ಕೊಪ್ಪಳ: ಶಿಕ್ಷಣ ಮತ್ತು ಸಂಘಟನೆಯಿಂದ ಮಾತ್ರ ವಾಲ್ಮೀಕಿ ಸೇರಿದಂತೆ ಯಾವುದೇ ಶೋಷಿತ ಸಮುದಾಯಗಳ ಸಮಗ್ರ ಏಳಿಗೆ ಸಾಧ್ಯ. ಕೇವಲ ಸಮುದಾಯ ಭವನಗಳ ನಿರ್ಮಾಣದಿಂದ ಅಭಿವೃದ್ಧಿ ಸಾಧ್ಯವಿಲ್ಲ. ಸಮುದಾಯದ ಜನರು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಿ, ಸಂಘಟಿತರಾಗಿ ಮುನ್ನಡೆಯುವ ಮೂಲಕ ಸಮಾಜದ ಬಲವರ್ಧನೆಗೆ ಶ್ರಮಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.
ಮಹರ್ಷಿ ವಾಲ್ಮೀಕಿ ಅವರು ಕೇವಲ ಒಂದು ಜಾತಿ ಅಥವಾ ಸಮುದಾಯಕ್ಕೆ ಸೀಮಿತವಾದ ಮಹನೀಯರಲ್ಲ. ಇಡೀ ಮಾನವ ಕುಲಕ್ಕೆ ಮಾರ್ಗದರ್ಶನ ನೀಡಿದ ಮಹಾನ್ ಚೇತನ. ರಾಮಾಯಣದಂತಹ ಶ್ರೇಷ್ಠ ಮಹಾಕಾವ್ಯ ರಚಿಸುವ ಮೂಲಕ ಜಗತ್ತಿಗೆ ಮಾನವೀಯ ಮೌಲ್ಯಗಳನ್ನು ಸಾರಿದ್ದಾರೆ. ಅವರ ಆದರ್ಶ, ಚಿಂತನೆ ಹಾಗೂ ಕೊಡುಗೆಗಳನ್ನು ಇಂದಿನ ಯುವಪೀಳಿಗೆಗೆ ತಲುಪಿಸುವ ಕಾರ್ಯವಾಗಬೇಕು. ಜಯಂತಿಗಳು ಕೇವಲ ಆಚರಣೆಗಳಿಗೆ ಸೀಮಿತವಾಗದೆ ಸಮಾಜದ ಪ್ರಗತಿಗೆ ದಿಕ್ಸೂಚಿಯಾಗಬೇಕು ಎಂದರು.
ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಟಿ. ರಘುಮೂರ್ತಿ ಮಾತನಾಡಿ, ಮಹರ್ಷಿ ವಾಲ್ಮೀಕಿ ಅವರು ರಾಮಾಯಣದಂತಹ ಶ್ರೇಷ್ಠ ಗ್ರಂಥ ರಚಿಸುವ ಮೂಲಕ ಜಗತ್ತಿಗೆ ಆದರ್ಶ ಮೌಲ್ಯಗಳನ್ನು ನೀಡಿದ್ದಾರೆ. ಎಸ್ಸಿ, ಎಸ್ಟಿ ಮೀಸಲಾತಿ ಪ್ರಮಾಣ ಹೆಚ್ಚಳವನ್ನು ಸಂವಿಧಾನದ 9ನೇ ಅನುಸೂಚಿಗೆ ಸೇರಿಸುವಂತೆ ಒತ್ತಾಯಿಸಲು ಮುಖ್ಯಮಂತ್ರಿ ನೇತೃತ್ವದಲ್ಲಿ ಕೇಂದ್ರ ಸರ್ಕಾರಕ್ಕೆ ನಿಯೋಗ ಕೊಂಡೊಯ್ಯಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.ರಾಜ್ಯದಲ್ಲಿ ಅರ್ಧಕ್ಕೆ ನಿಂತಿರುವ ವಾಲ್ಮೀಕಿ ಭವನಗಳ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲು ಇಲಾಖೆಯಿಂದ ಅಗತ್ಯ ಅನುದಾನ ಮತ್ತು ಸಹಕಾರ ನೀಡಲಾಗುವುದು. ಬಜೆಟ್ನಲ್ಲಿ ನಿಗದಿಪಡಿಸಿದ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಎಸ್ಸಿ-ಎಸ್ಟಿ ಸಮುದಾಯಗಳ ಅಭಿವೃದ್ಧಿಗೆ ಹೊಸ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದರು.
ಆದಿಕವಿ ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣ ಮಹಾಕಾವ್ಯವು ಒಂದು ಸಮುದಾಯಕ್ಕೆ ಸೀಮಿತವಾಗದೆ ಇಡೀ ಮನುಕುಲಕ್ಕೆ ಮಾರ್ಗದರ್ಶನ ನೀಡುವ ಗ್ರಂಥವಾಗಿದೆ. ರಾಜ್ಯ ಸರ್ಕಾರ ತಾಲೂಕು, ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲಿ ಸಾರ್ವತ್ರಿಕವಾಗಿ ವಾಲ್ಮೀಕಿ ಜಯಂತಿ ಆಚರಿಸುವ ಮೂಲಕ ಮಹಾತ್ಮರಿಗೆ ಗೌರವ ಸಲ್ಲಿಸುತ್ತಿರುವುದು ಶ್ಲಾಘನೀಯ ಎಂದರು.
ಕೊಪ್ಪಳ ಜಿಲ್ಲೆಗೆ ಪ್ರತ್ಯೇಕ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಜಿಲ್ಲಾ ಕಚೇರಿ ಮಂಜೂರು ಮಾಡಬೇಕು. ಗಂಡುಗಲಿ ಕುಮಾರರಾಮ ಅಭಿವೃದ್ಧಿ ಪ್ರಾಧಿಕಾರ ರಚಿಸಬೇಕು. ಭೂ ಒಡೆತನ ಯೋಜನೆಯಡಿ ಪರಿಶಿಷ್ಟ ಪಂಗಡದವರಿಗೆ ಭೂಮಿ ಖರೀದಿಸಲು ಹೆಚ್ಚಿನ ಅನುದಾನ ಒದಗಿಸಬೇಕು ಎಂದು ಸಚಿವರಲ್ಲಿ ಮನವಿ ಮಾಡಿದರು.
ಕಲ್ಯಾಣ ಕರ್ನಾಟಕದ ಹಿಂದುಳಿದ ಜಿಲ್ಲೆಯಾಗಿರುವ ಕೊಪ್ಪಳದಲ್ಲಿ ಪರಿಶಿಷ್ಟ ಪಂಗಡದ ಜನಸಂಖ್ಯೆ ಹೆಚ್ಚಿದೆ. ಹೀಗಾಗಿ ಜನಸಂಖ್ಯೆಗೆ ಅನುಗುಣವಾಗಿ ಯೋಜನೆಗಳ ಗುರಿ ನಿಗದಿಪಡಿಸಬೇಕು. ನಗರದ ಎಲ್ಐಸಿ ಕಚೇರಿ ಮುಂಭಾಗದ ವೃತ್ತಕ್ಕೆ ''ಶ್ರೀ ಮಹರ್ಷಿ ವಾಲ್ಮೀಕಿ ವೃತ್ತ'' ಎಂದು ನಾಮಕರಣ ಮಾಡಿ, ಮೂರ್ತಿ ಪ್ರತಿಷ್ಠಾಪನೆ ಮಾಡಲು ಈ ತಿಂಗಳೊಳಗೆ ಲೋಕೋಪಯೋಗಿ ಇಲಾಖೆಯಿಂದ ಜಾಗವನ್ನು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗೆ ಹಸ್ತಾಂತರಿಸಿ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.