ಮಹಾ ಮಳೆಗೆ ಮೈದುಂಬಿದ ಜಿಲ್ಲೆಯ ನದಿಗಳು

KannadaprabhaNewsNetwork |  
Published : Aug 03, 2026, 03:00 AM IST
ಜಲಾವೃತ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿ ಜಿಲ್ಲೆ ಸೇರಿದಂತೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾನುವಾರವೂ ಮಳೆಯ ಆರ್ಭಟ ಮುಂದುವರಿದಿದ್ದು, ಪ್ರಮುಖ ನದಿಗಳು ಮೈದುಂಬಿ ಹರಿಯುತ್ತಿವೆ. ನೆರೆಯ ಮಹಾರಾಷ್ಟ್ರದ ಕೊಯ್ನಾ ಅಚ್ಚುಕಟ್ಟು ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಕೃಷ್ಣಾ, ದೂಧಗಂಗಾ, ವೇದಗಂಗಾ, ಹಿರಣ್ಯಕೇಶಿ, ಘಟಪ್ರಭಾ ಹಾಗೂ ಮಲಪ್ರಭಾ ನದಿಗಳಲ್ಲಿ ನೀರಿನ ಹರಿವು ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ.

ಕನ್ನಡಪ್ರಭ ವಾರ್ತೆ ಬೆಳಗಾವಿ

ಜಿಲ್ಲೆ ಸೇರಿದಂತೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾನುವಾರವೂ ಮಳೆಯ ಆರ್ಭಟ ಮುಂದುವರಿದಿದ್ದು, ಪ್ರಮುಖ ನದಿಗಳು ಮೈದುಂಬಿ ಹರಿಯುತ್ತಿವೆ. ನೆರೆಯ ಮಹಾರಾಷ್ಟ್ರದ ಕೊಯ್ನಾ ಅಚ್ಚುಕಟ್ಟು ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಕೃಷ್ಣಾ, ದೂಧಗಂಗಾ, ವೇದಗಂಗಾ, ಹಿರಣ್ಯಕೇಶಿ, ಘಟಪ್ರಭಾ ಹಾಗೂ ಮಲಪ್ರಭಾ ನದಿಗಳಲ್ಲಿ ನೀರಿನ ಹರಿವು ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ.

ಚಿಕ್ಕೋಡಿ ತಾಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ ಭಾನುವಾರ ಬೆಳಿಗ್ಗೆ 8 ಗಂಟೆಯ ವೇಳೆಗೆ 1.22 ಲಕ್ಷ ಕ್ಯುಸೆಕ್‌ ನೀರು ಹರಿದುಬರುತ್ತಿದೆ. ಶನಿವಾರ ಇದೇ ವೇಳೆಗೆ 98 ಸಾವಿರ ಕ್ಯುಸೆಕ್‌ ಹರಿವು ದಾಖಲಾಗಿದ್ದು, ಒಂದೇ ದಿನದಲ್ಲಿ ನೀರಿನ ಪ್ರಮಾಣದಲ್ಲಿ ಭಾರೀ ಏರಿಕೆಯಾಗಿದೆ. ರಾಜಾಪುರ ಬ್ಯಾರೇಜ್‌ನಿಂದ ಕೃಷ್ಣಾ, ದೂಧಗಂಗಾ ಹಾಗೂ ವೇದಗಂಗಾ ನದಿಗಳ ಒಳಹರಿವೂ ಹೆಚ್ಚಿದ್ದು, ನದಿ ತೀರದ ಪ್ರದೇಶಗಳಲ್ಲಿ ಪ್ರವಾಹ ಭೀತಿ ಸೃಷ್ಟಿಸಿದೆ. ಚಿಕ್ಕೋಡಿ, ನಿಪ್ಪಾಣಿ, ಅಥಣಿ, ರಾಯಬಾಗ, ಹುಕ್ಕೇರಿ ಹಾಗೂ ಕಾಗವಾಡ ತಾಲೂಕುಗಳಲ್ಲಿ ಕಳೆದ ಮೂರು–ನಾಲ್ಕು ದಿನಗಳಿಂದ ಸಾಧಾರಣ ಮಳೆಯಾಗುತ್ತಿದ್ದರೂ, ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ನಿರಂತರ ಮಳೆಯ ಪರಿಣಾಮ ಚಿಕ್ಕೋಡಿ ಉಪವಿಭಾಗದಲ್ಲಿ ಈಗಾಗಲೇ ಒಂಬತ್ತು ಕೆಳಹಂತದ ಸೇತುವೆಗಳು ಜಲಾವೃತಗೊಂಡಿವೆ.

ಚಿಕ್ಕೋಡಿ ತಾಲೂಕಿನ ಯಡೂರ ಬಳಿ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಯಡೂರ–ಕಲ್ಲೋಳ ಸೇತುವೆ, ವೇದಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ನಿಪ್ಪಾಣಿ ತಾಲೂಕಿನ ಭೋಜ–ಕಾರದಗಾ, ಭೋಜವಾಡಿ–ಕುನ್ನೂರ, ಸಿದ್ನಾಳ–ಅಕ್ಕೋಳ, ಹುನ್ನರಗಿ–ಮಮದಾಪುರ ಹಾಗೂ ಬಾರವಾಡ–ಕುನ್ನೂರ ಸೇತುವೆಗಳು ನೀರಿನಲ್ಲಿ ಮುಳುಗಿದ್ದು, ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ಇದರೊಂದಿಗೆ ಭಾನುವಾರ ಕರ್ನಾಟಕ–ಮಹಾರಾಷ್ಟ್ರ ನಡುವಿನ ಅಂತರರಾಜ್ಯ ಸಂಪರ್ಕ ಕಲ್ಪಿಸುವ ಪ್ರಮುಖ ಉಗಾರ–ಕುಡಚಿ ಸೇತುವೆಯೂ ಸಂಪೂರ್ಣ ಜಲಾವೃತಗೊಂಡು ರಸ್ತೆ ಸಂಪರ್ಕ ಕಡಿತಗೊಂಡಿದೆ. ಇದರಿಂದ ಸಾರ್ವಜನಿಕರು ಪರ್ಯಾಯ ಮಾರ್ಗಗಳನ್ನು ಅವಲಂಬಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಇತ್ತ ಘಟಪ್ರಭಾ ನದಿಯಲ್ಲೂ ನೀರಿನ ಹರಿವು ಹೆಚ್ಚಿದ್ದು, ಹಿಡಕಲ್ ಜಲಾಶಯದ ಒಳಹರಿವು 17,004 ಕ್ಯುಸೆಕ್‌ನಿಂದ 19,330 ಕ್ಯುಸೆಕ್‌ಗೆ ಏರಿಕೆಯಾಗಿದೆ. ಒಂದೇ ದಿನದಲ್ಲಿ ಜಲಾಶಯದ ನೀರಿನ ಮಟ್ಟ ಸುಮಾರು ಎರಡು ಅಡಿ ಹೆಚ್ಚಳ ಕಂಡಿದೆ. 2,175 ಅಡಿ ಗರಿಷ್ಠ ಮಟ್ಟ ಹೊಂದಿರುವ ಜಲಾಶಯದಲ್ಲಿ ಶನಿವಾರ 2,153.65 ಅಡಿ ನೀರು ಸಂಗ್ರಹವಿದ್ದರೆ, ಭಾನುವಾರ ಅದು 2,155.93 ಅಡಿಗೆ ಏರಿಕೆಯಾಗಿದೆ.

ಮಲಪ್ರಭಾ ನದಿಯಲ್ಲೂ ನೀರಿನ ಹರಿವು ಹೆಚ್ಚಾಗಿದ್ದು, ನವಿಲುತೀರ್ಥ ಜಲಾಶಯದ ಒಳಹರಿವು 4,782 ಕ್ಯುಸೆಕ್‌ನಿಂದ 4,862 ಕ್ಯುಸೆಕ್‌ಗೆ ಏರಿಕೆಯಾಗಿದೆ. ಮಹಾರಾಷ್ಟ್ರದಲ್ಲಿ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ನದಿಗಳ ನೀರಿನ ಮಟ್ಟ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದ್ದು, ನದಿ ಪಾತ್ರದ ಜನರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನವ ಕಳ್ಳಸಾಗಾಣಿಕೆಯ ಜಾಗೃತಿ ಮೂಡಿಸುವುದು ಮುಖ್ಯ: ಅರವಿಂದ ಹಾಗರಗಿ
ಸಂಗ್ರಹಿಸಿಟ್ಟಿದ್ದ ಅಕ್ರಮ ಪಡಿತರ ಅಕ್ಕಿ ವಶಕ್ಕೆ