ಶಿವಮೊಗ್ಗ: ಜಿಲ್ಲೆಯಲ್ಲಿ ಹೆಚ್ಚಿನ ಪೋಕ್ಸೋ ಪ್ರಕರಣಗಳು ದಾಖಲಾಗುತ್ತಿರುವುದು ಕಳವಳಕಾರಿ ಸಂಗತಿ ಎಂದು ಬಾಲ ನ್ಯಾಯ ಮಂಡಳಿಯ ಪ್ರಧಾನ ನ್ಯಾಯಾಧೀಶರು ಹಾಗೂ 2ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ದೀಪಾ ಹೇಳಿದರು.
ಇಲ್ಲಿನ ರಾಜ್ಯ ಮಹಿಳಾ ನಿಲಯದ ಸಭಾಂಗಣದಲ್ಲಿ ಶುಕ್ರವಾರ ರಾಜ್ಯ ಮಹಿಳಾ ನಿಲಯ ಮತ್ತು ಮಕ್ಕಳ ನಿರ್ದೇಶನಾಲಯದ ವ್ಯಾಪ್ತಿಗೊಳಪಡುವ ಮಕ್ಕಳ ಪಾಲನಾ ಸಂಸ್ಥೆಗಳ ನಿವಾಸಿಗಳ ಕುರಿತು ಏರ್ಪಡಿಸಿದ್ದ ಸಂಬಂಧಿತ ವಿವಿಧ ಇಲಾಖಾ ಅಧಿಕಾರಿಗಳ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.ಪೋಕ್ಸೋ ಪ್ರಕರಣಗಳ ನಿಯಂತ್ರಣಕ್ಕೆ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ರಾಜ್ಯ ಮಹಿಳಾ ನಿಲಯವು ಅನೇಕ ಜನಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸುತ್ತಿದೆ ಎಂದರು.
ಸ್ರೀಯರ ಆರೋಗ್ಯ ತಪಾಸಣೆಗೆ ಮಹಿಳಾ ಸಿಬ್ಬಂದಿ ನಿಯೋಜಿಸಿ:ಮಾನಸಿಕ ಮತ್ತು ಬೌದ್ಧಿಕ ವಿಕಾರಗಳಿಗೆ ಒಳಗಾಗಿರುವರ ಆರೋಗ್ಯ ಮತ್ತು ದೈಹಿಕ ತಪಾಸಣೆ ಕಾಲಕಾಲಕ್ಕೆ ಆಗಬೇಕು. ಇದಕ್ಕೆ ಆರೋಗ್ಯ ಇಲಾಖೆಯಿಂದ ವೈದ್ಯರನ್ನು ನಿಯೋಜಿಸಬೇಕು. ವಿಶೇಷವಾಗಿ ಮಹಿಳೆಯರ ಆರೋಗ್ಯ ತಪಾಸಣೆಗೆ ಅನುಕೂಲವಾಗುವಂತೆ ಮಹಿಳಾ ಸಿಬ್ಬಂದಿಯನ್ನು ನಿಯೋಜಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ಡಿಎಚ್‌ಒ ಹಾಗೂ ಮೆಗ್ಗಾನ್ ಆಸ್ಪತ್ರೆಯ ಅಧೀಕ್ಷಕರಿಗೆ ಸೂಚಿಸಿದರು.
ನಗರದ ರಾಜ್ಯ ಮಹಿಳಾ ನಿಲಯ ಮತ್ತು ಮಕ್ಕಳ ಪಾಲನಾ ಸಂಸ್ಥೆಯ ಸುಪರ್ದಿಯಲ್ಲಿನ ನಿವಾಸಿಗಳ ಆರೋಗ್ಯ ಮತ್ತು ಸುರಕ್ಷತೆಗೆ ವಿಶೇಷ ಗಮನ ನೀಡಬೇಕು. ವಿವಿಧ ಪ್ರಕರಣಗಳಲ್ಲಿ ದೌರ್ಜನ್ಯಕ್ಕೊಳಗಾದ, ಅನಾಥ, ಒಪ್ಪಿಸಲ್ಪಟ್ಟ, ಭಿಕ್ಷೆ ಬೇಡುವ, ಚಿಂದಿ ಆಯುವ, ಬೀದಿಬದಿಯ ನಿರ್ಲಕ್ಷ್ಯಕ್ಕೆ ಒಳಗಾದ, ಸಂಘರ್ಷಕ್ಕೆ ಒಳಗಾದ, ಪಾಲನೆ ಮತ್ತು ಪೋಷಣೆಯ ಅಗತ್ಯವಿರುವ ಮಕ್ಕಳು, ಸರ್ಕಾರಿ ಪಾಲನಾ ಸಂಸ್ಥೆಗಳು ಮತ್ತು ಸರ್ಕಾರಿ ವಿಶೇಷ ದತ್ತು ಸಂಸ್ಥೆಗೆ ದಾಖಲಿಸುವ ಮಕ್ಕಳಿಗೆ ವೈದ್ಯಕೀಯ ತಪಾಸಣೆಗೆ ಒಳಪಡಿಸಬೇಕು ಎಂದರು.ಇಂತಹ ತುರ್ತು ಸಂದರ್ಭಗಳಲ್ಲಿ ನಗರದ ಮೆಗ್ಗಾನ್ ಆಸ್ಪತ್ರೆಗೆ ಬಾಧಿತರನ್ನು ಕರೆದುಕೊಂಡು ಹೋದಾಗ ಸಕಾಲದಲ್ಲಿ ಚಿಕಿತ್ಸೆ ದೊರೆಯದೆ ವಿಳಂಬವಾಗುತ್ತಿದೆ. ಅಲ್ಲದೇ ಮಾನಸಿಕ ವಿಕಾರಗಳಿಗೆ ಒಳಗಾಗಿರುವ ಪ್ರಕರಣಗಳಿದ್ದಾಗ ಮಾನವೀಯ ನೆಲೆಯಲ್ಲಿ ವಿಶೇಷ ಪ್ರಕರಣವೆಂದು ಭಾವಿಸಿ, ವಿಳಂಬಕ್ಕೆ ಅವಕಾಶವಿಲ್ಲದಂತೆ ಕೂಡಲೇ ತಪಾಸಣೆ ನಡೆಸಿ, ಅಗತ್ಯ ಔಷಧ ನೀಡಿ ಕಳುಹಿಸಿಕೊಡಬೇಕು ಎಂದು ಸೂಚಿಸಿದರು.
ಮೆಗ್ಗಾನ್ ಸ್ವಾಯತ್ತ ಸಂಸ್ಥೆಯಾಗಿರುವ ಕಾರಣ ಆರೋಗ್ಯ ತಪಾಸಣೆಗೆ ಶುಲ್ಕ ವಿಧಿಸಲಾಗುತ್ತಿದೆ. ಈ ಶುಲ್ಕ ಪಾವತಿಸುವಲ್ಲಿ ಇಲ್ಲಿನ ನಿವಾಸಿಗಳಿಗೆ ವಿನಾಯಿತಿ ನೀಡುವ ಸಾಧ್ಯತೆಗಳ ಬಗ್ಗೆ ಪರಿಶೀಲಿಸಿ, ತುರ್ತು ಕ್ರಮ ಕೈಗೊಳ್ಳಬೇಕು. ಈ ಸಂಬಂಧ ಅಲ್ಲಿನ ಅಧೀನ ಅಧಿಕಾರಿ-ಸಿಬ್ಬಂದಿಗಳಿಗೆ ಮಾರ್ಗದರ್ಶನ ನೀಡುವಂತೆ ಸಲಹೆ ನೀಡಿದರು.ಕೆಲವು ಪ್ರಕರಣಗಳಲ್ಲಿ ದಾಖಲಾಗುವ ಅಪ್ರಾಪ್ತ ಮಕ್ಕಳು ಸರದಿ ಸಾಲಿನಲ್ಲಿರುವಾಗ ಸಂಸ್ಥೆಯ ರಕ್ಷಕರಿಂದ ತಪ್ಪಿಸಿಕೊಳ್ಳುವ ಸಂಭವನೀಯತೆಯೂ ಹೆಚ್ಚಾಗಿರುತ್ತದೆ. ಅಲ್ಲದೇ ಅಪ್ರಾಪ್ತ ಮಕ್ಕಳ ಗೌಪ್ಯತೆಯನ್ನು ಕಾಪಾಡುವಲ್ಲಿ ಬಾಲನ್ಯಾಯ ಕಾಯ್ದೆಯ ಉಲ್ಲಂಘನೆ ಆಗುತ್ತಿರುವುದನ್ನು ಮಂಡಳಿ ಗಂಭೀರವಾಗಿ ಪರಿಗಣಿಸಿದೆ. ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತ ಮಕ್ಕಳ ಚಿಕಿತ್ಸೆಗಾಗಿ ಗೌಪ್ಯತೆಯ ದೃಷ್ಟಿಯಿಂದ ಪ್ರತ್ಯೇಕ ವ್ಯವಸ್ಥೆ ಒದಗಿಸಲು ಮುಂದಾಗುವಂತೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಬಾಲ ನ್ಯಾಯ ಮಂಡಳಿಯ ಸದಸ್ಯರಾದ ಡಾ.ಕೆ.ಎಸ್.ಪವಿತ್ರಾ, ಜಿ.ಎಂ.ರೇಖಾ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.