)
ದತ್ತು ಮಾಸಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಜಾಥಾ ಕಾರ್ಯಕ್ರಮಕ್ಕೆ ಚಾಲನೆ
ಅನಾಥ, ಪರಿತ್ಯಕ್ತ ಹಾಗೂ ನಿರ್ಗತಿಕ ಮಕ್ಕಳಿಗೆ ಸುರಕ್ಷಿತ ಕುಟುಂಬದ ಆಶ್ರಯ ಕಲ್ಪಿಸುವುದು ದತ್ತು ಮಾಸಾಚರಣೆಯ ಪ್ರಮುಖ ಉದ್ದೇಶವಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವುಗಳ ಸಹಯೋಗದಲ್ಲಿ ರಾಷ್ಟ್ರೀಯ ದತ್ತು ಮಾಸಾಚರಣೆ -2026ರ ಅಂಗವಾಗಿ ಮಕ್ಕಳನ್ನು ದತ್ತು ಪಡೆಯಲು ಅನ್ಯ ಮಾರ್ಗ ಬೇಡ, ಕಾನೂನು ಬದ್ಧ ದತ್ತು ಪ್ರಕ್ರಿಯೆ ಪಾಲಿಸಿ ಎಂಬ ಘೋಷವಾಕ್ಯದಡಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಕಾನೂನು ಬದ್ಧ ದತ್ತು ಸ್ವೀಕಾರದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಮಕ್ಕಳು ಕೌಟುಂಬಿಕ ವಾತಾವರಣದಲ್ಲಿ ಬೆಳೆಯುವುದು ಅವರ ಸರ್ವತೋಮುಖ ಅಭಿವೃದ್ಧಿಗೆ ಉತ್ತಮವಾಗಿದೆ. ಮಕ್ಕಳಿಲ್ಲದ ದಂಪತಿಗಳಿಗೆ ಪೋಷಕರಾಗುವ ಅವಕಾಶ ಮತ್ತು ಅನಾಥ ಮಕ್ಕಳಿಗೆ ಶಾಶ್ವತ ಕುಟುಂಬವನ್ನು ಒದಗಿಸಿದಂತಾಗುತ್ತದೆ. ದತ್ತು ಪಡೆದ ಮಗುವಿಗೆ ಕಾನೂನು ಬದ್ಧ ಸ್ಥಾನಮಾನ ಸಿಗುತ್ತದೆ. ದತ್ತು ಪಡೆದ ಪೋಷಕರ ಸ್ಥಿರ ಮತ್ತು ಚರಾಸ್ತಿಗಳ ಮೇಲೆ ಮಗುವಿಗೆ ಸಂಪೂರ್ಣ ಕಾನೂನು ಬದ್ಧ ಹಕ್ಕು ಲಭಿಸುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಅನಪೇಕ್ಷಿತ ಅಥವಾ ಸಂಕಷ್ಟದಲ್ಲಿರುವ ಶಿಶುಗಳನ್ನು ಎಲ್ಲೆಂದರಲ್ಲಿ ಬೀಸಾಡದೇ ಸರ್ಕಾರ ಸ್ಥಾಪಿಸಿರುವ ಮಮತೆಯ ತೊಟ್ಟಿಲು ಕೇಂದ್ರಗಳಲ್ಲಿ ಸುರಕ್ಷಿತವಾಗಿ ಬಿಡುವಂತೆ ಅರಿವು ಮೂಡಿಸಲಾಗುತ್ತಿದೆ. ಕಾನೂನು ಬದ್ಧ ದತ್ತು ಸ್ವೀಕಾರದಿಂದ ಮಗುವಿಗೆ ಪ್ರೀತಿ, ಕಾಳಜಿ ಮತ್ತು ಸುರಕ್ಷಿತ ಕುಟುಂಬದ ವಾತಾವರಣ ದೊರೆಯುತ್ತದೆ ಎಂದರು.
ಈ ಸಂದರ್ಭ ಜಿಪಂ ಸಿಇಒ ಮುಕುಲ್ ಜೈನ್, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ರಾಧಾ ಮಣ್ಣೂರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಯಶ್ರೀ ಆರ್., ಕಾರ್ಮಿಕ ಇಲಾಖೆ ಅಧಿಕಾರಿ ಶ್ರೀಶೈಲ ಸೋಮನಕಟ್ಟಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಶ್ರೀಮತಿ ಜಯದೇವಿ ಕವಲೂರ, ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾದ ಬಸವರಾಜ ಸಂಶಿ, ಡಿ.ಐ. ಈರಗಾರ, ಸುಪರ್ಣ ಬ್ಯಾಹಟ್ಟಿ, ಬಾಲ ನ್ಯಾಯ ಮಂಡಳಿ ಸದಸ್ಯೆ ಶೋಭಾ ಉಮಚಗಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮಕ್ಕಳ ಸಹಾಯವಾಣಿ ಸಿಬ್ಬಂದಿಗಳು, ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳು, ಪ್ರೌಢಶಾಲಾ ಮುಖ್ಯೋಪಾಧ್ಯಾಯರು, ನರ್ಸಿಂಗ್ ಕಾಲೇಜ್ ವಿದ್ಯಾರ್ಥಿಗಳು ಹಾಜರಿದ್ದರು.
ಮಲ್ಲಪ್ಪ ಹೊಸಳ್ಳಿ ಸ್ವಾಗತಿಸಿ, ನಿರೂಪಿಸಿದರು.