ಪೊಲೀಸರು ದೇಶದ ಒಳಗಿನ ಸೈನಿಕರು, ಸಮಾಜದ ರಕ್ಷಕರು: ಡಾ.ಕುಮಾರ

KannadaprabhaNewsNetwork |  
Published : Nov 26, 2026, 01:45 AM IST
25ಕೆಎಂಎನ್ ಡಿ29 | Kannada Prabha

ಸಾರಾಂಶ

ಕರ್ತವ್ಯದ ಒತ್ತಡದ ನಡುವೆಯೂ ಪ್ರತಿಯೊಬ್ಬ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ತಮ್ಮ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಆದ್ಯತೆ ನೀಡಬೇಕು. ದಿನದ ಒಂದು ಗಂಟೆಯನ್ನು ಆರೋಗ್ಯಕ್ಕಾಗಿ ಮೀಸಲಿಟ್ಟು ಕ್ರೀಡೆ, ಯೋಗ, ವ್ಯಾಯಾಮದಲ್ಲಿ ತೊಡಗಿದರೆ ಒತ್ತಡ ನಿರ್ವಹಿಸಲು ಸಹಕಾರಿಯಾಗಲಿದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಪೊಲೀಸರು ದೇಶದ ಒಳಗಿನ ಸೈನಿಕರಾಗಿ ಸಮಾಜದ ರಕ್ಷಣೆ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಮಹತ್ವದ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಶ್ಲಾಘಿಸಿದರು.ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಇಲಾಖೆಯಿಂದ ಆಯೋಜಿಸಿದ್ದ ವಾರ್ಷಿಕ ಪೊಲೀಸ್ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿ, ಆರೋಗ್ಯವಂತ ಪೊಲೀಸ್ ಸಿಬ್ಬಂದಿಯಿಂದ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ ಎಂದರು.

ಕರ್ತವ್ಯದ ಒತ್ತಡದ ನಡುವೆಯೂ ಪ್ರತಿಯೊಬ್ಬ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ತಮ್ಮ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಆದ್ಯತೆ ನೀಡಬೇಕು. ದಿನದ ಒಂದು ಗಂಟೆಯನ್ನು ಆರೋಗ್ಯಕ್ಕಾಗಿ ಮೀಸಲಿಟ್ಟು ಕ್ರೀಡೆ, ಯೋಗ, ವ್ಯಾಯಾಮದಲ್ಲಿ ತೊಡಗಿದರೆ ಒತ್ತಡ ನಿರ್ವಹಿಸಲು ಸಹಕಾರಿಯಾಗಲಿದೆ ಎಂದರು.

ಪೊಲೀಸರು ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢರಾಗಿದ್ದಾಗ ಮಾತ್ರ ತಮ್ಮ ಕರ್ತವ್ಯಗಳನ್ನು ಸಮರ್ಥವಾಗಿ ನಿರ್ವಹಿಸಲು ಸಾಧ್ಯ. ಕಾನೂನು ಸುವ್ಯವಸ್ಥೆ ಕಾಪಾಡುವುದು, ಅಪರಾಧ ಚಟುವಟಿಕೆಗಳನ್ನು ತಡೆಗಟ್ಟುವುದು ಸೇರಿದಂತೆ ವಿವಿಧ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಲು ಉತ್ತಮ ಆರೋಗ್ಯ ಅತ್ಯಗತ್ಯ ಎಂದರು.

ವೃತ್ತಿ ಬದುಕಿನಲ್ಲಿ ಮಾನಸಿಕ ಒತ್ತಡ ಎದುರಾಗುವುದು ಸಹಜ. ಇಂತಹ ಒತ್ತಡದಿಂದ ಹೊರಬರಲು ಉತ್ತಮ ಹವ್ಯಾಸ, ಸಕಾರಾತ್ಮಕ ಚಿಂತನೆ ಹಾಗೂ ಆರೋಗ್ಯಕರ ಜೀವನಶೈಲಿ ರೂಢಿಸಿಕೊಳ್ಳಬೇಕು. ದಿನದ 24 ಗಂಟೆಗಳಲ್ಲಿ ಕನಿಷ್ಠ ಒಂದು ಗಂಟೆಯನ್ನು ಆರೋಗ್ಯಕ್ಕಾಗಿ ಮೀಸಲಿಟ್ಟರೆ ದಿನವಿಡೀ ಉತ್ಸಾಹದಿಂದ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತದೆ ಎಂದರು.

ವಾರ್ಷಿಕ ಪೊಲೀಸ್ ಕ್ರೀಡಾಕೂಟವು ಸಿಬ್ಬಂದಿಯಲ್ಲಿರುವ ಕ್ರೀಡಾ ಪ್ರತಿಭೆಗಳನ್ನು ಗುರುತಿಸಲು ಹಾಗೂ ತಮ್ಮ ಸಾಮರ್ಥ್ಯ ಪ್ರದರ್ಶಿಸಲು ಉತ್ತಮ ವೇದಿಕೆಯಾಗಿದೆ. ಪ್ರತಿಯೊಬ್ಬರೂ ತಮ್ಮ ಆಸಕ್ತಿಯ ಕ್ರೀಡೆ ಮತ್ತು ಕಲಾ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿಸಿಕೊಳ್ಳಬೇಕು. ಪೊಲೀಸ್ ಸಿಬ್ಬಂದಿ ಕುಟುಂಬದ ಸದಸ್ಯರೂ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿರುವುದು ವಿಶೇಷವಾಗಿದೆ ಎಂದರು.

ದ್ವಿತೀಯ ದಕ್ಷಿಣ ಏಷ್ಯಾ ಚಾಂಪಿಯನ್‌ಷಿಪ್‌ನಲ್ಲಿ ಭಾಗವಹಿಸಿ ಚಾಂಪಿಯನ್ ಆಗುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿರುವ ಕುಮಾರಿ ಗಾನವಿ ನಂದೀಶ್ ಅವರನ್ನು ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾರಾಣಿ, ಪೊಲೀಸ್ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಂಗವೈಕಲ್ಯ ಸಾಧನೆಗೆ ಅಡ್ಡಿಯಾಗಬಾರದು: ಗೀತಾಲಕ್ಷ್ಮಿ
ನ.30 ರಂದು ಹೇಮಗಿರಿ ಸಕ್ಕರೆ ಕಾರ್ಖಾನೆ ಎದುರು ಪ್ರತಿಭಟನೆ