ಕನ್ನಡಪ್ರಭ ವಾರ್ತೆ ಯಾದಗಿರಿ
ಬುಧವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ವಿಪತ್ತು ನಿರ್ವಹಣಾ ಮತ್ತು ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಬಿತ್ತನೆ ಬೀಜ, ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿ ಲಾಭ ಪಡೆಯುವ ಅಂಗಡಿ ಮಾಲೀಕರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.ಬೆಳೆ ಸಮೀಕ್ಷೆ ಕಾರ್ಯದಲ್ಲಿ ರೈತರೇ ಮೊಬೈಲ್ ಆ್ಯಪ್ ಮೂಲಕ ತಮ್ಮ ಬೆಳೆ ಸಮೀಕ್ಷೆ ಮಾಡಬೇಕಾಗಿದ್ದು, ಈ ಕುರಿತು ರೈತರಲ್ಲಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ಮಳೆಯಿಂದಾಗಿ ಹಾನಿಗೊಳಗಾದ ಮನೆಗಳ ನಿರ್ಮಾಣ ಕಾರ್ಯ ಪ್ರಾರಂಭವಾಗದೇ ಇರುವ ಹಾಗೂ ಪ್ರಾರಂಭವಾದರೂ ಇದುವರೆಗೆ ಪ್ರಗತಿಯಾಗದೇ ಇರುವ ಮನೆಗಳ ವರದಿ ನೀಡಬೇಕು. ಅಲ್ಲದೇ, ನಿರಂತರ ಮಳೆಯಿಂದಾಗಿ ಹಾನಿಗೊಳಗಾದ ಮನೆಗಳಿಗೆ ಪರಿಹಾರ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಭೂ ಪರಿವರ್ತನೆ, ನ್ಯಾಯಾಲಯ ಪ್ರಕರಣಗಳನ್ನು ಕಾಲ ಮಿತಿಯೊಳಗೆ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕೆಂದು ನಿರ್ದೇಶನ ನೀಡಿದರು.ಎಲ್ಲಾ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿಯೇ ಇರಬೇಕು. ಸಮಸ್ಯೆ ಕಂಡು ಬಂದಾಗ ಸಂಬಂಧಿಸಿದ ಅಧಿಕಾರಿ ಗೈರಾಗಿದ್ದರೆ ಅದಕ್ಕೆ ಅವರೇ ನೇರ ಹೊಣೆ. ಕುಡಿವ ನೀರು ಪೋಲಾಗದಂತೆ ಎಚ್ಚರಿಕೆವಹಿಸಿ, ನೀರಿನ ಸಮಸ್ಯೆಗೆ ತ್ವರಿತಗತಿಯಲ್ಲಿ ಸ್ಪಂದಿಸಬೇಕು ಎಂದು ತಿಳಿಸಿದರು.
ಪ್ರವಾಹ ಸಂಭವಿಸಬಹುದಾದ ಎಲ್ಲಾ ಗ್ರಾಮಗಳಲ್ಲಿನ ಜಾನುವಾರುಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ಹಾಗೂ ಅವಶ್ಯವಿದ್ದಲ್ಲಿ ಗೋಶಾಲೆಗಳನ್ನು ತೆರೆಯುವುದರ ಕುರಿತು ಪಶು ಸಂಗೋಪನಾ ಮತ್ತು ಪಶು ಸೇವಾ ವೈದ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ಪ್ರವಾಹ ಸಂಭವಿಸಬಹುದಾದ ಗ್ರಾಮಗಳಲ್ಲಿನ ಸೇತುವೆ, ಬ್ರಿಡ್ಜ್ ಹಾಗೂ ಅರಣ್ಯ ಪ್ರದೇಶ ಹತ್ತಿರವಿರುವ ಗ್ರಾಮಗಳಲ್ಲಿ ಪೊಲೀಸ್ ಸಿಬ್ಬಂದಿ ಜೊತೆಗೆ ತಮ್ಮ ಇಲಾಖೆ ಸಿಬ್ಬಂದಿ ನಿಯೋಜಿಸಿ ಮುಂಜಾಗ್ರತೆ ವಹಿಸಲು ತಿಳಿಸಿದರು.
ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್, ಜಂಟಿ ಕೃಷಿ ನಿರ್ದೇಶಕ ಕೆ.ಎಚ್. ರವಿ, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಡಾ. ರಾಜು ದೇಶಮುಖ ಸೇರಿದಂತೆ ಎಲ್ಲಾ ತಾಲೂಕಿನ ತಹಸೀಲ್ದಾರರು ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿ ವರ್ಗದವರು ಇದ್ದರು.