ಜಿಲ್ಲೆಯಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ಶೂನ್ಯವಾಗಬೇಕು-ಜಿಲ್ಲಾಧಿಕಾರಿ

KannadaprabhaNewsNetwork | Published : Aug 20, 2024 12:45 AM

ಸಾರಾಂಶ

ಹಾವೇರಿ ಜಿಲ್ಲೆಯಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ಶೂನ್ಯವಾಗಬೇಕು. ಈ ನಿಟ್ಟಿನಲ್ಲಿ ಎಲ್ಲಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಸಕ್ರಿಯವಾಗಿ ಕೆಲಸ ಮಾಡಬೇಕು. ಗ್ರಾಮೀಣ ಪ್ರದೇಶದಲ್ಲಿ ಜನಜಾಗೃತಿ ಜಾಥಾಗಳ ಮೂಲಕ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಸೂಚನೆ ನೀಡಿದರು.

ಹಾವೇರಿ: ಜಿಲ್ಲೆಯಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ಶೂನ್ಯವಾಗಬೇಕು. ಈ ನಿಟ್ಟಿನಲ್ಲಿ ಎಲ್ಲಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಸಕ್ರಿಯವಾಗಿ ಕೆಲಸ ಮಾಡಬೇಕು. ಗ್ರಾಮೀಣ ಪ್ರದೇಶದಲ್ಲಿ ಜನಜಾಗೃತಿ ಜಾಥಾಗಳ ಮೂಲಕ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿವಿಧ ಯೋಜನೆಗಳ ಜಿಲ್ಲಾ ಮಟ್ಟದ ಸಮಿತಿ ಸಭೆಗಳ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸ್ಥಳೀಯವಾಗಿ ಕೆಲಸಮಾಡುವ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಬಾಲ್ಯ ವಿವಾಹ ತಡೆಯುವ ಕೆಲಸವನ್ನು ತುಂಬಾ ಜವಾಬ್ದಾರಿಯಿಂದ ನಿಭಾಯಿಸಬೇಕು ಎಂದರು.ಮಕ್ಕಳ ಗ್ರಾಮ ಸಭೆ ಕಡ್ಡಾಯಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮಕ್ಕಳ ಗ್ರಾಮ ಸಭೆಗಳನ್ನು ಕಡ್ಡಾಯವಾಗಿ ಆಯೋಜಿಸಿ ಬಾಲ್ಯ ವಿವಾಹ ನಿಷೇಧದ ಕುರಿತು ಮಾಹಿತಿ ನೀಡಬೇಕು. ಎಲ್ಲಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಮತ್ತು ಮೇಲ್ವಿಚಾರಕಿಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಕಾವಲು ಸಮಿತಿಯ ಜೊತೆಗೆ ಸಮನ್ವಯದಿಂದ ಕೆಲಸಮಾಡಬೇಕು ಎಂದು ಸೂಚಿಸಿದರು.ಸಿಸಿ ಕ್ಯಾಮೆರಾ ಕಡ್ಡಾಯ: ಜಿಲ್ಲೆಯಲ್ಲಿರುವ ಬಾಲಕಿಯರ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರ ಮತ್ತು ವಸತಿ ಸೌಕರ್ಯ ಕಲ್ಪಿಸುವ ಜೊತೆಗೆ ಅವರಿಗೆ ಯಾವುದೇ ತೊಂದರೆಯಾಗದಂತೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ವಸತಿ ನಿಲಯಗಳಲ್ಲಿ ಬಯೋಮೆಟ್ರಿಕ್ ಮತ್ತು ಸಿಸಿ ಟಿವಿಗಳನ್ನು ಕಡ್ಡಾಯವಾಗಿ ಅಳವಡಿಸಬೇಕು. ಎಲ್ಲಾ ಅಧಿಕಾರಿಗಳು ತಮ್ಮ ವ್ಯಾಪ್ತಿಗೆ ಬರುವ ನಿಲಯಗಳಿಗೆ ಭೇಟಿ ನೀಡಿ ಪರಿಶೀಲಿಸಲು ಸೂಚನೆ ನೀಡಿದರು.ಸಖಿ ಒನ್ ಸ್ಟಾಪ್ ಸೆಂಟರ್ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದು, ಇದರ ಜೊತೆಗೆ ಅಲ್ಲಿಯ ಸಿಬ್ಬಂದಿಗಳು ಕ್ರಿಯಾಶೀಲರಾಗಿ ಕೆಲಸ ಮಾಡಬೇಕು ಮತ್ತು ಪ್ರಕರಣಗಳ ಸ್ಥಿಗತಿಗಳನ್ನು ಸಂಬಂಧಪಟ್ಟ ಇಲಾಖೆಯವರ ಜೊತೆ ಚರ್ಚಿಸಿ ನಿರಂತರವಾಗಿ ಅನುಪಾಲನೆ ಮಾಡಬೇಕು ಎಂದು ಸೂಚನೆ ನೀಡಿದರು.ಮಕ್ಕಳ ಸಾಗಾಣಿಕೆ ಮತ್ತು ಮಹಿಳೆಯ ದೌರ್ಜನ್ಯ ನಡೆಯದಂತೆ ಸ್ಥಳೀಯವಾಗಿ ಕಾವಲು ಸಮಿತಿಗಳು ಗಮನಹರಿಸಬೇಕು. ಮೇಲ್ವಿಚಾರಕಿಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರಿಗೆ ಅಧಿಕಾರಿಗಳು ಸೂಕ್ತ ಮಾರ್ಗದರ್ಶನ ನೀಡಿ ಇಂತಹ ಪ್ರಕರಣಗಳು ಜಿಲ್ಲೆಯಲ್ಲಿ ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.ಮೇಲಿನ ಎಲ್ಲ ಯೋಜನೆಗಳ ಬಗ್ಗೆ ಜಿಲ್ಲೆಯ ವಿವಿಧ ಇಲಾಖೆಗಳು ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಜೊತೆ ಸುದೀರ್ಘವಾಗಿ ಚರ್ಚಿಸಿ ಎಲ್ಲ ಯೋಜನೆಗಳ ಪ್ರಗತಿಯಲ್ಲಿ ನಮ್ಮ ಜಿಲ್ಲೆ ಮೊದಲನೆ ಸ್ಥಾನದಲ್ಲಿ ಇರುವಂತೆ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಹಾಜರಿದ್ದ ಎಲ್ಲಾ ಅಧಿಕಾರಿಗಳಿಗೆ ಸೂಚಿಸಿದರು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆಲದರ್ತಿ ಮಾತನಾಡಿ, ಇಲಾಖೆಯಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್‌ ಪೋನ್ ನೀಡಲಾಗಿದೆ. ಪ್ರತಿಯೊಂದು ಮಗುವಿನ ಮಾಹಿತಿಯನ್ನು ಪೋಷಣ ಟ್ರ್ಯಾಕರ್‌ನಲ್ಲಿ ಅಳವಡಿಸಲಾಗುತ್ತಿದೆ ಹಾಗೂ ಅಪೌಷ್ಟಿಕ ಮಕ್ಕಳ ಬಗ್ಗೆ ಹೆಚ್ಚಿನ ಒತ್ತು ಕೊಟ್ಟು ಅಪೌಷ್ಠಿಕತೆ ಹೋಗಲಾಡಿಸಲು ಇಲಾಖೆಯು ಕೆಲಸ ಮಾಡುತ್ತಿದೆ ಎಂದು ಸಭೆಗೆ ಮಾಹಿತಿ ನೀಡಿದರು.ಫಲಾನುಭವಿಗಳ ಆಧಾರ ಪೋಷಣ ಟ್ರ್ಯಾಕರ್‌ನಲ್ಲಿ ಜೋಡೆಣೆಯಾಗುವಂತೆ ಜಿಲ್ಲಾ ಮತ್ತು ತಾಲ್ಲೂಕು ಯೋಜನೆಯ ಸಂಯೋಜಕರು ಕೆಲಸ ಮಾಡಬೇಕು ಎಲ್ಲಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಗಮನಹರಿಸಬೇಕು ಎಂದು ಸೂಚನೆ ನೀಡಿದರು. ಸಭೆಯಲ್ಲಿ ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಬಿ.ಆರ್.ಮುತಾಲಿಕದೇಸಾಯಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ್ ಶ್ರೀಧರ್, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Share this article