ಯಲಬುರ್ಗಾ: ಕನ್ನಡ ಭಾಷೆಯ ಬೆಳವಣಿಗೆ ಮತ್ತು ಪರಿಚಯವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಹೇಳಿದರು.
ಪಾಲಕರು ತಮ್ಮ ಮಕ್ಕಳಿಗೆ ಮಾತೃಭಾಷೆಯಾದ ಕನ್ನಡದಲ್ಲಿಯೇ ಶಿಕ್ಷಣ ಕೊಡಿಸಲು ಆದ್ಯತೆ ನೀಡಬೇಕು. ಇಂಗ್ಲಿಷ್ ಕಲಿಕೆಗೆ ವಿರೋಧವಿಲ್ಲ, ಅದೊಂದು ಸಂಪರ್ಕ ಭಾಷೆಯಾಗಿ ಇರಲಿ. ಆದರೆ ಇಂಗ್ಲಿಷ್ ಕಲಿಕೆಯ ವ್ಯಾಮೋಹದಿಂದ ಕನ್ನಡವನ್ನು ಕಡೆಗಣಿಸಬಾರದು. ಕನ್ನಡದಲ್ಲಿ ಓದಿದರೆ ಮಕ್ಕಳಿಗೆ ಭವಿಷ್ಯವಿಲ್ಲ ಎಂಬ ಕೀಳರಿಮೆ ಹಾಗೂ ಭ್ರಮೆಯಿಂದ ಪಾಲಕರು ಹೊರಬರಬೇಕು. ಜನರ ಒತ್ತಾಯದ ಮೇರೆಗೆ ಸರ್ಕಾರ ಕನ್ನಡ ಶಾಲೆಗಳಲ್ಲಿಯೂ ಕಾನ್ವೆಂಟ್ ಮಾದರಿಯ ಶಿಕ್ಷಣ ವ್ಯವಸ್ಥೆ ಜಾರಿಗೆ ತರಲಾಗಿದೆ ಎಂದು ತಿಳಿಸಿದರು.
ಹಿರಿಯ ಸಾಹಿತಿ ಕೆ.ಬಿ. ಬ್ಯಾಳಿ ಮಾತನಾಡಿ, ಕನ್ನಡ ಭಾಷೆ ಉಳಿಸುವ ಜತೆಗೆ ಕನ್ನಡ ಶಾಲೆಗಳನ್ನು ಸಂರಕ್ಷಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.ಹಿರಿಯ ಪತ್ರಕರ್ತ ಹಾಗೂ ಸಾಹಿತಿ ಬಸವರಾಜ ಬಿನ್ನಾಳ ಅವರು ಸರ್ವಾಧ್ಯಕ್ಷರ ಪರಿಚಯ ನುಡಿ ಹೇಳಿದರು. ಕಸಾಪ ಜಿಲ್ಲಾಧ್ಯಕ್ಷ ಶರಣೇಗೌಡ ಪೊಲೀಸ್ ಪಾಟೀಲ್ ಪ್ರಾಸ್ತಾವಿಕವಾಗಿ ಮಾತನಾಡಿದರು.ಗೌರವ ಸನ್ಮಾನ ಬೇಡ-ರಾಯರಡ್ಡಿ: ತೊಂಡಿಹಾಳದಲ್ಲಿ ನಡೆದ ತಾಲೂಕು ಮಟ್ಟದ ೧೪ನೇ ಸಾಹಿತ್ಯ ಸಮ್ಮೇಳನದಲ್ಲಿ ಕಸಾಪ ತಾಲೂಕು ಘಟಕದಿಂದ ಸಚಿವರನ್ನು ಸನ್ಮಾನಿಸಲು ಮುಂದಾದಾಗ ಬಸವರಾಜ ರಾಯರಡ್ಡಿ ತಿರಸ್ಕರಿಸಿದರು. ಈ ವರ್ಷ ತೀವ್ರ ಬರಗಾಲ ಇರುವುದರಿಂದ ಸನ್ಮಾನ ಬೇಡ. ಕೊಪ್ಪಳ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಗಾಲ ಪೀಡಿತ ಪ್ರದೇಶಗಳೆಂದು ಘೋಷಿಸಿ, ರಾಜ್ಯದ ಪ್ರಕೃತಿ ವಿಕೋಪದಡಿ ಪರಿಹಾರ ನೀಡುವ ಉದ್ದೇಶ ಹೊಂದಲಾಗಿದ್ದು, ಈಗಾಗಲೇ ರೈತರ ಖಾತೆಗೆ ₹೫ ಸಾವಿರ ತಾತ್ಕಾಲಿಕ ಪರಿಹಾರ ನೀಡಲಾಗುತ್ತಿದೆ ಎಂದು ರಾಯರಡ್ಡಿ ಹೇಳಿದರು.
ತಾಲೂಕಿನ ತೊಂಡಿಹಾಳದಲ್ಲಿ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದಿಂದ ನಡೆದ ೧೪ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅವರು ಮಾತನಾಡಿದರು. ಸಮತೋಲನ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು. ಕೃಷಿಯೇ ಬದುಕಿಗೆ ದಾರಿದೀಪವಾಗಿದೆ. ರಾಸಾಯನಿಕ ಕೃಷಿ ಪದ್ಧತಿ ಕಡಿಮೆ ಮಾಡಿ ಸಾವಯವ ಕೃಷಿಗೆ ಒತ್ತು ನೀಡುವ ಮೂಲಕ ಭೂಮಿಯ ಫಲವತ್ತತೆ ಕಾಪಾಡಬೇಕು. ಈ ಭಾಗದಲ್ಲಿ ಹಲವು ವರ್ಷಗಳಿಂದ ಮಳೆ ಅಭಾವ ಹಾಗೂ ಬರಗಾಲದ ಸಮಸ್ಯೆ ಎದುರಾಗುತ್ತಿದೆ. ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ರೈತರು ಖಾಸಗಿ ಕಂಪನಿಗಳಿಗೆ ಭೂಮಿ ಮಾರಾಟ ಮಾಡುತ್ತಿರುವುದರಿಂದ ಕೃಷಿಯಿಂದ ವಂಚಿತರಾಗುತ್ತಿದ್ದಾರೆ. ರೈತರ ಬೆಳೆಗಳಿಗೆ ಸಕಾಲದಲ್ಲಿ ಸೂಕ್ತ ಬೆಲೆ ನೀಡುವಲ್ಲಿ ನಿರ್ಲಕ್ಷ್ಯ ವಹಿಸಲಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.