ಕನ್ನಡಪ್ರಭ ವಾರ್ತೆ ಹೊಸಪೇಟೆ
ಹಿರಿಯ ನಾಗರಿಕರ ಶಿಸ್ತಿನ ಜೀವನ ಶೈಲಿ ಮತ್ತು ಜೀವನಾನುಭವ ಯುವಜನತೆಗೆ ಆದರ್ಶಪ್ರಾಯವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ ಹೇಳಿದರು.ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಶೇಷಚೇತನರ ಮತ್ತು ಹಿರಿಯ ನಾಗರಿಕ ಸಬಲೀಕರಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಏರ್ಪಡಿಸಿದ್ದ ವಿಶ್ವ ಹಿರಿಯ ನಾಗರಿಕ ದಿನಾಚರಣೆ ನಿಮಿತ್ತ ಹಿರಿಯ ನಾಗರಿಕರಿಗೆ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಭವಿಷ್ಯದ ಬದುಕಿಗೆ ಬುನಾದಿ ಹಾಕಿಕೊಟ್ಟಿರುವ ಮನೆಯ ಯಜಮಾನ, ವಯೋವೃದ್ಧರ ಕಾಳಜಿಗೆ ಸರ್ಕಾರವು ಅನೇಕ ಯೋಜನೆ ನೀಡಿದೆ. ಹಿರಿಯ ನಾಗರಿಕರಿಗೆ ಸಾಮಾಜಿಕ ಭದ್ರತೆ, ಆರ್ಥಿಕ ಭದ್ರತೆ ಹಾಗೂ ಉತ್ತಮ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಪ್ರತಿವರ್ಷ ಹಿರಿಯ ನಾಗರಿಕರ ದಿನವನ್ನು ಆಚರಿಸುತ್ತಿದೆ. ಹಿರಿಯ ನಾಗರಿಕರು ಕ್ರೀಡಾಕೂಟದಲ್ಲಿ ಭಾಗವಹಿಸುವುದರಿಂದ ಜೀವನೋತ್ಸಾಹ ಹೆಚ್ಚುತ್ತದೆ. ಆದ್ದರಿಂದ ವಯಸ್ಸು ಕೇವಲ ದೇಹಕ್ಕೆ ಹೊರತು ಮನಸ್ಸಿಗಲ್ಲ ಎಂಬ ಚಿಂತನೆಯೊಂದಿಗೆ ಪ್ರತಿಯೊಬ್ಬ ಹಿರಿಯ ನಾಗರಿಕರು ಕ್ರಿಯಾಶೀಲರಾಗಿ ಕ್ರೀಡೆಗಳಲ್ಲಿ ಭಾಗವಹಿಸಬೇಕು ಎಂದರು.ಹುಡಾ ಅಧ್ಯಕ್ಷ ಎಚ್.ಎನ್.ಎಫ್.ಇಮಾಮ್ ನಿಯಾಜಿ ಮಾತನಾಡಿ, ಪ್ರತಿಯೊಬ್ಬ ಹಿರಿಯ ನಾಗರಿಕರು ಕ್ರೀಡೆಗಳಲ್ಲಿ ಹೆಚ್ಚು ಭಾಗವಹಿಸುವುದರಿಂದ ಉತ್ತಮ ಆರೋಗ್ಯವನ್ನು ಪಡೆಯಬಹುದಾಗಿದೆ. ಸರ್ಕಾರದ ಕಾರ್ಯಕ್ರಮಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಹಿರಿಯ ನಾಗರಿಕರನ್ನು ಪ್ರತಿಯೊಬ್ಬರೂ ಗೌರವದಿಂದ ಕಾಣಬೇಕು ಮತ್ತು ಸಮಾಜದ ಏಳಿಗೆಗೆ ಅವರ ಉತ್ತಮ ಅನುಭವವನ್ನು ಬಳಸಿಕೊಳ್ಳಬೇಕು ಎಂದರು.
ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರಾಮಾಂಜಿನೇಯ, ಹಿರಿಯ ನಾಗರಿಕರಿಗೆ ಮ್ಯೂಸಿಕಲ್ ಚೇರ್, ಬಿರುಸಿನ ನಡಿಗೆ, ಬಕೆಟ್ ನಲ್ಲಿ ಬಾಲ್ ಎಸೆಯುವುದು, ಚೆಸ್ ಮತ್ತು ಕೇರ್ಂ ಸ್ಪರ್ಧೆಗಳನ್ನು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗಾಯನ, ಏಕಪಾತ್ರಾಭಿನಯ ಸ್ಪರ್ಧೆಗಳು ಆಯೋಜಿಸಲಾಗಿದೆ. ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ವಿಜೇತರಾದ ಕ್ರೀಡಾಪಟುಗಳನ್ನು ರಾಜ್ಯಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗುವುದು ಎಂದರು.ಈ ವೇಳೆ ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಶ್ರೀಕಾಂತ್ ವಾಲ್ಮೀಕಿ, ನಿವೃತ್ತ ಪೊಲೀಸ್ ಅಧೀಕ್ಷಕ ಕುಮಾರಸ್ವಾಮಿ, ನಿವೃತ್ತ ನೌಕರರ ಸಂಘದ ಅಧ್ಯಕ್ಷ ಎಸ್.ಬಿ. ಶೇಖರಗೌಡ ಪಾಟೀಲ್, ನಿವೃತ್ತ ನೌಕರರ ಸಂಘದ ಪೂರ್ವ ಉಪಾಧ್ಯಕ್ಷ ಎಚ್.ಡಿ. ಜಗ್ಗೀನ್, ಗ್ರಾಪಂ ಸದಸ್ಯೆ ಗಂಗಮ್ಮ, ಮುಖಂಡರಾದ ಎಸ್.ಭೀಮಪ್ಪ, ಎಂಆರ್‌ಡಬ್ಲೂ ಜೆ.ರವಿಕುಮಾರ್, ಆರ್.ಧನರಾಜ್ ಇತರರಿದ್ದರು.