ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಕನ್ನಡಪ್ರಭ ವಾರ್ತೆ ಉಡುಪಿ
ಮಹರ್ಷಿ ವಾಲ್ಮೀಕಿ ವಿಶ್ವ ಕಂಡ ಶ್ರೇಷ್ಠ ಆದಿಕವಿ. ತಮ್ಮ ಜ್ಞಾನದಿಂದ ಅತ್ಯಂತ ಶ್ರೇಷ್ಠ ಕಾವ್ಯ ರಾಮಾಯಣವನ್ನು ರಚಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ವಾಲ್ಮೀಕಿ ಮಹರ್ಷಿಯ ಜೀವನ ಎಲ್ಲರಿಗೂ ಪ್ರೇರಣೆ ನೀಡುತ್ತದೆ ಎಂದು ಶಾಸಕ ಯಶ್ಪಾಲ್ ಸುವರ್ಣ ಹೇಳಿದರು.ಅವರು ಮಂಗಳವಾರ ಜಿಲ್ಲಾಡಳಿತ ವತಿಯಿಂದ ಪರಿಶಿಷ್ಟ ವರ್ಗಗಳ ಸಂಘಟನೆ ಸಹಯೋಗದಲ್ಲಿ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಉದ್ಘಾಟಿಸಿ, ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.ವಾಲ್ಮೀಕಿ ಮಹರ್ಷಿಗಳ ಹೆಸರಿನಲ್ಲಿ ಜಾರಿಯಾಗಿರುವ ಯೋಜನೆಗಳನ್ನು ಜನರಿಗೆ ತಲುಪಿದಾಗ ಸಮಾಜದ ಉನ್ನತಿಯಾದಾಗ ವಾಲ್ಮೀಕಿ ಜಯಂತಿ ಆಚರಣೆ ಅರ್ಥಪೂರ್ಣವಾಗುತ್ತದೆ. ವಾಲ್ಮೀಕಿ ಮಹರ್ಷಿಗಳು ಮತ್ತು ಅವರು ರಚಿಸಿದ ರಾಮಾಯಣದ ಆದರ್ಶಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಂಡಾಗ ಜೀವನ ಸಾರ್ಥಕವಾಗುತ್ತದೆ ಎಂದರು.ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಮಾತನಾಡಿ, ಭಾರತೀಯ ಸಮಾಜದಲ್ಲಿ ಸರ್ವಶ್ರೇಷ್ಠ ಗ್ರಂಥಗಳಾದ ರಾಮಾಯಣ ಮತ್ತು ಮಹಾಭಾರತ ಮಹಾಕಾವ್ಯಗಳು ಜಗತ್ತಿನ ಎಲ್ಲ ಕಾವ್ಯಗಳಿಗೆ ಪ್ರೇರಣಾದಾಯಿಯಾಗಿವೆ. ರಾಮಾಯಣ ಸಾರ್ವಕಾಲಿಕವಾಗಿದ್ದು ಅದನ್ನು ರಚಿಸಿದ ವಾಲ್ಮೀಕಿ ಮಹರ್ಷಿಗಳ ಜೀವನದಿಂದಲೂ ಪ್ರೇರಣೆ ಪಡೆದು ಸಮಾಜವನ್ನು ಮುನ್ನಡೆಸಬೇಕು ಎಂದು ಹೇಳಿದರು.
ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಮಾತನಾಡಿ, ಅಂದು ವಾಲ್ಮೀಕಿ ರಾಮಾಯಣ ರಚಿಸಿದರೆ, ಇಂದಿನ ಕಾಲಘಟ್ಟದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಸಂವಿಧಾನವನ್ನು ರಚಿಸಿ ಸಮಾಜಕ್ಕೆ ಕೊಡುಗೆ ನೀಡಿದ್ದಾರೆ. ವಾಲ್ಮೀಕಿ ಮಹರ್ಷಿಗಳು ತಮ್ಮ ಪೂರ್ವಾಶ್ರಮದ ಅಸಾಮಾಜಿಕ ಕಾರ್ಯಗಳನ್ನು ತ್ಯಜಿಸಿ ಜ್ಞಾನಿಗಳಾಗಿ ಬದುಕಿದಂತೆ ಇಂದಿನ ಯುವಕರೂ ಕೂಡ ಅಡ್ಡದಾರಿ ಹಿಡಿಯದೆ ಸಂವಿಧಾನದ ಚೌಕಟ್ಟಿನಲ್ಲಿ ಬದುಕಿ ಸಮಾಜಕ್ಕೆ ಕೊಡುಗೆ ನೀಡಬೇಕು ಎಂದರು.ಕಾರ್ಕಳ ವಿದ್ಯಾವರ್ಧಕ ಪಪೂ ಕಾಲೇಜಿನ ಉಪನ್ಯಾಸಕ ಪ್ರಕಾಶ್ ನಾಯ್ಕ್ ವಿಶೇಷ ಉಪನ್ಯಾಸ ನೀಡಿದರು. ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ ಉಪಸ್ಥಿತರಿದ್ದರು.ಈ ಸಂದರ್ಭ ವಿವಿಧ ಕ್ಷೇತ್ರಗಳ ಸಾಧಕರನ್ನು ಹಾಗೂ ಎಸ್‌ಎಸ್‌ಎಲ್‌ಸಿ- ಪಿಯುಸಿಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಐಟಿಡಿಪಿ ಯೋಜನಾ ಸಮನ್ವಯಾಧಿಕಾರಿ ನಾರಾಯಣ ಸ್ವಾಮಿ ಸ್ವಾಗತಿಸಿ, ವಂದಿಸಿದರು.