ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ರೈತ ವಿರೋಧಿ ನೀತಿ ಹಾಗೂ ಕಾರ್ಪೊರೇಟ್ ಪರ ಕೆಲಸ ಖಂಡಿಸಿ ಕಾರ್ಮಿಕ ಸಂಘಟನೆ ಕಾರ್ಯಕರ್ತರು ಪಟ್ಟಣದ ತಾಲೂಕು ಪಂಚಾಯ್ತಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭನೆ ನಡೆಸಿದರು.ಪಟ್ಟಣದ ಕುವೆಂಪು ವೃತ್ತದಲ್ಲಿ ಸೇರಿದ ಕಾರ್ಮಿಕ ಸಂಘಟನೆಗಳ ಮುಖಂಡರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಯೊಬ್ಬ ಕಾರ್ಮಿಕನಿಗೆ ದಿನಂಪ್ರತಿ 8 ಗಂಟೆ ಕೆಲಸದ ಅವಧಿ, ಕಾಯಂ ಕೆಲಸ, 36 ಸಾವಿರ ಕನಿಷ್ಠ ವೇತನ ನಿಗದಿಪಡಿಸಬೇಕು. ಗುತ್ತಿಗೆ, ಮುಂತಾದ ಕಾರ್ಮಿಕರಿಗೆ ಸಮಾನ ಕೆಲಸಕ್ಕೆ ಸಮಾನ ವೇತನವನ್ನು ತಕ್ಷಣವೇ ಜಾರಿ ಮಾಡಬೇಕು ಎಂದು ಆಗ್ರಹಿಸಿದರು.ಕಟ್ಟಡ ಕಾರ್ಮಿಕರು, ಆಟೋ-ಟ್ಯಾಕ್ಸಿ ಚಾಲಕರು, ಮನೆ ಕೆಲಸಗಾರರು. ಬಸ್ ಕಾರ್ಮಿಕರು, ಬೀದಿಬದಿ ವ್ಯಾಪಾರಿಗಳು, ಟೈಲರ್‌ಗಳು, ಫೋಟೋಗ್ರಾಫರ್ಸ್ ಮೆಕಾನಿಕ್ಸ್, ಬೀಡಿ-ಅಗರಬತ್ತಿ ಹಚು ಕಾರ್ಮಿಕರು, ಮೀನುಗಾರರು, ಇನ್ನಿತರ ಎಲ್ಲಾ ಅಸಂಘಟಿತ ಕಾರ್ಮಿಕರು ಮತ್ತು ಕೃಷಿ-ತೋಟ ಕಾರ್ಮಿಕರು ಸೇರಿದಂತೆ ಎಲ್ಲಾ ವಿಭಾಗದ ಕಾರ್ಮಿಕರಿಗೆ ಕನಿಷ್ಠ ಮಾಸಿಕ ರು 9 ಸಾವಿರ ರು. ಪಿಂಚಣಿ ಹಾಗೂ ಸಾಮಾಜಿಕ ಭದ್ರತೆಯನ್ನು ಖಾತ್ರಿಪಡಿಸಬೇಕು ಎಂದು ಆಗ್ರಹಿಸಿದರು.
ಎನ್‌ಪಿಎಸ್ ಮತ್ತು ಯುಪಿಎಸ್ ರದ್ದುಪಡಿಸಿ, ಹಳೆಯ ಪೆನ್ಸನ್ ಸ್ವೀಂನ್ನು ಮರು ಸ್ಥಾಪಿಸಬೇಕು. ಇಎಸ್‌ಐ, ಪಿ.ಎಫ್, ಬೋನಸ್ ಪಾವತಿಗಿರುವ ಎಲ್ಲಾ ವೇತನ ಮಿತಿಯನ್ನು ತೆಗೆಯಬೇಕು. ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು ಆಹಾರ, ಔಷಧಿಗಳು, ಕೃಷಿ ಸಾಮಗ್ರಿ ಮುಂತಾದ ಅಗತ್ಯ ವಸ್ತುಗಳ ಮೇಲಿನ ಜಿಎಸ್ ತೆಗೆಯಬೇಕು. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಮೇಲಿನ ಕೇಂದ್ರೀಯ ಅಬಕಾರಿ ಸುಂಕ ಇಳಿಸಬೇಕೆಂದು ಒತ್ತಾಯಿಸಿ ತಾಪಂ ಕಚೇರಿ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು.ಪ್ರತಿಭಟನೆಯಲ್ಲಿ ಗ್ರಾಪಂ ನೌಕರರ ಸಂಘದ ಅಧ್ಯಕ್ಷೆ ವನಜಾಕ್ಷಿ, ಜಿಲ್ಲಾ ಕಾರ್ಯದರ್ಶಿ ಎ.ಬಿ.ಶಶಿಕಲಾ, ಭಾಗ್ಯ, ಲಲಿತಾ, ಜಯಲಕ್ಷ್ಮಿ, ಶಶಿಕಲಾ, ರತ್ನಮ್ಮ, ವಿಜಯಲಕ್ಷ್ಮಿ ಸೇರಿದಂತೆ ಇತರರು ಇದ್ದರು.