ಹುಬ್ಬಳ್ಳಿ:
ಇಲ್ಲಿನ ಸ್ಟೇಷನ್ ರಸ್ತೆಯ ಲ್ಯಾಮಿಂಗ್ಟನ್ ಪ್ರೌಢಶಾಲೆಯಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಶಾಲಾ ಶಿಕ್ಷಣ, ಕಾಲೇಜು ಶಿಕ್ಷಣ, ಕಾನೂನು ಸೇವಾ ಸಮಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಯುವ ಸಂಸತ್ತು ಅಧಿವೇಶನ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು.
ಭಾರತದ ಸಂವಿಧಾನ ಪ್ರತಿಯೊಬ್ಬ ಪ್ರಜೆಗೂ ಸಮಾನ ಹಕ್ಕು ಮತ್ತು ಸ್ವಾತಂತ್ರ್ಯ ಕಲ್ಪಿಸಿದೆ ಎಂದ ಅವರು, ಜಾತಿ, ಧರ್ಮ, ಜನಾಂಗ, ಲಿಂಗಭೇದವಿಲ್ಲದೆ ಎಲ್ಲರೂ ಸಮಾನರು ಎಂಬುದು ಪ್ರಜಾಪ್ರಭುತ್ವದ ಆಶಯ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಮತದಾನದ ಹಕ್ಕು ದೊರೆತಿದ್ದು, ಮತದಾರರೇ ಪ್ರಜಾಪ್ರಭುತ್ವದ ನಿಜವಾದ ಶಕ್ತಿಯಾಗಿದ್ದಾರೆ. ಗ್ರಾಮ ಪಂಚಾಯಿತಿ ಸದಸ್ಯರಿಂದ ಪ್ರಧಾನಮಂತ್ರಿ ವರೆಗೆ ಪ್ರತಿನಿಧಿಗಳನ್ನು ಆಯ್ಕೆ ಮಾಡುವ ಅಧಿಕಾರ ಪ್ರಜೆಗಳಿಗಿದೆ. ಪ್ರತಿಯೊಬ್ಬರೂ ಸಂವಿಧಾನದ ಆಶಯಗಳನ್ನು ಪಾಲಿಸಿ, ಭ್ರಷ್ಟಾಚಾರಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಬೇಕು ಎಂದರು.ಯುವ ಸಂಸತ್ತು ವಿದ್ಯಾರ್ಥಿಗಳಲ್ಲಿ ನಾಯಕತ್ವ, ವಾಕ್‌ಚಾತುರ್ಯ ಹಾಗೂ ಚರ್ಚಾ ಕೌಶಲ ಬೆಳೆಸುವ ವೇದಿಕೆಯಾಗಿದೆ. ಭವಿಷ್ಯದ ನಾಯಕರಾಗಿ ಬೆಳೆಯುವ ವಿದ್ಯಾರ್ಥಿಗಳು ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕು. ಡಿ. 2ರಿಂದ ನಡೆಯುವ ಚಳಿಗಾಲದ ಅಧಿವೇಶನ ವೀಕ್ಷಿಸಲು ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗುವುದು ಎಂದರು.
ಡಾ. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ವಿವಿಧ ಇಲಾಖೆಗಳ ಅಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ವನಿತಾ ಆರ್. ನಿರೂಪಿಸಿದರು. ಪ್ರಹ್ಲಾದ ಗೆಜ್ಜಿ ವಂದಿಸಿದರು.