ಬಹುನಿರೀಕ್ಷೆಯ ‘ಕಲ್ಜಿಗ’ ಸಿನೆಮಾ ನಾಳೆ ತೆರೆಗೆ

KannadaprabhaNewsNetwork |  
Published : Sep 12, 2024, 01:47 AM IST
ಕಲ್ಚಿಗ ಸಿನೆಮಾ | Kannada Prabha

ಸಾರಾಂಶ

ಸಿನೆಮಾವು ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮಡಿಕೇರಿ, ಹುಬ್ಬಳ್ಳಿ- ಧಾರವಾಡ, ದಾವಣಗೆರೆ, ಮುಂಬೈ ಹಾಗೂ ಗಲ್ಫ್ ದೇಶಗಳಲ್ಲಿ ಏಕಕಾಲದಲ್ಲಿ ಬಿಡುಗಡೆಯಾಗಲಿದೆ.

ಮಂಗಳೂರು: ಕರಾವಳಿ ಸೀಮೆಯಿಂದ ಕನ್ನಡ ಚಿತ್ರರಂಗಕ್ಕೆ ಈಗಾಗಲೇ ಅನೇಕರು ತೆರಳಿದ್ದು, ಗೆಲುವನ್ನೂ ದಾಖಲಿಸಿದ್ದಾರೆ. ಇದೀಗ ಹಿಮಾನಿ ಫಿಲಂಸ್ ಬ್ಯಾನರ್‌ನಡಿ ‘ಕಲ್ಜಿಗ’ ಎಂಬ ಚಿತ್ರದ ಮೂಲಕ ಮತ್ತೊಂದು ತಂಡವು ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದೆ.

ಸೆಪ್ಟಂಬರ್ 13ರಂದು ‘ಕಲ್ಜಿಗ’ ಸಿನೆಮಾವು ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮಡಿಕೇರಿ, ಹುಬ್ಬಳ್ಳಿ- ಧಾರವಾಡ, ದಾವಣಗೆರೆ, ಮುಂಬೈ ಹಾಗೂ ಗಲ್ಫ್ ದೇಶಗಳಲ್ಲಿ ಏಕಕಾಲದಲ್ಲಿ ಬಿಡುಗಡೆಯಾಗಲಿದೆ.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಸಿನೆಮಾ ನಿರ್ದೇಶಕ ಸುಮನ್ ಸುವರ್ಣ, ಶೀರ್ಷಿಕೆಯಲ್ಲೇ ಕೌತುಕ ಬೆರೆತ ಸೆಳೆತವೊಂದನ್ನು ಬಚ್ಚಿಟ್ಟುಕೊಂಡಂತಿರುವ ಈ ಚಿತ್ರದ ಟ್ರೇಲರ್ ಭಾರತ್ ಮಾಲ್‌ನ ಭಾರತ್ ಸಿನಿಮಾಸ್‌ನಲ್ಲಿ ಅನಾವರಣಗೊಂಡಿದೆ. ಚಿತ್ರದ ಟ್ರೈಲರ್ ‘ಎ2 ಫಿಲ್ಮ್ಸ್’ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿ ಜನರಿಂದ ಉತ್ತಮ ಪ್ರತಿಕ್ರಿಯೆ ದೊರಕಿದೆ ಎಂದು ಹೇಳಿದರು.ಟ್ರೈಲರ್‌ 14 ಲಕ್ಷ ವೀಕ್ಷಣೆ:

ಈಗಾಗಲೇ ಕಲ್ಜಿಗ ಚಿತ್ರದ ಟ್ರೈಲರನ್ನು ಯೂಟ್ಯೂಬ್‌ನಲ್ಲಿ ಒಟ್ಟು 14 ಲಕ್ಷಕ್ಕೂ ಹೆಚ್ಚು ಜನರು ವೀಕ್ಷಿಸಿದ್ದಾರೆ. ಮಂಗಳೂರು ಸೀಮೆಯ ಕನ್ನಡ ಭಾಷಾ ಶೈಲಿಯಲ್ಲಿ ಚಿತ್ರ ತಯಾರಾಗಿರುವುದು ವಿಶೇಷ. ಧರ್ಮದ ದಾರಿಯಲ್ಲಿ ಅಧರ್ಮದ ನೆರಳು ಬಿದ್ದ ನಂತರದಲ್ಲಿ ಘಟಿಸುವ ರೋಚಕ ಕಥನ ‘ಕಲ್ಜಿಗ’ದಲ್ಲಿದೆ ಎಂದರು.

ಎಸ್.ಕೆ. ಗ್ರೂಪ್ ಎಂಬ ಮಾರ್ಕೆಟಿಂಗ್ ಸಂಸ್ಥೆಯ ಮಾಲೀಕ ಶರತ್ ಕುಮಾರ್ ಎ.ಕೆ. ಚಿತ್ರದ ನಿರ್ಮಾಪಕರಾಗಿದ್ದಾರೆ. ಕಲ್ಜಿಗದ ಕಥೆ, ಚಿತ್ರಕಥೆ, ಸಂಭಾಷಣೆಯನ್ನು ನಿರ್ದೇಶಕರೇ ಬರೆದಿದ್ದಾರೆ. ವಿಶೇಷವೆಂದರೆ, ಬಹು ಕಾಲದ ನಂತರ ನಾದಬ್ರಹ್ಮ ಹಂಸಲೇಖ ಈ ಸಿನೆಮಾ ಮೂಲಕ ಸಂಗೀತ ನಿರ್ದೇಶನಕ್ಕೆ ಮರಳಿದ್ದಾರೆ.

ಗಿರ್ಗಿಟ್, ಸರ್ಕಸ್, ಗಮ್ಜಾಲ್ ಮುಂತಾದ ಚಿತ್ರಗಳಲ್ಲಿ ನಿರ್ದೇಶನ ವಿಭಾಗದಲ್ಲಿ ಕಾರ್ಯ ನಿರ್ವಹಿಸಿದ್ದ ಸುಮನ್ ಸುವರ್ಣ ‘ಕಲ್ಜಿಗ’ದ ಮೂಲಕ ಸ್ವತಂತ್ರ ನಿರ್ದೇಶಕರಾಗಿದ್ದಾರೆ. ಕಿಂಗ್ ಆಫ್ ಆಕ್ಷನ್ ಬಿರುದಾಂಕಿತ ನಟ ಅರ್ಜುನ್ ಕಾಪಿಕಾಡ್ ನಾಯಕನಾಗಿ ನಟಿಸಿದ್ದರೆ, ಸುಶ್ಮಿತಾ ಭಟ್ ನಾಯಕಿಯಾಗಿದ್ದಾರೆ. ನಟರಾದ ಗೋಪಿನಾಥ್ ಭಟ್, ಜ್ಯೋತಿಷ್ ಶೆಟ್ಟಿ, ಮಾನಸಿ ಸುಧೀರ್, ವಿಜಯ್ ಶೋಭರಾಜ್ ಪಾವೂರ್, ಶ್ಲಾಘಾ ಸಾಲಿಗ್ರಾಮ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಸಾದ್ ಕೆ. ಶೆಟ್ಟಿಯವರ ಹಿನ್ನೆಲೆ ಸಂಗೀತ ಚಿತ್ರಕ್ಕಿದೆ.

ಸಚಿನ್ ಶೆಟ್ಟಿ ಛಾಯಾಗ್ರಹಣ, ಯಶ್ವಿನ್ ಕೆ. ಶೆಟ್ಟಿಗಾರ್ ಸಂಕಲನ ಚಿತ್ರಕ್ಕಿದೆ. ಕಾಂತಾರ ಖ್ಯಾತಿಯ ಸನಿಲ್ ಗುರು ಕ್ರಿಯೇಟಿವ್ ಹೆಡ್ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಕಾರ್ಯಕಾರಿ ನಿರ್ಮಾಪಕರಾಗಿ ರಾಧಾಕೃಷ್ಣ ಮಾಣಿಲ, ಪ್ರೊಡಕ್ಷನ್ ಮ್ಯಾನೇಜರ್ ಆಗಿ ಸಂದೀಪ್ ಶೆಟ್ಟಿ ‘ಕಲ್ಜಿಗ’ಕ್ಕೆ ಕೈಜೋಡಿಸಿದ್ದಾರೆ ಎಂದು ಸುಮನ್‌ ಸುವರ್ಣ ತಿಳಿಸಿದರು.

ನಟ ಅರ್ಜುನ್ ಕಾಪಿಕಾಡ್, ನಟಿ ಸುಶ್ಮಿತಾ ಭಟ್, ನಿರ್ಮಾಪಕ ಶರತ್ ಕುಮಾರ್ ಎ.ಕೆ. ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಮತಗಿಯಲ್ಲಿ ನಿವೃತ್ತ ಯೋಧ ಲಕ್ಷ್ಮಣಗೆ ಭವ್ಯ ಸ್ವಾಗತ
ಉತ್ತರದ ಅಭಿವೃದ್ಧಿಗೆ ಪ್ರತ್ಯೇಕ ರಾಜ್ಯ ಅಗತ್ಯ: ಉ.ಕ.ಹೋರಾಟ ಸಮಿತಿ