ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಜಿಲ್ಲಾಡಳಿತದಿಂದ ಭಾರತದ ಸಂವಿಧಾನ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಮುಂಭಾಗ ಮಂಗಳವಾರ ಸಂವಿಧಾನ ಪ್ರಸ್ತಾವನೆ ಬೋಧಿಸಲಾಯಿತು.ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಭಾರತ ಸಂವಿಧಾನ ಪ್ರಸ್ತಾವನೆ ಬೋಧಿಸಿದರು. ಭಾರತದ ಪ್ರಜೆಗಳಾದ ನಾವು ಭಾರತವನ್ನು ಸಾರ್ವಭೌಮ, ಸಮಾಜವಾದಿ, ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿ ರೂಪಿಸುವುದಕ್ಕಾಗಿ ಭಾರತದ ಎಲ್ಲ ಪ್ರಜೆಗಳಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು ವಿಚಾರ, ಅಭಿವ್ಯಕ್ತಿ, ನಂಬಿಕೆ, ಧರ್ಮ ಮತ್ತು ಉಪಾಸನೆ ಸ್ವಾತಂತ್ರ್ಯವನ್ನು ಸ್ಥಾನಮಾನ ಮತ್ತು ಅವಕಾಶಗಳ ಸಮಾನತೆ ದೊರೆಯುವಂತೆ ಮಾಡುವುದಾಗಿ ತಿಳಿಸಲಾಯಿತು.
ವ್ಯಕ್ತಿಗೌರ, ದೇಶದ ಏಕತೆ ಮತ್ತು ಸಮಗ್ರತೆಗಾಗಿ ಎಲ್ಲರಲ್ಲಿ ಭ್ರಾತೃತ್ವ ಭಾವನೆ ಮೂಡಿಸುವುದಕ್ಕೆ ದೃಢಸಂಕಲ್ಪ ಮಾಡಬೇಕು. 1949ನೇ ನವೆಂಬರ್ 26ರಂದು ಸಂವಿಧಾನವನ್ನು ನಮಗೆ ನಾವೇ ಅರ್ಪಿಸಿಕೊಂಡು ಅಂಗೀಕರಿಸಿ, ಶಾಸನವಾಗಿ ವಿಧಿಸಿಕೊಂಡಿರುವುದಾಗಿ ಪ್ರತಿಜ್ಞೆ ಮಾಡಿಸಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಸಂವಿಧಾನದ ಮಹತ್ವದ ಬಗ್ಗೆ ಹೇಳಿದರು. ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ ಮಾತನಾಡಿ, ವಿಶ್ವದ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ಹೊಂದಿದ ದೇಶ ಭಾರತವಾಗಿದೆ. ಇದಕ್ಕೆ ತಳಹದಿಯಾಗಿರುವುದು ಭಾರತದ ಸಂವಿಧಾನ. ಭಾರತ ದೇಶದಲ್ಲಿ ನವೆಂಬರ್ 26 ಅತ್ಯಂತ ಮಹತ್ವದಾದ ದಿನವಾಗಿದೆ. ಇಡೀ ಸಂವಿಧಾನದ ಮುಖ ಎಂದರೆ ಪೀಠಿಕೆ ಈ ಪೀಠಿಕೆ ಅರ್ಥ ಮಾಡಿಕೊಂಡರು ಇಡೀ ಸಂವಿಧಾನ ತಿಳಿದುಕೊಂಡಂತಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಸದಾಶಿವ ಬಡಿಗೇರ, ಪಶು ಇಲಾಖೆ ಉಪನಿರ್ದೇಶಕ ಎಸ್.ಎಚ್.ಕರಡಿಗುಡ್ಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪ್ರಭಾಕರ.ಕೆ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ರವೀಂದ್ರ ಹಕಾಟಿ, ಕೃಷಿ ಇಲಾಖೆ ಉಪನಿರ್ದೇಶಕ ರೂಢಗಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಸಾಹಿರಾಬಾನು ನದಾಫ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ವರ್ಗ ಹಾರ್ಗ ವಸತಿ ನಿಲಯದ ವಿದ್ಯಾರ್ಥಿಗಳು ಭಾಗವಹಿಸಿದ್ದರು.