-ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮ ಉದ್ಘಾಟಿಸಿದ ನಗರಸಭೆ ಅಧ್ಯಕ್ಷೆ ಸುಮಿತಾ ರಾಘವೇಂದ್ರ
ಕನ್ನಡಪ್ರಭ ವಾರ್ತೆ, ಚಿತ್ರದುರ್ಗ
ನಗರದ ಸ್ವಚ್ಛತೆ, ನೈರ್ಮಲ್ಯ ಕಾಪಾಡುವಲ್ಲಿ ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದು ನಗರಸಭೆ ಅಧ್ಯಕ್ಷೆ ಸುಮಿತಾ ರಾಘವೇಂದ್ರ ಹೇಳಿದರು.ನಗರಸಭೆ ಸಭಾಂಗಣದಲ್ಲಿ ಆಯೋಜಿಸಲಾದ ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಸರ್ಕಾರದ ಜತೆಯಲ್ಲಿ ಸಾರ್ವಜನಿಕರು ಇಚ್ಛಾಶಕ್ತಿಯಿಂದ ಸ್ವಯಂ ಪ್ರೇರಿತವಾಗಿ ಸ್ವಚ್ಛತಾ ಕಾರ್ಯದಲ್ಲಿ ಕೈಜೋಡಿಸಿದಾಗ ಮಾತ್ರ ಸ್ವಚ್ಛತಾ ಅಭಿಯಾನ ಯಶಸ್ವಿಯಾಗಲು ಸಾಧ್ಯವಾಗಲಿದೆ ಎಂದು ಹೇಳಿದರು.
ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್ ಮಾತನಾಡಿ, ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಜನರಲ್ಲಿ ನೈರ್ಮಲ್ಯ ಶುಚಿತ್ವ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಪ್ರತಿ ವರ್ಷವೂ ಸ್ವಚ್ಛತಾ ಹೀ ಸೇವಾ ಪಾಕ್ಷಿಕವನ್ನು ಆಯೋಜಿಸಲಾಗುತ್ತಿದೆ. ಪ್ರಸಕ್ತ ದಿನಗಳಲ್ಲಿ ಸ್ವಚ್ಛತೆ ಕುರಿತು ಅರಿವು ಮೂಡಿದೆ. ಶೌಚಾಲಯಗಳ ನಿರ್ಮಾಣ ಆಗಿದೆ. ಇನ್ನೂ ಕೆಲವು ಕಡೆ ಶೌಚಾಲಯಗಳ ನಿರ್ಮಾಣ ಆಗಬೇಕಿದೆ. ಸ್ವಚ್ಛತೆ ಎಂಬುದು ನಮ್ಮ ಮನೆಗಳಲ್ಲಿ ಆಗುವುದಷ್ಟೇ ಅಲ್ಲ. ಪ್ರತಿಯೊಬ್ಬರ ಮನೆ ಮನಗಳಲ್ಲಿಯೂ ಸ್ವಚ್ಚವಾದಾಗಲೇ ಪರಿಸರ ಶುದ್ಧವಾಗಲಿದೆ ಎಂದು ಹೇಳಿದರು.
ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ಮಾತನಾಡಿ, ಗಾಂಧೀಜಿಯವರು ಸ್ವಚ್ಚ ಭಾರತದ ಕನಸನ್ನು ಹೊಂದಿದ್ದರು. ಅವರ ಕನಸಿನಂತೆ 2015ರಲ್ಲಿ ಸ್ವಚ್ಚ ಭಾರತ ಮಿಷನ್ ಯೋಜನೆಯಡಿ ಶೌಚಾಲಯ ನಿರ್ಮಾಣ, ಸ್ವಚ್ಚತಾ ಕಾರ್ಯ, ಉತ್ತಮ ವಾತಾವರಣ ಸ್ಥಾಪಿಸುವ ಕಾರ್ಯ ಮಾಡಲಾಗುತ್ತಿದೆ. ಅ.2ರವರೆಗೆ 15 ದಿನಗಳ ಕಾಲ ವಿವಿಧ ಇಲಾಖೆಗಳ ಸಹಯೋಗದಲ್ಲಿ ಶಾಲಾ ಕಾಲೇಜುಗಳಲ್ಲಿ ಪ್ರಬಂಧ ಸ್ಪರ್ಧೆ, ಭಾಷಣ, ಕ್ರೀಡಾಕೂಟಗಳನ್ನು ಆಯೋಜಿಸುವುದು ಹಾಗೂ ದೇವಸ್ಥಾನ, ಮಸೀದಿ, ಪ್ರವಾಸಿ ತಾಣಗಳನ್ನು ಸ್ವಚ್ಛತೆಗೊಳಿಸುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದರು.ನಗರಸಭೆ ಸದಸ್ಯರಾದ ಸೈಯದ್ ನಸರುಲ್ಲಾ, ಜಯಪ್ಪ ಸೇರಿದಂತೆ ನಗರಸಭೆ ಅಧಿಕಾರಿಗಳು, ನೌಕರರು ಹಾಗೂ ಕಾಲೇಜು ವಿದ್ಯಾರ್ಥಿಗಳು ಇದ್ದರು.
----------ಪೋಟೋ ಕ್ಯಾಪ್ಸನ್
ನಗರಸಭೆ ಸಭಾಂಗಣದಲ್ಲಿ ಆಯೋಜಿಸಲಾದ ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮವನ್ನು ನಗರಸಭೆ ಅಧ್ಯಕ್ಷೆ ಸುಮಿತಾ ರಾಘವೇಂದ್ರ ಉದ್ಘಾಟಿಸಿದರು.------------ಫೋಟೋ ಫೈಲ್ ನೇಮ್- 15 ಸಿಟಿಡಿ7