ಕನ್ನಡಪ್ರಭ ವಾರ್ತೆ ಬೀದರ್
ನಗರದ ಡಾ. ಅಂಬೇಡ್ಕರ್ ವೃತ್ತದಲ್ಲಿ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಸೇರಿದ್ದ ಪ್ರತಿಭಟನಾಕಾರರು ರಾಷ್ಟ್ರಪತಿಗಳಿಗೆ ಬರೆದ ಮನವಿಯನ್ನು ಸಲ್ಲಿಸಿ, ಮತದಾರರ ಹಕ್ಕುಗಳ ರಕ್ಷಣೆ ಹಾಗೂ ಪ್ರಜಾಪ್ರಭುತ್ವದ ಪುನರ್ ಸ್ಥಾಪನೆಗಾಗಿ ದೇಶವ್ಯಾಪಿಯಾಗಿ ‘ಜನತೆಯ ನಡಿಗೆ’ ಮತ್ತು ‘ಜಂತರ್ ಮಂತರ್’ ಮಾದರಿಯ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಎಸ್‌ಐಆರ್ ಪ್ರಕ್ರಿಯೆಯನ್ನು ರದ್ದುಪಡಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಹಾಗೂ ಮತದಾರರ ಪಟ್ಟಿಯಿಂದ ಕೈಬಿಡಲಾದ ಅರ್ಹ ಮತದಾರರ ಹೆಸರುಗಳನ್ನು ಮರುಸೇರ್ಪಡೆಗೊಳಿಸಬೇಕು ಎಂದು ಆಗ್ರಹಿಸಿದರು.
ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಅಸ್ತಿತ್ವವು ಮುಕ್ತ, ನ್ಯಾಯಸಮ್ಮತ ಹಾಗೂ ಪಾರದರ್ಶಕ ಚುನಾವಣಾ ವ್ಯವಸ್ಥೆಯ ಮೇಲೆ ನಿಂತಿದೆ. ಮತದಾರರು ಆಳುವವರನ್ನು ಆಯ್ಕೆ ಮಾಡಬೇಕೇ ಹೊರತು, ಆಳುವವರೇ ಮತದಾರರನ್ನು ಆಯ್ಕೆ ಮಾಡುವ ಪರಿಸ್ಥಿತಿ ನಿರ್ಮಾಣವಾಗಬಾರದು ಆದರೆ, ಚುನಾವಣಾ ಆಯೋಗದ ನೇಮಕಾತಿ ವ್ಯವಸ್ಥೆಯಲ್ಲಿ ಮಾಡಲಾದ ಬದಲಾವಣೆಗಳು ಆಯೋಗದ ಸ್ವಾಯತ್ತತೆ ಮತ್ತು ವಿಶ್ವಾಸಾರ್ಹತೆಯ ಬಗ್ಗೆ ಅನುಮಾನ ಮೂಡಿಸಿವೆ ಎಂದು ಸಂಘಟನೆ ಆರೋಪಿಸಿದೆ.2023ರ ಡಿಸೆಂಬರ್‌ನಲ್ಲಿ ಚುನಾವಣಾ ಆಯುಕ್ತರ ನೇಮಕಾತಿ ಕಾಯ್ದೆಗೆ ತಂದ ತಿದ್ದುಪಡಿಗಳು ಆಡಳಿತ ಪಕ್ಷಕ್ಕೆ ಅನುಕೂಲವಾಗುವಂತಿವೆ. 2024ರ ಲೋಕಸಭಾ ಚುನಾವಣೆ ಹಾಗೂ ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗಳಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪಗಳ ಕುರಿತು ನಿಷ್ಪಕ್ಷಪಾತ ತನಿಖೆಯಾಗಬೇಕು ಎಂದು ಒಕ್ಕೂಟ ಒತ್ತಾಯಿಸಿದೆ.
ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು ಪ್ರಶ್ನೆಗಳು ಎದ್ದಿರುವ ಸಂದರ್ಭದಲ್ಲಿ ಪ್ರತಿಭಟನೆಗಳನ್ನು ನಿರ್ಭಂಧಿಸುವುದು, ವಿದ್ಯಾರ್ಥಿಗಳು ಮತ್ತು ಯುವಜನರ ವಿರುದ್ಧ ಪ್ರಕರಣ ದಾಖಲಿಸುವುದು, ಪ್ರಜಾಸತ್ತಾತ್ಮಕ ಹಕ್ಕುಗಳ ದಮನವಾಗಿದೆ ಎಂದು ಒಕ್ಕೂಟ ಕಳವಳ ವ್ಯಕ್ತಪಡಿಸಿದೆ.