
ಕನ್ನಡಪ್ರಭ ವಾರ್ತೆ ತುಮಕೂರು
ಸೋಮವಾರ ನಗರದ ಗಾಜಿನಮನೆ ಆವರಣದಲ್ಲಿ 17ನೇ ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯ ಮಟ್ಟದ ಸಾಹಿತ್ಯ ಸಮ್ಮೇಳನಗಳಲ್ಲಿ ರಾಜ್ಯದ ಆಡಳಿತ, ಅಭಿವೃದ್ಧಿ ಹಾಗೂ ಸಮಾಜಕ್ಕೆ ಸಂಬಂಧಿಸಿದ ಹಲವು ಮಹತ್ವದ ವಿಷಯಗಳು ಚರ್ಚೆಗಳಾಗುತ್ತಿದ್ದು, ಅಂದಿನ ಸರ್ಕಾರಗಳಿಗೆ ಪರಿಣಾಮಕಾರಿ ಸಲಹೆ–ಸೂಚನೆಗಳನ್ನು ನೀಡಿದ ಇತಿಹಾಸವಿದೆ. ಅಂತೆಯೇ ಈ ಸಮ್ಮೇಳನ ಕೂಡ ಅಭಿವೃದ್ಧಿಗೆ ದಿಕ್ಸೂಚಿ ಆಗಬೇಕು ಎಂದರು.
ಇತ್ತೀಚಿನ ದಿನಗಳಲ್ಲಿ ಸಮ್ಮೇಳನಗಳ ನಿರ್ಣಯಗಳನ್ನು ಸರ್ಕಾರಗಳು ಕಡಿಮೆ ಮಟ್ಟದಲ್ಲಿ ಅಳವಡಿಸಿಕೊಳ್ಳುತ್ತಿರುವುದು ಕಂಡುಬರುತ್ತಿದ್ದರೂ ಕನ್ನಡ ನಾಡಿನ ಬೆಳವಣಿಗೆ ಕನ್ನಡಿಗರಿಂದಲೇ ಆಗಬೇಕು ಎಂದು ಅವರು ಅಭಿಪ್ರಾಯಪಟ್ಟರು. ಜಿಲ್ಲೆಯ 17ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಸಮ್ಮೇಳನದಲ್ಲಿ ಚರ್ಚೆಗೆ ಬರಲಿರುವ ಅನೇಕ ವಿಚಾರಗಳು ಜಿಲ್ಲೆಯ ಹಾಗೂ ರಾಜ್ಯದ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಲಿವೆ ಎಂದು ತಿಳಿಸಿದರು.ಇಡೀ ಜಗತ್ತಿನಾದ್ಯಂತ ಕನ್ನಡಿಗರು ಕನ್ನಡ ಭಾಷೆಯಷ್ಟೇ ಅಲ್ಲ, ನಮ್ಮ ಸಂಸ್ಕೃತಿಯನ್ನೂ ಜಗದಗಲ ಪ್ರಚಾರ ಮಾಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಇತ್ತೀಚೆಗೆ ನಾನು ಬೆಹ್ರಾನ್ ಭೇಟಿ ನೀಡಿದ್ದ ಸಂದರ್ಭದಲ್ಲಿ ಅಲ್ಲಿ ಕನ್ನಡ ಸಂಘಟನೆಗಳ ಮೂಲಕ ದೊಡ್ಡ ಕಟ್ಟಡ ನಿರ್ಮಿಸಿ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಪರಿಚಯಿಸುತ್ತಿರುವುದನ್ನು ಕಂಡೆ. ಅಲ್ಲಿನ ಮಕ್ಕಳಲ್ಲಿ ಕಲೆ ಮತ್ತು ಸಂಸ್ಕೃತಿಯ ಮೇಲಿನ ಆಸಕ್ತಿಯನ್ನು ನೋಡಿ ನಾನು ವೈಯಕ್ತಿಕವಾಗಿ ಒಂದು ಕೋಟಿ ರು.ಗಳನ್ನು ಸಂಘಕ್ಕೆ ನೀಡಿದ್ದೇನೆ. ಇಂತಹ ಕನ್ನಡ ಸೇವಕರಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಾಗಿದೆ ಎಂದು ಹೇಳಿದರು.
ಸರ್ಕಾರಿ ಶಾಲೆಗಳಿಗೆ ಬೀಗಮುದ್ರೆ : ಪ್ರೊ. ಬರಗೂರು ಕಳವಳ
ಸೋಮವಾರ ತುಮಕೂರಿನ ಗಾಜಿನ ಮನೆಯಲ್ಲಿ ಆಯೋಜಿಸಲಾಗಿದ್ದ 17ನೇ ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆಯಲ್ಲಿ ರಾಷ್ಟ್ರಕವಿ ಕುವೆಂಪು ಅವರ ಜನ್ಮ ದಿನಾಚರಣೆ ಅಂಗವಾಗಿ ನಡೆದ ವಿಶ್ವ ಮಾನವ ದಿನಾಚರಣೆಯ ಭಾಷಣ ಮಾಡಿ ಅವರು, ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯು ಬಡ ಮತ್ತು ಮಧ್ಯಮ ವರ್ಗದ ಮಕ್ಕಳ ಪಾಲಿನ ಆಶಾಕಿರಣವಾಗಿದ್ದು, ಅದನ್ನು ಉಳಿಸಿಕೊಳ್ಳುವುದು ಸರ್ಕಾರದ ಆದ್ಯತೆಯಾಗಬೇಕು. ಆದರೆ ಶಿಕ್ಷಕರು ಮಕ್ಕಳ ಕೊರತೆ ಕಾರಣ ಸರ್ಕಾರಿ ಶಾಲೆಗಳನ್ನು ಮುಚ್ಚುವ ಸರ್ಕಾರದ ಇರಾದೆ ಆತಂಕಕಾರಿ ಎಂದು ಕಳವಳ ವ್ಯಕ್ತಪಡಿಸಿದರು.
ಸರ್ಕಾರಕ್ಕೆ ರಾಷ್ಟ್ರಕವಿ ಕುವೆಂಪು ಅವರ ಮೇಲೆ ನಿಜವಾದ ಗೌರವವಿದ್ದರೆ, ಮೊದಲು ಹಳ್ಳಿಗಳಲ್ಲಿರುವ ಸರ್ಕಾರಿ ಶಾಲೆಗಳನ್ನು ಉಳಿಸಬೇಕು ಮತ್ತು ಅಭಿವೃದ್ಧಿಪಡಿಸಬೇಕು. ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚುವ ಅಥವಾ ವಿಲೀನಗೊಳಿಸುವ ಸರ್ಕಾರದ ನಡವಳಿಕೆಯನ್ನು ಪ್ರಶ್ನಿಸಿದ ಅವರು, ಕನ್ನಡ ಕೇವಲ ಭಾಷೆಯ ಪ್ರಶ್ನೆಯಲ್ಲ, ಬದಲಾಗಿ ನಮ್ಮ ಸಂಸ್ಕೃತಿ ಮತ್ತು ಪ್ರಜಾಪ್ರಭುತ್ವದ ಅಸ್ತಿತ್ವದ ಪ್ರಶ್ನೆಯಾಗಿದೆ ಎಂದು ಹೇಳಿದರು.
ಕನ್ನಡ ಶಾಲೆಗಳು ಇಲ್ಲದಿದ್ದರೆ ಭವಿಷ್ಯದಲ್ಲಿ ಕನ್ನಡ ಪತ್ರಿಕೆಗಳನ್ನು ಓದುವವರು, ಕನ್ನಡ ನಾಟಕ ಹಾಗೂ ಸಿನಿಮಾಗಳನ್ನು ನೋಡುವವರ ಸಂಖ್ಯೆ ಕ್ಷೀಣಿಸುತ್ತದೆ. ಇದು ಕನ್ನಡ ಸಾಹಿತ್ಯ ಲೋಕಕ್ಕೆ ದೊಡ್ಡ ಹೊಡೆತ ಎಂದ ಅವರು, ಸರ್ಕಾರಿ ಶಾಲೆಗಳಿಲ್ಲದಿದ್ದರೆ ಸ್ವಾತಂತ್ರ‍್ಯ ದಿನಾಚರಣೆ, ಗಣರಾಜ್ಯೋತ್ಸವ, ಅಂಬೇಡ್ಕರ್ ಹಾಗೂ ಗಾಂಧಿ ಜಯಂತಿಗಳಂತಹ ಪ್ರಜಾಸತ್ತಾತ್ಮಕ ಉತ್ಸವಗಳು ಕ್ಷೀಣಿಸುವ ಪ್ರಸಂಗಗಳು ಸಮೀಪಿಸುತ್ತಿವೆ ಎಂದರು.