ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಹಾಗೂ ಅದರ ವಿರುದ್ಧ ದೆಹಲಿಯಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಗೆ ಸಂಬಂಧಿಸಿದಂತೆ ಹಾಸನ ಸಂಸದ ಶ್ರೇಯಸ್ ಪಟೇಲ್ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಶಿಕ್ಷಣ ವ್ಯವಸ್ಥೆಯಲ್ಲಿನ ಲೋಪಗಳಿಂದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಅವರ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದ್ದು, ಈ ಪ್ರಕರಣದ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಕನ್ನಡಪ್ರಭ ವಾರ್ತೆ ಹಾಸನ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಹಾಗೂ ಅದರ ವಿರುದ್ಧ ದೆಹಲಿಯಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಗೆ ಸಂಬಂಧಿಸಿದಂತೆ ಹಾಸನ ಸಂಸದ ಶ್ರೇಯಸ್ ಪಟೇಲ್ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಶಿಕ್ಷಣ ವ್ಯವಸ್ಥೆಯಲ್ಲಿನ ಲೋಪಗಳಿಂದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಅವರ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದ್ದು, ಈ ಪ್ರಕರಣದ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.ನಗರದ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿದ ಅವರು, ದೇಶದ ವಿವಿಧ ಭಾಗಗಳಿಂದ ದೆಹಲಿಗೆ ಆಗಮಿಸಿರುವ ವಿದ್ಯಾರ್ಥಿಗಳು ರಸ್ತೆ ಬದಿಯಲ್ಲೇ ದಿನ ಕಳೆಯುವ ದುಸ್ಥಿತಿಯಲ್ಲಿದ್ದಾರೆ. ನ್ಯಾಯಕ್ಕಾಗಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ನೋವಿಗೆ ಕೇಂದ್ರ ಸರ್ಕಾರ ಸ್ಪಂದಿಸದೇ ನಿರ್ಲಕ್ಷ್ಯ ಧೋರಣೆ ತಾಳಿರುವುದು ವಿಷಾದನೀಯ ಎಂದು ಹೇಳಿದರು. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಕೇವಲ ಒಂದು ಪರೀಕ್ಷೆಯ ಸಮಸ್ಯೆಯಲ್ಲ; ಇದು ದೇಶದ ಶಿಕ್ಷಣ ವ್ಯವಸ್ಥೆಯ ಮೇಲಿನ ವಿಶ್ವಾಸವನ್ನೇ ಪ್ರಶ್ನಿಸುವ ಗಂಭೀರ ಬೆಳವಣಿಗೆಯಾಗಿದೆ. ವೈದ್ಯಕೀಯ ಶಿಕ್ಷಣದ ಕನಸು ಹೊತ್ತು ವರ್ಷಗಳ ಕಾಲ ಶ್ರಮಿಸಿದ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ತೀವ್ರ ಮಾನಸಿಕ ವೇದನೆ ಅನುಭವಿಸುತ್ತಿದ್ದಾರೆ. ಆದ್ದರಿಂದ ಯಾವುದೇ ಒತ್ತಡಕ್ಕೆ ಮಣಿಯದೇ ಪಾರದರ್ಶಕ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.ವಿದ್ಯಾರ್ಥಿಗಳು ಬೀದಿಗಿಳಿದು ಹೋರಾಟ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿರುವುದು ಆಡಳಿತ ವೈಫಲ್ಯದ ಪ್ರತೀಕವಾಗಿದೆ. ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಬದಲು ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಯತ್ನಗಳು ನಡೆಯುತ್ತಿರುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಅವರು ಹೇಳಿದರು. ದೆಹಲಿ ಪ್ರತಿಭಟನೆಯ ಸಂದರ್ಭದಲ್ಲಿ ಮಹಿಳಾ ಸಂಸದೆಯರೊಂದಿಗೆ ಅನುಚಿತವಾಗಿ ವರ್ತಿಸಲಾಗಿದೆ ಎಂಬ ಆರೋಪ ಮಾಡಿರುವ ಶ್ರೇಯಸ್ ಪಟೇಲ್, ಜನರಿಂದ ಆಯ್ಕೆಯಾದ ಪ್ರತಿನಿಧಿಗಳಿಗೂ ಗೌರವ ನೀಡದಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಹೇಳಿದರು. ಪ್ರತಿಭಟನೆಯ ವೇಳೆ ಹಲವು ಸಂಸದರನ್ನು ಸ್ಟೇಡಿಯಂನಲ್ಲಿ ಇರಿಸಲಾಗಿತ್ತು ಎಂದು ತಿಳಿಸಿದರು. ಕೇಂದ್ರ ಸರ್ಕಾರ ನೀಡಿದ್ದ ಭರವಸೆಗಳು ನೆಲಕಚ್ಚಿದ್ದು, ದಪ್ಪ ಚರ್ಮದ ಕೇಂದ್ರದ ಸರಕಾರ ಯಾವ ಕ್ರಮಕೈಗೊಂಡಿರುವುದಿಲ್ಲ. ಇಂದು ವಿದ್ಯಾರ್ಥಿಗಳು ನ್ಯಾಯಕ್ಕಾಗಿ ಬೀದಿಗಿಳಿಯುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಟೀಕಿಸಿದ ಅವರು, ಸಂಬಂಧಪಟ್ಟವರು ನೈತಿಕ ಹೊಣೆ ಹೊತ್ತು ಜನರ ಮುಂದೆ ಉತ್ತರಿಸಬೇಕು ಎಂದು ಆಗ್ರಹಿಸಿದರು.ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಗಳನ್ನು ಸ್ಥಾಪಿಸಿರುವುದಾಗಿ ಸರ್ಕಾರ ಹೇಳಿಕೊಳ್ಳುತ್ತಿದೆ. ಆದರೆ ಅಂತಹ ನ್ಯಾಯಾಲಯಗಳಲ್ಲಿ ಎಷ್ಟು ಪ್ರಕರಣಗಳಿಗೆ ತ್ವರಿತ ನ್ಯಾಯ ದೊರೆತಿದೆ, ಎಷ್ಟು ಆರೋಪಿಗಳಿಗೆ ಶಿಕ್ಷೆಯಾಗಿದೆ ಎಂಬುದನ್ನು ಸರ್ಕಾರ ಸಾರ್ವಜನಿಕರ ಮುಂದೆ ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ ನಡೆದಿರುವುದು ಖಂಡನೀಯ. ವಿದ್ಯಾರ್ಥಿಗಳ ಧ್ವನಿಯನ್ನು ಬಲಪ್ರಯೋಗದಿಂದ ಮಣಿಸಲು ಸಾಧ್ಯವಿಲ್ಲ. ಅವರ ಭವಿಷ್ಯವನ್ನು ರಕ್ಷಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ತಕ್ಷಣವೇ ಸೂಕ್ತ ಕ್ರಮ ಕೈಗೊಂಡು ಶಿಕ್ಷಣ ವ್ಯವಸ್ಥೆಯ ಮೇಲಿನ ವಿಶ್ವಾಸವನ್ನು ಮರುಸ್ಥಾಪಿಸಬೇಕು ಎಂದು ಶ್ರೇಯಸ್ ಪಟೇಲ್ ಆಗ್ರಹಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.