ಪತ್ರಿಕಾ ರಂಗ ಸಮಾಜಕ್ಕೆ ಅಪಾರ ಕೊಡುಗೆ ನೀಡಿದೆ : ಸಚಿವ ಕೆ.ಜೆ.ಜಾರ್ಜ್

KannadaprabhaNewsNetwork |  
Published : Jul 6, 2025 1:48 AM IST
ಚಿಕ್ಕಮಗಳೂರು ಪ್ರೆಸ್‌ ಕ್ಲಬ್‌ ಸ್ಕೌಟ್‌ ಭವನದಲ್ಲಿ ಶನಿವಾರ ಏರ್ಪಡಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಸಚಿವ ಕೆ.ಜೆ. ಜಾರ್ಜ್‌ ಅವರು ಉದ್ಘಾಟಿಸಿ ಮಾತನಾಡಿದರು. ಶಾಸಕ ಎಚ್‌.ಡಿ. ತಮ್ಮಯ್ಯ, ವಿಧಾನಪರಿಷತ್‌ ಸದಸ್ಯರಾದ ಸಿ.ಟಿ. ರವಿ, ಎಸ್‌.ಎಲ್‌. ಭೋಜೇಗೌಡ, ಪ್ರೆಸ್‌ ಕ್ಲಬ್‌ ಅಧ್ಯಕ್ಷ ಪಿ. ರಾಜೇಶ್‌, ಪ್ರಧಾನ ಕಾರ್ಯದರ್ಶಿ ಆರ್‌. ತಾರಾನಾಥ್‌, ಎನ್.ಕೆ. ಗೋಪಿ ಇದ್ದರು. | Kannada Prabha

ಸಾರಾಂಶ

ಚಿಕ್ಕಮಗಳೂರು, ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಪತ್ರಿಕಾ ರಂಗ ಸಮಾಜಕ್ಕೆ ಅಪಾರ ಕೊಡುಗೆ ನೀಡಿದೆ ಎಂದು ರಾಜ್ಯ ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಹೇಳಿದರು.

- ಚಿಕ್ಕಮಗಳೂರು ಪ್ರೆಸ್‌ ಕ್ಲಬ್‌ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ । ಸ್ಕೌಟ್‌ ಭವನದಲ್ಲಿ ನಡೆದ ಕಾರ್ಯಕ್ರಮ,

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಪತ್ರಿಕಾ ರಂಗ ಸಮಾಜಕ್ಕೆ ಅಪಾರ ಕೊಡುಗೆ ನೀಡಿದೆ ಎಂದು ರಾಜ್ಯ ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಹೇಳಿದರು.

ಶನಿವಾರ ನಗರದ ಸ್ಕೌಟ್ ಭವನದಲ್ಲಿ ಚಿಕ್ಕಮಗಳೂರು ಪ್ರೆಸ್‌ ಕ್ಲಬ್ ನಿಂದ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗದ ಜತೆಗೆ ಪತ್ರಿಕಾ ರಂಗವೂ ಒಂದಾಗಿದ್ದು, ರಚನಾತ್ಮಕ ಟೀಕೆ, ಟಿಪ್ಪಣಿಗಳ ಮೂಲಕ ರಾಜಕೀಯ ರಂಗ, ಆಡಳಿತ ವರ್ಗವನ್ನು ಎಚ್ಚರಿಸಿ ಸರಿದಾರಿಗೆ ತರುವ ಕೆಲಸವನ್ನು ನಿರಂತರವಾಗಿ ಮಾಡಿಕೊಂಡು ಬರುತ್ತಿದೆ ಎಂದರು.ಪತ್ರಿಕಾ ವಲಯದಿಂದ ರಚನಾತ್ಮಕ ಟೀಕೆ, ಟಿಪ್ಪಣಿಗಳು ಆ ಕ್ಷಣಕ್ಕೆ ನೋವುಂಟು ಮಾಡಿದರು. ಅವುಗಳನ್ನು ಸಕರಾತ್ಮಕವಾಗಿ ತೆಗೆದುಕೊಳ್ಳುವುದರಿಂದ ಸಮಾಜಕ್ಕೆ ಒಳ್ಳೆಯದಾಗುತ್ತದೆ. ಸಮಸ್ಯೆಗಳನ್ನು ಗುರುತಿಸಿ ಪರಿಹರಿಸಲು ಸಾಧ್ಯ ವಾಗುತ್ತದೆ ಎಂದು ಹೇಳಿದ ಸಚಿವರು, ತಮ್ಮ ರಾಜಕೀಯ ಜೀವನದಲ್ಲಿ ಅನೇಕ ಪತ್ರಕರ್ತರು ತಮಗೆ ಮಾರ್ಗ ದರ್ಶನ ನೀಡಿದ್ದನ್ನು ಸ್ಮರಿಸಿಕೊಂಡರು. ಅನೇಕ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ ಹಿರಿಯರು ತಮಗೆ ರಾಜಕೀಯವಾಗಿ ಮಾರ್ಗದರ್ಶನ ಮಾಡಿದ್ದಾರೆ ಎಂದು ಹೇಳಿದರು.ಯುವಶಕ್ತಿ ಈ ದೇಶದ ಸಂಪತ್ತು, ಯುವ ಶಕ್ತಿಯನ್ನು ಸಮರ್ಪಕವಾಗಿ ಬಳಸಿಕೊಂಡಲ್ಲಿ ದೇಶ ಅಭಿವೃದ್ಧಿ ಸಾಧ್ಯವಾಗುತ್ತದೆ. ಇಂದು ಸಾಕಷ್ಟು ವಿದ್ಯಾವಂತರು ಉದ್ಯೋಗ ದೊರೆಯದೆ ಸಮಸ್ಯೆ ಎದುರಿಸುತ್ತಿದ್ದಾರೆ. ವಿದ್ಯಾವಂತರಿಗೆ ಉದ್ಯೋಗ ಸೃಷ್ಠಿ ಸುವುದು ಕೇಂದ್ರ ಮತ್ತು ರಾಜ್ಯ ಸರ್ಕಾರದ ಜವಬ್ದಾರಿ. ರಾಜ್ಯ ಸರ್ಕಾರ ಉದ್ಯೋಗ ಸೃಷ್ಠಿಗೆ ಶ್ರಮಿಸುತ್ತಿದೆ ಎಂದು ಹೇಳಿದರು.ರಾಜ್ಯದಲ್ಲಿ ವಿದ್ಯುತ್‌ಗೆ ಭಾರೀ ಬೇಡಿಕೆ ಇದ್ದು, ಈ ನಿಟ್ಟಿನಲ್ಲಿ ಇಂಧನ ಇಲಾಖೆ ಕುಸುಮ್ ಯೋಜನೆ ಸೇರಿದಂತೆ ಇತರೆ ಯೋಜನೆಯಡಿಯಲ್ಲಿ ₹110 ಕೋಟಿ ವೆಚ್ಚದಲ್ಲಿ 2500 ಮೆಗಾ ವ್ಯಾಟ್ ಉತ್ಪಾದನೆಗೆ ಚಾಲನೆ ನೀಡಲಾಗಿದೆ. ಇದರಿಂದ ರಾಜ್ಯದ ರೈತರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.ಶಾಸಕ ಎಚ್.ಡಿ.ತಮ್ಮಯ್ಯ ಮಾತನಾಡಿ, ಪತ್ರಿಕಾರಂಗ ಸಮಾಜದ ಧ್ವನಿಯಾಗಿ ಕೆಲಸ ಮಾಡುತ್ತಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಅನೇಕ ಪತ್ರಿಕೆಗಳು ಶಕ್ತಿಮೀರಿ ಶ್ರಮಿಸಿವೆ. ಬ್ರಿಟಿಷರಿಗೆ ಭಯ ಪಡದೆ ನಿರ್ಭೀತಿಯಾಗಿ ಜನತೆಗೆ ವಿಷಯ ಮುಟ್ಟಿಸುವ ಕೆಲಸವನ್ನು ಪತ್ರಿಕೆಗಳು ಮಾಡಿವೆ. ಸಮಾಜದ ಅಂಕುಡೊಂಕುಗಳನ್ನು ತಿದ್ದಿ ತೀಡುವ ಕೆಲಸ ಪತ್ರಿಕೆಗಳು ಮಾಡುತ್ತಿವೆ ಎಂದು ಹೇಳಿದರು.ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮಾತನಾಡಿ, ಪ್ರಜಾಪ್ರಭುತ್ವದ 4ನೇ ಅಂಗವಾಗಿರುವ ಪತ್ರಿಕಾ ರಂಗ ನಿರ್ಭೀತಿ ಯಿಂದ ಕೆಲಸ ಮಾಡಬೇಕು. ಒಂದು ವೇಳೆ ಭೀತಿಯಿಂದ ಕೆಲಸ ಮಾಡಿದರೇ ಪ್ರಜಾಪ್ರಭುತ್ವವೇ ಅಪಾಯಕ್ಕೆ ತಲುಪುತ್ತದೆ. ಆಧುನಿಕ ತಂತ್ರಜ್ಞಾನ, ಸಾಮಾಜಿಕ ಜಾಲತಾಣದಿಂದ ದೂರ ಇದ್ದವರನ್ನು ಹತ್ತಿರ ಮಾಡುತ್ತಿದೆ. ಹತ್ತಿರ ಇದ್ದವರನ್ನು ದೂರ ಮಾಡುತ್ತಿದೆ. ಆಧುನಿಕ ತಂತ್ರಜ್ಞಾನದ ಪ್ರಭಾವ ಪತ್ರಿಕಾ ರಂಗದ ಮೇಲೂ ಬಿದ್ದಿದೆ. ಎಲ್ಲಾ ಸವಾಲುಗಳ ನಡುವೆ ನಿರ್ಭೀತೀಯ, ವಸ್ತುನಿಷ್ಠ, ಸತ್ಯದ ಸುದ್ದಿಗೆ ಆದ್ಯತೆ ಸಿಗಬೇಕು. ಆ ನಿಟ್ಟಿನಲ್ಲಿ ಚಿಂತನೆ ನಡೆಯಬೇಕು ಎಂದರು.ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಮಾತನಾಡಿ, ಇಂದು ಪತ್ರಿಕೆ ಓದುವವರ ಸಂಖ್ಯೆ ಕಡಿಮೆಯಾಗಿದೆ. ಪ್ರತಿಯೊಬ್ಬರು ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಪತ್ರಿಕೆಗಳು ಸಮಾಜದ ಕಣ್ಣು ತೆರೆಸುವ ಕೆಲಸ ಮಾಡುತ್ತಿದ್ದು, ವಸ್ತುನಿಷ್ಟ ವರದಿ ಮೂಲಕ ಸರ್ಕಾರ, ಜನಪ್ರತಿನಿಧಿಗಳು, ಅಧಿಕಾರಿಗಳನ್ನು ಎಚ್ಚರಿಸುವ ಕೆಲಸ ಪತ್ರಿಕೆಗಳು ಮಾಡುತ್ತಿವೆ ಎಂದು ಹೇಳಿದರು.ಜಿಲ್ಲಾಧಿಕಾರಿ ಸಿ.ಎನ್.ಮೀನಾನಾಗರಾಜ್ ಮಾತನಾಡಿ, ಜಿಲ್ಲೆಯಲ್ಲಿನ ಕುಗ್ರಾಮಗಳು ಇಂದಿಗೂ ಎದುರಿಸುತ್ತಿರುವ ಅನೇಕ ಸಮಸ್ಯೆಗಳನ್ನು ಜಿಲ್ಲಾಡಳಿತದ ಗಮನಕ್ಕೆ ತರುವ ಕೆಲಸವನ್ನು ಪತ್ರಿಕೆಗಳು ಮಾಡುತ್ತಿದ್ದು, ಸಮಸ್ಯೆ ನಿವಾರಣೆಗೆ ಸಹಕಾರಿ ಯಾಗಿವೆ. ಸರ್ಕಾರದ ಯೋಜನೆಗಳನ್ನು ಸಾರ್ವಜನಿಕರಿಗೆ ಮುಟ್ಟಿಸುವ ಮೂಲಕ ನೆರವಾಗುತ್ತಿವೆ ಎಂದರು.

ಚಿಕ್ಕಮಗಳೂರು ಪ್ರೆಸ್‌ ಕ್ಲಬ್ ಅಧ್ಯಕ್ಷ ಪಿ.ರಾಜೇಶ್ ಮಾತನಾಡಿ, ಪತ್ರಕರ್ತರು ಪತ್ರಿಕಾ ಮೌಲ್ಯ, ಸಿದ್ಧಾಂತಗಳ ನಡುವೆ ಮಾನವೀಯ ಮೌಲ್ಯ ಬೆಳೆಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿ.ಪಂ. ಮುಖ್ಯಕಾರ್ಯನಿರ್ವಹಣಾಧಿಕಾರಿ ಎಚ್.ಎಸ್. ಕೀರ್ತನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಮಂಜೇಗೌಡ ಉಪಸ್ಥಿತರಿದ್ದರು. ಪ್ರೆಸ್‌ ಕ್ಲಬ್‌ ಪ್ರಧಾನ ಕಾರ್ಯದರ್ಶಿ ಆರ್‌. ತಾರಾನಾಥ್‌ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪಾಧ್ಯಕ್ಷ ಸಿ.ಡಿ.ಚಂದ್ರೇಗೌಡ ಎ.ಎನ್.ಮೂರ್ತಿ, ಎನ್.ಕೆ.ಗೋಪಿ ಇದ್ದರು.

5 ಕೆಸಿಕೆಎಂ 1ಚಿಕ್ಕಮಗಳೂರು ಪ್ರೆಸ್‌ ಕ್ಲಬ್‌ ಸ್ಕೌಟ್‌ ಭವನದಲ್ಲಿ ಶನಿವಾರ ಏರ್ಪಡಿಸಿದ್ದ ಪತ್ರಿಕಾ ದಿನಾಚರಣೆಯನ್ನು ಸಚಿವ ಕೆ.ಜೆ. ಜಾರ್ಜ್‌ ಉದ್ಘಾಟಿಸಿ ಮಾತನಾಡಿದರು. ಶಾಸಕ ಎಚ್‌.ಡಿ. ತಮ್ಮಯ್ಯ, ವಿಧಾನಪರಿಷತ್‌ ಸದಸ್ಯರಾದ ಸಿ.ಟಿ. ರವಿ, ಎಸ್‌.ಎಲ್‌. ಭೋಜೇಗೌಡ, ಪ್ರೆಸ್‌ ಕ್ಲಬ್‌ ಅಧ್ಯಕ್ಷ ಪಿ. ರಾಜೇಶ್‌, ಪ್ರಧಾನ ಕಾರ್ಯದರ್ಶಿ ಆರ್‌. ತಾರಾನಾಥ್‌, ಎನ್.ಕೆ. ಗೋಪಿ ಇದ್ದರು.

PREV