ಕೊಪ್ಪಳ: ಶಿಕ್ಷಕರ ಕ್ಷೇತ್ರದಿಂದ ವಿಧಾನಪರಿಷತ್‌ಗೆ ನಡೆದ ದ್ವೈವಾರ್ಷಿಕ ಚುನಾವಣೆಯ ನಾಲ್ಕು ಕ್ಷೇತ್ರಗಳಲ್ಲಿ ಎನ್‌ಡಿಎ ಒಕ್ಕೂಟದ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಪತನದ ಆರಂಭದ ಸೂಚನೆ. ಇದು 2028ರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಗೆಲುವಿನ ಮೊದಲ ಹೆಜ್ಜೆ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ. ಚಂದ್ರಶೇಖರ್ ಹೇಳಿದ್ದಾರೆ.
ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ಶಿಕ್ಷಣ ಸಂಸ್ಥೆಗಳಿಗೆ ಕನಿಷ್ಠ ಮೂಲಸೌಕರ್ಯ ಒದಗಿಸುವಲ್ಲಿಯೂ ವಿಫಲವಾಗಿದೆ. ಅವೈಜ್ಞಾನಿಕ ಯೋಜನೆಗಳಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟು ಕರ್ನಾಟಕ ದಿವಾಳಿಯ ಅಂಚಿಗೆ ತಲುಪಿದೆ. ಕೆಪಿಎಸ್‌ಸಿ ನೇಮಕಾತಿ ಹಗರಣ, ಸ್ಟಿಂಗ್ ಆಪರೇಷನ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವಮಾನಕರವಾಗಿ ಅಧಿಕಾರದಿಂದ ಕೆಳಗಿಳಿಸಿದ ವಿಚಾರಗಳು ಶಿಕ್ಷಕರ ಆಕ್ರೋಶಕ್ಕೆ ಕಾರಣವಾಗಿವೆ. ಈ ಚುನಾವಣೆಯಲ್ಲಿ ಶಿಕ್ಷಕರು ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಕೊಪ್ಪಳ ಕ್ಷೇತ್ರದಲ್ಲಿಯೂ ವ್ಯಾಪಕ ಆಡಳಿತ ವಿರೋಧಿ ಅಲೆ ಇದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲನುಭವಿಸುವುದು ಖಚಿತ. ಈ ಭವಿಷ್ಯವಾಣಿಯೂ ನಿಜವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಎನ್‌ಡಿಎ ಒಕ್ಕೂಟದ ಅಭ್ಯರ್ಥಿಗಳ ಪರವಾಗಿ ಮತ ಚಲಾಯಿಸಿದ ಎಲ್ಲ ಮತದಾರರಿಗೆ ಧನ್ಯವಾದ ಸಲ್ಲಿಸಿರುವ ಸಿ.ವಿ. ಚಂದ್ರಶೇಖರ ಅವರು, ವಿಧಾನಪರಿಷತ್‌ಗೆ ಆಯ್ಕೆಯಾದ ನಾಲ್ವರು ಅಭ್ಯರ್ಥಿಗಳಿಗೆ ಅಭಿನಂದನೆ ತಿಳಿಸಿದ್ದಾರೆ.