ಮಣಿಪಾಲ: ನಮ್ಮೆಲ್ಲರ ಬದುಕು ದೇಶದ ಸಂವಿಧಾನವನ್ನು ಅವಲಂಬಿಸಿದೆ. ಆಚಾರ-ವಿಚಾರ, ಭಾಷೆ, ಜಾತಿ-ಮತ, ಆಹಾರ ಪದ್ಧತಿಗಳಲ್ಲಿ ಭಿನ್ನತೆ ಇದ್ದರೂ, ನಮ್ಮ ದೇಶವು ವಿವಿಧತೆಯಲ್ಲಿ ಏಕತೆಯನ್ನು ಹೊಂದಿದ್ದರೆ ಅದಕ್ಕೆ ನಮ್ಮ ಸಂವಿಧಾನವೇ ಕಾರಣ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಹೇಳಿದರು.
ಜನರ ಸಮಸ್ಯೆಗಳನ್ನು ಆಲಿಸಲು ಅವರ ಆಸೆ-ಆಕಾಂಕ್ಷೆಗಳನ್ನು ಪೂರೈಸಲು ಸಂವಿಧಾನವು ಜನಪ್ರತಿನಿಧಿಗಳಿಗೆ ಅವಕಾಶ ನೀಡಿದ್ದು, ಇಂದಿನ ಬಹಳಷ್ಟು ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ರಾಜಕೀಯ ಕ್ಷೇತ್ರವನ್ನು ಪ್ರವೇಶಿಸಬಹುದು, ಯುವ ಸಂಸತ್ ಕಾರ್ಯಕ್ರಮವು ಅದಕ್ಕೆ ವೇದಿಕೆಯಾಗಲಿ ಎಂದು ಹಾರೈಸಿದರು.ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಿದ್ದರು, ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್, ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನಿತಿನ್ ವೈ. ರಾವ್, ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್ ಉಪಸ್ಥಿತರಿದ್ದರು.
ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಸಂವಿಧಾನದ ಪೀಠಿಕೆ ಬೋಧಿಸಿದರು. ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಡ್ಲೂರು ಸ್ವಾಗತಿಸಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಶನ್ ಕುಮಾರ್ ಶೆಟ್ಟಿ ನಿರೂಪಿಸಿ ವಂದಿಸಿದರು.