನಲಿನ್ ಅತುಲ್ಕನ್ನಡಪ್ರಭ ವಾರ್ತೆ ಕೊಪ್ಪಳ
ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಲ್ಲಿ ಜಮೀನು, ನಿವೇಶನಗಳ ಅವಶ್ಯಕತೆ ಮತ್ತು ಸಮಸ್ಯೆಗಳ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅಂತರ ಇಲಾಖೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗದಗ-ವಾಡಿ ರೈಲು ಮಾರ್ಗ ನಿರ್ಮಾಣ ವೇಳೆಯಲ್ಲಿ ಕುಷ್ಟಗಿ ಪಟ್ಟಣದ ಶಾಲೆಯೊಂದಕ್ಕೆ ಹಾನಿಯಾಗಿದ್ದು, ಹಾನಿಯಾದ ವೆಚ್ಚವನ್ನು ಭರಿಸುವ ಬದಲಾಗಿ ನಮಗೆ ಹೊಸ ಕಟ್ಟಡವನ್ನು ನಿರ್ಮಿಸಿಕೊಡಿ. ಇದರಂತೆ ಇನ್ನು ಮುಂದೆಯೂ ಯಾವುದೇ ಸರ್ಕಾರಿ ಕಟ್ಟಡಕ್ಕೆ ಕಾಮಗಾರಿ ಸಂದರ್ಭದಲ್ಲಿ ಹಾನಿಯಾದಲ್ಲಿ ರೈಲ್ವೆ ಇಲಾಖೆಯೇ ಕಟ್ಟಡ ಮರು ನಿರ್ಮಿಸಿಕೊಡಬೇಕು ಎಂದು ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆಯನ್ನು ರೈಲ್ವೆ ಇಲಾಖೆ ಅಧಿಕಾರಿಗಳಿಗೆ ನೀಡಿದರು.
ಜಿಲ್ಲೆಯ ಕೊಪ್ಪಳ ಮತ್ತು ಕುಷ್ಟಗಿ ತಾಲೂಕುಗಳಲ್ಲಿ ಶಾಶ್ವತ ಹೆಲಿಪ್ಯಾಡ್ ನಿರ್ಮಾಣಕ್ಕೆ ಜಮೀನು ಗುರುತಿಸಿ ವರದಿ ತಯಾರಿಸಲು ಆಯಾ ತಹಸೀಲ್ದಾರರು ಕೂಡಲೇ ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರ ಸ್ಥಾಪಿಸಲು ಜಮೀನು ಗುರುತಿಸಬೇಕು. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಅಧೀನದಲ್ಲಿ ಬರುವ ವಸತಿ ಶಾಲೆ, ವಸತಿ ನಿಲಯಗಳ ಕಟ್ಟಡ ನಿರ್ಮಾಣಕ್ಕಾಗಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಗನವಾಡಿ ಕಟ್ಟಡ ನಿರ್ಮಾಣಕ್ಕಾಗಿ ಆಯಾ ಇಲಾಖೆಗಳಿಂದ ಬರುವ ಪ್ರಸ್ತಾವನೆಗಳನ್ನು ಪರಿಶೀಲಿಸಿ ಜಮೀನು, ನಿವೇಶನ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ರಾಷ್ಟ್ರೀಯ ಹೆದ್ದಾರಿ ಹಾಗೂ ರೈಲ್ವೆ ಕಾಮಗಾರಿಗಳಲ್ಲಿ ಭೂಸ್ವಾಧೀನ ಪಡಿಸಿಕೊಂಡ ಜಮೀನಿನ ರೈತರಿಗೆ ನಿಗದಿತ ಅವಧಿಯಲ್ಲಿ ಪರಿಹಾರ ಮೊತ್ತ ದೊರೆಯಬೇಕು. ರೈಲ್ವೆ ಲೆವೆಲ್ ಕ್ರಾಸಿಂಗ್ ಕಾಮಗಾರಿಗಾಗಿ ಸಾರ್ವಜನಿಕರಿಗೆ ಅನಗತ್ಯ ತೊಂದರೆ ಉಂಟು ಮಾಡದೆ, ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು. ಕಾಮಗಾರಿಗಾಗಿ ತೆಗೆದ ಹೊಂಡಗಳಿಗೆ ಸಾರ್ವಜನಿಕರಿಗೆ ಅಪಾಯವಾಗದ ರೀತಿಯಲ್ಲಿ ಫೆನ್ಸಿಂಗ್ ಅಥವಾ ಸೂಕ್ತ ಸೂಚನಾ ಫಲಕಗಳನ್ನು ಅಳವಡಿಸಬೇಕು ಎಂದು ಜಿಲ್ಲಾಧಿಕಾರಿ ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ತಿಳಿಸಿದರು.
ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆ, ಹೆಚ್ಚುವರಿ ಎಸ್‌ಪಿ ಹೇಮಂತಕುಮಾರ ಎನ್., ತಹಸೀಲ್ದಾರ ವಿಠ್ಠಲ ಚೌಗಲಾ ಉಪಸ್ಥಿತರಿದ್ದರು.