ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ
ರಾಜ್ಯದಲ್ಲಿ ದೀನ ದಲಿತ, ಬಡವರಿಗಾಗಿ ಜನಪರ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ಮಾಜಿ ಸಿಎಂ ದಿ.ಡಿ.ದೇವರಾಜು ಅರಸು ಬಡವರ, ದಲಿತರ ಆಶಾಕಿರಣವಾಗಿದ್ದಾರೆ ಎಂದು ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಹೇಳಿದರು.ಪಟ್ಟಣದ ಗಂಗಾಧರ ಲೇಔಟ್‌ನ ಡಿ.ದೇವರಾಜು ಅರಸು ಭವನದಲ್ಲಿ ತಾಲೂಕಾಡಳಿತ, ತಾಲೂಕು ಪಂಚಾಯತಿ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಡಿ.ದೇವರಾಜ ಅರಸು ಅವರ ೧೧೦ನೇ ಜನ್ಮದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮೈಸೂರು ರಾಜ್ಯವನ್ನು ರಾಜ್ಯದ ಜನರ ಹಿತದೃಷ್ಟಿಯಿಂದ ಕರ್ನಾಟಕ ರಾಜ್ಯವನ್ನಾಗಿ ಮಾಡಿ, ಅಧಿಕಾರದುದ್ದಕ್ಕೂ ಜನಪರ ಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸಿ ರಾಜ್ಯದ ಅಭಿವೃದ್ಧಿ ಶ್ರಮಿಸಿದ್ದಾರೆ ಎಂದರು.ಸಂಗಮೇಶ ಓಲೇಕಾರ ಮಾತನಾಡಿ, ರಾಜ್ಯದಲ್ಲಿ ಡಿ.ದೇವರಾಜು ಅರಸು ಅವರು ಹಲವಾರು ಇಲಾಖೆಯ ಸಚಿವರಾಗಿ ಯಶಸ್ವಿಯಾಗಿ ಕಾರ್ಯ ಮಾಡಿ ಜನಮನ್ನಣೆ ಗಳಿಸಿದ್ದರು. ೧೯೭೨ರಲ್ಲಿ ಪ್ರಥಮ ಬಾರಿಗೆ ರಾಜ್ಯದ ಚುಕ್ಕಾಣಿ ಹಿಡಿದ ಅವರು ಮುಖ್ಯಮಂತ್ರಿ ಅವಧಿಯಲ್ಲಿ ಹಲವಾರು ಜನಪರ ಕಾರ್ಯಕ್ರಮಗಳನ್ನು ಮಾಡಿದ್ದಾರೆ. ಈ ಮೂಲಕ ಸದಾ ಜನರ ಸ್ಮರಣೆಯಲ್ಲಿದ್ದಾರೆ. ಅವರೊಬ್ಬ ದೂರದೃಷ್ಟಿ ನಾಯಕರಾಗಿದ್ದರು. ರಾಜ್ಯದಲ್ಲಿ ಮಲಹೊರುವ ಪದ್ಧತಿ, ಜೀತ ಪದ್ಧತಿ ರದ್ದುಪಡಿಸಿದರು. ಉಳುವವನೇ ಭೂಮಿ ಒಡೆಯ ಎಂಬ ಕಾಯ್ದೆ ಜಾರಿಗೆ ತರುವ ಮೂಲಕ ಅನೇಕ ದಲಿತ ಬಾಂಧವರ, ಹಿಂದುಳಿದ ವರ್ಗದವರ ಬಾಳಿಗೆ ಬೆಳಕಾದರು. ಇವರ ಕಾರ್ಯಗಳು ಎಂದಿಗೂ ರಾಜ್ಯದಲ್ಲಿ ಅಮರವಾಗಿ ಇರುತ್ತವೆ ಎಂದು ಹೇಳಿದರು.ಪುರಸಭೆ ಅಧ್ಯಕ್ಷೆ ಜಗದೇವಿ ಗುಂಡಳ್ಳಿ, ಪುರಸಭೆ ಉಪಾಧ್ಯಕ್ಷ ಅಶೋಕ ಹಾರಿವಾಳ, ರಾಷ್ಟ್ರೀಯ ಬಸವ ಸೈನ್ಯ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ, ಡಿಎಸ್‌ಎಸ್ ಮುಖಂಡ ಅರವಿಂದ ಸಾಲವಾಡಗಿ ಮಾತನಾಡಿದರು. ತಾಪಂ ಇಒ ಪ್ರಕಾಶ ದೇಸಾಯಿ, ಪುರಸಭೆ ಮುಖ್ಯಾಧಿಕಾರಿ ವಿದ್ಯಾಧರ ಕಲಾದಗಿ, ಹಿಂದುಳಿಂದ ವರ್ಗಗಳ ಕಲ್ಯಾಣಾಧಿಕಾರಿ ಶಾಂತಾಬಾಯಿ ನಿಂಬಾಳ, ಸಮಾಜ ಕಲ್ಯಾಣ ಇಲಾಖೆಯ ಗ್ರೇಡ್-೧ ಸಹಾಯಕ ನಿರ್ದೇಶಕಿ ಮಂಜು ಹಿರೇಮನಿ, ಸಹಾಯಕ ಕೃಷಿ ನಿರ್ದೇಶಕ ಎಂ.ಎಚ್.ಯರಝರಿ, ಮುಖಂಡರಾದ ಚಂದ್ರಶೇಖರ ಪಾಟೀಲ, ಶೇಖರ ಗೊಳಸಂಗಿ, ಅಶೋಕ ಚಲವಾದಿ ಇತರರು ಇದ್ದರು. ಚಂದ್ರಶೇಖರ ಬಿರಾದಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಸ್.ಸಿ.ಕುಂಟೋಜಿ ಸ್ವಾಗತಿಸಿ, ನಿರೂಪಿಸಿದರು. ಪಿ.ವ್ಹಿ.ಬಡಿಗೇರ ವಂದಿಸಿದರು. ಇದೇ ಸಂದರ್ಭದಲ್ಲಿ ವಸತಿ ನಿಲಯದಲ್ಲಿದ್ದು ವ್ಯಾಸಂಗ ಮಾಡಿ ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತಮ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.