ಕಾರವಾರ:
ರಾಜ್ಯದ ಉಪ ಲೋಕಾಯುಕ್ತ ನ್ಯಾ. ಕೆ.ಎನ್. ಫಣೀಂದ್ರ ಮಾ. 1ರಿಂದ 4ರ ವರೆಗೆ ಜಿಲ್ಲೆಗೆ ಭೇಟಿ ನೀಡಲಿದ್ದು, ಈ ವೇಳೆ ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚಿಸಿದರು.ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಪ ಲೋಕಾಯುಕ್ತರ ಭೇಟಿ ಕುರಿತಾಗಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಉಪ ಲೋಕಾಯುಕ್ತರು ತಮ್ಮ ಭೇಟಿಯ ಸಂದರ್ಭದಲ್ಲಿ ಜಿಲ್ಲೆಯ ಸರ್ಕಾರಿ ಕಚೇರಿಗಳಿಗೆ ಅನಿರೀಕ್ಷಿತ ಭೇಟಿ ನೀಡಲಿದ್ದು, ಇಲಾಖೆಗಳಲ್ಲಿ ಕಡ್ಡಾಯವಾಗಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಕಚೇರಿಗಳ ಮುಂಭಾಗದಲ್ಲಿ ಉಪ ಲೋಕಾಯುಕ್ತರ ಭೇಟಿ ಕಾರ್ಯಕ್ರಮದ ಕುರಿತು ಸಾರ್ವಜನಿಕರಿಗೆ ಮಾಹಿತಿ ದೊರೆಯುವಂತೆ ಬ್ಯಾನರ್ ಅಳವಡಿಸಬೇಕು ಎಂದು ಹೇಳಿದರು.ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಿಸಿದಂತೆ ಲೋಕಾಯುಕ್ತದಲ್ಲಿ ಬಾಕಿ ಇರುವ ಪ್ರಕರಣಗಳ ಕುರಿತಂತೆ ಅಗತ್ಯ ಮಾಹಿತಿ ಸಿದ್ಧವಾಗಿಟ್ಟುಕೊಂಡು ವಿಚಾರಣೆ ಸಂದರ್ಭದಲ್ಲಿ ಹಾಜರುಪಡಿಸಬೇಕು ಎಂದು ತಿಳಿಸಿದರು.ಹಾಸ್ಟೆಲ್ , ಜಿಲ್ಲಾಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರ, ಅಂಗನವಾಡಿ ಕೇಂದ್ರ, ಶಾಲಾ-ಕಾಲೇಜುಗಳಲ್ಲಿ ಸ್ವಚ್ಛತೆ ಕಾಪಾಡುವ ಜತೆಗೆ ಮೂಲಭೂತ ಸೌಕರ್ಯಗಳ ಕೊರತೆ ಕಂಡುಬರದಂತೆ ಸಿದ್ಧತೆ ಕೈಗೊಳ್ಳಬೇಕು. ವಿಷಯ ನಿರ್ವಾಹಕರು ಹಾಗೂ ಎಲ್ಲ ಸಿಬ್ಬಂದಿ ಕಚೇರಿಯ ಕರ್ತವ್ಯಕ್ಕೆ ಹಾಜರಿರುವಂತೆ ನೋಡಿಕೊಳ್ಳಬೇಕು ಎಂದರು.ಮಾ. 2ರಂದು ಉಪ ಲೋಕಾಯುಕ್ತರು ಬೆಳಗ್ಗೆ 11ರಿಂದ ಮಧ್ಯಾಹ್ನ 1.30ರ ವರೆಗೆ ಮತ್ತು ಮಧ್ಯಾಹ್ನ 2.30ರಿಂದ ಸಂಜೆ 5ರ ವರೆಗೆ ಜಿಲ್ಲಾಧಿಕಾರಿ ಕಚೇರಿಗಳಲ್ಲಿ ಸಾರ್ವಜನಿಕರಿಂದ ದೂರುಗಳ ಸ್ವೀಕಾರ ಮತ್ತು ಅವುಗಳ ವಿಚಾರಣೆ ನಡೆಸಲಿದ್ದಾರೆ. ಮಾ. 3ರಂದು ಜಿಲ್ಲೆಯ ವಿವಿಧ ಸರ್ಕಾರಿ ಕಚೇರಿಗಳಿಗೆ ಅನಿರೀಕ್ಷಿತ ಭೇಟಿ ನೀಡಿ, ಪರಿಶೀಲನೆ ನಡೆಸಲಿದ್ದಾರೆ. ಮಾ. 4ರಂದು ಜಿಪಂ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದು, ಜಿಲ್ಲೆಯಲ್ಲಿ ಸಾರ್ವಜನಿಕರಿಂದ ಸ್ವೀಕೃತವಾಗಿರುವ ದೂರುಗಳ ಕುರಿತಂತೆ ಸಂಬಂಧಪಟ್ಟ ಅಧಿಕಾರಿಗಳ ವಿಚಾರಣೆ ನಡೆಸಲಿದ್ದಾರೆ ಎಂದು ತಿಳಿಸಿದರು.
ಶಿಷ್ಟಾಚಾರದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಡಿಸಿ, ಜಿಲ್ಲೆಯ ಸಾರ್ವಜನಿಕರಿಂದ ಲೋಕಾಯುಕ್ತಕ್ಕೆ ಸಲ್ಲಿಕೆಯಾಗುವ ದೂರುಗಳ ಕುರಿತು ನಡೆಯುವ ವಿಚಾರಣಾ ಸಂದರ್ಭದಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಹಾಗೂ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿಚಾರಣಾ ಪ್ರಕ್ರಿಯೆ ನಡೆಸಲು ಅಗತ್ಯವಿರುವ ಅಗತ್ಯ ವ್ಯವಸ್ಥೆ ಕೈಗೊಳ್ಳುವಂತೆ ಹಾಗೂ ಕಾರ್ಯಕ್ರಮದಲ್ಲಿ ಲೋಪವಾಗದಂತೆ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಅಪರ ಜಿಲ್ಲಾಧಿಕಾರಿ ಪ್ರಕಾಶ ರಾಜಪೂತ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.