ಸಂವಿಧಾನ ನಮಗೆಲ್ಲರಿಗೂ ಶ್ರೀರಕ್ಷೆ: ಬಿ.ನಾಗೇಂದ್ರ

KannadaprabhaNewsNetwork | Published : Apr 15, 2025 12:47 AM

ಸಾರಾಂಶ

ಭಾರತ ರತ್ನ, ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನವು ಪ್ರತಿಯೊಬ್ಬರಿಗೂ ಶ್ರೀರಕ್ಷೆಯಾಗಿದೆ.

ಬಳ್ಳಾರಿಯಲ್ಲಿ ಸಂಭ್ರಮದ ಡಾ. ಬಿ.ಆರ್. ಅಂಬೇಡ್ಕರ್ ಅವರ 134ನೇ ಜನ್ಮದಿನೋತ್ಸವಕನ್ನಡಪ್ರಭ ವಾರ್ತೆ ಬಳ್ಳಾರಿ

ಭಾರತ ರತ್ನ, ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನವು ಪ್ರತಿಯೊಬ್ಬರಿಗೂ ಶ್ರೀರಕ್ಷೆಯಾಗಿದೆ ಎಂದು ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ ಹೇಳಿದರು.ಜಿಲ್ಲಾಡಳಿತ, ಜಿಪಂ, ಸಮಾಜ ಕಲ್ಯಾಣ ಇಲಾಖೆ ಮತ್ತು ಮಹಾನಗರ ಪಾಲಿಕೆ ಇವುಗಳ ಸಂಯುಕ್ತಾಶ್ರಯದಲ್ಲಿ ನಗರದ ಡಾ.ರಾಜ್ ಕುಮಾರ್ ರಸ್ತೆಯ ಮುನಿಸಿಪಲ್ ಕಾಲೇಜು ಮೈದಾನದಲ್ಲಿ ಸೋಮವಾರ ಆಯೋಜಿಸಿದ್ದ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ 134 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.ತುಳಿತಕ್ಕೊಳಗಾದವರನ್ನು ಮುಖ್ಯ ವಾಹಿನಿಗೆ ತರಲು ಅಂಬೇಡ್ಕರ್ ಅವರು ತಮ್ಮ ಜೀವನವನ್ನೇ ಮುಡಿಪಾಗಿಟ್ಟು, ಹಗಲು-ರಾತ್ರಿ ಎನ್ನದೇ ಶ್ರಮಿಸಿ ಅಪಾರ ಜ್ಞಾನ ಹೊಂದಿ ಸಂವಿಧಾನವನ್ನೆ ನಮಗೆ ಅರ್ಪಿಸಿದ್ದಾರೆ. ಅಂಬೇಡ್ಕರ್ ಅವರ ತತ್ವಾದರ್ಶ ಜೀವನ ಎಲ್ಲರಿಗೂ ಮಾದರಿಯಾಗಬೇಕು ಎಂದು ತಿಳಿಸಿದರು.ನಮ್ಮ ಸರ್ಕಾರದ ₹4 ಲಕ್ಷ ಕೋಟಿ ಬಜೆಟ್‌ನಲ್ಲಿ ₹38 ಸಾವಿರ ಕೋಟಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದವರ ಅಭಿವೃದ್ಧಿಗಾಗಿ ಮೀಸಲಿರಿಸಲಾಗಿದೆ. ಬಾಬಾ ಸಾಹೇಬರ ಕೊಡುಗೆ, ವಿಚಾರಧಾರೆಗಳನ್ನು ಮುಂದಿನ ಪೀಳಿಗೆಗೆ ತಿಳಿಸಿಕೊಡುವ ಕೊಡುವ ಕೆಲಸವಾಗಬೇಕಿದೆ ಎಂದು ಅಭಿಪ್ರಾಯಪಟ್ಟ ಶಾಸಕರು, ಬಳ್ಳಾರಿ ಜಿಲ್ಲೆಯ ಅಭಿವೃದ್ಧಿಗೆ ನಾವೆಲ್ಲರೂ ಒಗ್ಗಟ್ಟಾಗಿ ಶ್ರಮಿಸೋಣ ಎಂದು ಕರೆ ನೀಡಿದರು.ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಡಾ. ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ ಮಾತನಾಡಿದರು.

ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಡಾ. ಬಿ.ಆರ್. ಅಂಬೇಡ್ಕರ್ ಬಹುಶಿಸ್ತೀಯ ಸಂಶೋಧನಾ ಕೇಂದ್ರದ ನಿರ್ದೇಶಕ ಡಾ. ಗೌರಿ ಮಾಣಿಕ್ ಮಾನಸ್ ಡಾ. ಬಿ.ಆರ್. ಅಂಬೇಡ್ಕರ್ ಕುರಿತು ವಿಶೇಷ ಉಪನ್ಯಾಸ ನೀಡಿದರು.ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಎನ್. ಸಂವಿಧಾನ ಪೀಠಿಕೆ ವಾಚಿಸಿದರು.ಗಣ್ಯರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಉದ್ಘಾಟಿಸಿದರು.ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯಡಿ ಬರುವ ವಸತಿ ನಿಲಯಗಳಲ್ಲಿ ವಿದ್ಯಾಭ್ಯಾಸ ಹೊಂದಿ ಕಳೆದ ಸಾಲಿನಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.ಬಳಿಕ ಸಮಾಜ ಕಲ್ಯಾಣ ಇಲಾಖೆ ವತಿಯಿಂದ 60 ದಿನಗಳ ಹೊಲಿಗೆಯಂತ್ರ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಹೊಲಿಗೆ ಯಂತ್ರ ಮತ್ತು ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.ಈ ಸಂದರ್ಭ ಮಹಾನಗರ ಪಾಲಿಕೆಯ ಮಹಾಪೌರ ಮುಲ್ಲಂಗಿ ನಂದೀಶ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಕೆ.ಇ.ಚಿದಾನಂದಪ್ಪ, ಜಿಲ್ಲಾ ಡಾ. ಬಿ.ಆರ್. ಅಂಬೇಡ್ಕರ್ ಸಂಘದ ಅಧ್ಯಕ್ಷ ಬಿ.ಕೆ.ಅನಂತ ಕುಮಾರ್, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾರಾಣಿ ವಿ.ಜೆ., ಜಿಪಂ ಸಿಇಒ ಮಹಮ್ಮದ್ ಹ್ಯಾರೀಸ್ ಸುಮೈರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ಬಿ. ಸೇರಿದಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು ಹಾಗೂ ಸಾರ್ವಜನಿಕರು, ಮತ್ತಿತರರು ಉಪಸ್ಥಿತರಿದ್ದರು.

ಅದ್ಧೂರಿ ಸ್ತಬ್ಧಚಿತ್ರ ಮೆರವಣಿಗೆ:ಅಂಬೇಡ್ಕರ್ ಜನ್ಮ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಮೆರವಣಿಗೆಯು ವಿವಿಧ ಸಾಂಸ್ಕೃತಿಕ ಕಲಾ ತಂಡಗಳನ್ನೊಳಗೊಂಡು ನಗರದಲ್ಲಿ ಅದ್ಧೂರಿಯಾಗಿ ನಡೆಯಿತು.ಸಾರಿಗೆ ಇಲಾಖೆಯಿಂದ ರೂಪಿಸಿದ್ದ ವಿಧಾನಸೌಧ ಸ್ತಬ್ಧಚಿತ್ರ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ವತಿಯಿಂದ ವಿವಿಧ ಸರ್ಕಾರದ ಕಾರ್ಯಕ್ರಮಗಳು ಮತ್ತು ವಿವಿಧ ಯೋಜನೆಗಳ ಮಾಹಿತಿ ಕುರಿತ ಸ್ತಬ್ಧಚಿತ್ರಗಳು ಗಮನ ಸೆಳೆದವು.ಮೆರವಣಿಗೆಗೆ ಮುನ್ನ ನಗರದ ಮೊದಲನೇ ರೈಲ್ವೇ ಗೇಟ್ ಬಳಿಯ ಸಮಾಜ ಕಲ್ಯಾಣ ಇಲಾಖೆಯ ಅಂಬೇಡ್ಕರ್ ಭವನ ಆವರಣದ ಡಾ. ಬಿ.ಆರ್. ಅಂಬೇಡ್ಕರ್ ಪುತ್ಥಳಿಗೆ ಗಣ್ಯರು ಮಾಲಾರ್ಪಣೆ ಮಾಡಿದರು.ಮೆರವಣಿಗೆಯು ನಗರದ ಡಾ. ರಾಜ್ ಕುಮಾರ್ ರಸ್ತೆಯ ಮುನ್ಸಿಪಾಲ್ ಕಾಲೇಜು ಮೈದಾನದಿಂದ ಆರಂಭವಾಗಿ ಗಡಿಗಿ ಚೆನ್ನಪ್ಪ ವೃತ್ತ, ಬೆಂಗಳೂರು ರಸ್ತೆ, ಬ್ರೂಸ್ ಪೇಟೆ ಪೋಲಿಸ್ ಠಾಣೆ, ಎಚ್.ಆರ್. ಗವಿಯಪ್ಪ ವೃತ್ತದ ಮೂಲಕ ರೈಲ್ವೇ ಸ್ಟೇಷನ್ ರಸ್ತೆ ಮೂಲಕ ಮರಳಿ ಮುನಿಸಿಪಲ್ ಕಾಲೇಜು ಮೈದಾನದ ವೇದಿಕೆ ಸಭಾಂಗಣಕ್ಕೆ ತಲುಪಿ ಸಂಪನ್ನಗೊಂಡಿತು.

ಆಕರ್ಷಕ ಬೈಕ್ ರ‍್ಯಾಲಿ:

ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅಂಗವಾಗಿ ನಗರದಲ್ಲಿ ಆಕರ್ಷಕ ಬೈಕ್ ರ‍್ಯಾಲಿ ನಡೆಯಿತು.ನೀಲಿ ಬಾವುಟಗಳನ್ನು ಹಿಡಿದು ಶಾಸಕರಾದ ಬಿ.ನಾಗೇಂದ್ರ, ನಾರಾ ಭರತ್ ರೆಡ್ಡಿ ಮತ್ತು ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ ಮೊದಲಾದವರು ಸೇರಿದಂತೆ ನಗರದ ಶಾಸಕರ ಕಚೇರಿಯಿಂದ ಡಾ. ಬಿ.ಆರ್.ಅಂಬೇಡ್ಕರ್ ಭವನದವರೆಗೆ ಬೈಕ್ ರ‍್ಯಾಲಿ ನಡೆಯಿತು.

Share this article