ಮಧುಮೇಹ ತಡೆಗಟ್ಟುವಲ್ಲಿ ವೈದ್ಯಾಧಿಕಾರಿಗಳ ಪಾತ್ರ ಬಹು ಮುಖ್ಯ: ಡಾ.ಲಿಂಗರಾಜು.ಟಿ

KannadaprabhaNewsNetwork | Published : Nov 16, 2024 12:33 AM

ಸಾರಾಂಶ

ಮಧುಮೇಹ ಕಾಯಿಲೆಯ ನಿಯಂತ್ರಣ ಮತ್ತು ತಡೆಗಟ್ಟುವಲ್ಲಿ ವೈದ್ಯಾಧಿಕಾರಿಗಳ ಹಾಗೂ ಸಮುದಾಯ ಆರೋಗ್ಯ ಅಧಿಕಾರಿಗಳ ಪಾತ್ರ ಬಹು ಮುಖ್ಯವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಲಿಂಗರಾಜು.ಟಿ ಹೇಳಿದರು.

ಕೊಪ್ಪಳ: ಮಧುಮೇಹ ಕಾಯಿಲೆಯ ನಿಯಂತ್ರಣ ಮತ್ತು ತಡೆಗಟ್ಟುವಲ್ಲಿ ವೈದ್ಯಾಧಿಕಾರಿಗಳ ಹಾಗೂ ಸಮುದಾಯ ಆರೋಗ್ಯ ಅಧಿಕಾರಿಗಳ ಪಾತ್ರ ಬಹು ಮುಖ್ಯವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಲಿಂಗರಾಜು.ಟಿ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಘಟಕ ಹಾಗೂ ಎನ್.ಸಿ.ಡಿ. ಕೋಶ ಕೊಪ್ಪಳ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಪಂಚಾಯಿತಿ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ವಿಶ್ವ ಮಧುಮೇಹ ದಿನಾಚರಣೆಯ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪ್ರತಿ ವರ್ಷ ನವೆಂಬರ್ 14ರಂದು ವಿಶ್ವ ಮಧುಮೇಹ ದಿನ ಆಚರಿಸಲಾಗುತ್ತದೆ. ಇದರ ಉದ್ದೇಶ ಮಧುಮೇಹ ಕಾಯಿಲೆ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ ಚಿಕಿತ್ಸೆ ನೀಡುವುದಾಗಿದೆ. ಜೀವನಶೈಲಿಯಿಂದ ಬರುವ ರೋಗಗಳಲ್ಲಿ ಮಧುಮೇಹ ಕೂಡ ಒಂದಾಗಿದ್ದು, ಜೀವನಶೈಲಿಯನ್ನು ಬದಲಾವಣೆ ಮಾಡಿ ಪೌಷ್ಟಿಕ ಆಹಾರ ಸೇವನೆ, ದೈಹಿಕ ಚಟುವಟಿಕೆಯಿಂದ ಇರುವುದು, 30 ವರ್ಷ ಮೇಲ್ಪಟ್ಟ ಎಲ್ಲ ಸಾರ್ವಜನಿಕರಿಗೆ ಪ್ರತಿ ವರ್ಷಕ್ಕೆ ಒಂದು ಬಾರಿ ರಕ್ತ ಪರೀಕ್ಷೆ ಮಾಡಿಸುವಂತೆ ಅರಿವು ಮೂಡಿಸುವುದು ಹಾಗೂ ಪತ್ತೆಯಾದ ಮಧುಮೇಹ ರೋಗಿಗಳಿಗೆ ಚಿಕಿತ್ಸೆ ನೀಡುವುದು, ಎಲ್ಲ ವೈದ್ಯಾಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಂದಕುಮಾರ್ ಎಚ್. ಪ್ರಾಸ್ತಾವಿಕವಾಗಿ ಮಾತನಾಡಿ, ಮಧುಮೇಹ ಕುರಿತು ಮಧುಮೇಹ ಮತ್ತು ಯೋಗಕ್ಷೇಮ ಎಂಬ ಘೋಷ ವಾಕ್ಯದೊಂದಿಗೆ ಈ ವರ್ಷ ಕಾರ್ಯಕ್ರಮ ಏರ್ಪಡಿಸಲಾಗುತ್ತಿದೆ. ಜಿಲ್ಲೆಯ ಎಲ್ಲ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ ಹಾಗೂ ವಿವಿಧ ಆರೋಗ್ಯ ಸಂಸ್ಥೆಗಳಲ್ಲಿ ಕಾರ್ಯಕ್ರಮದ ಅಂಗವಾಗಿ ಜಾಗೃತಿ ಕಾರ್ಯಕ್ರಮ ಮತ್ತು ತಪಾಸಣಾ ಶಿಬಿರ ಹಮ್ಮಿಕೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು. ಮಧುಮೇಹಿಗಳು ಸರಿಯಾಗಿ ಚಿಕಿತ್ಸೆ ಪಡೆಯುವುದರ ಮೂಲಕ ಕಾಯಿಲೆ ದೂರವಿಡಬಹುದು. ಜೀವನ ಶೈಲಿ ರೋಗಗಳು ಇಂದಿನ ವೈದ್ಯಲೋಕಕ್ಕೆ ಸವಾಲಾಗಿವೆ. ಮನುಷ್ಯ ಆಧುನಿಕನಾದಂತೆ ಆತನ ಮಾನಸಿಕ ಹಾಗೂ ದೈಹಿಕ ಸ್ವಾಸ್ಥ್ಯಕ್ಕೆ ಹೆಚ್ಚಿನ ತೊಂದರೆಗಳು ಕಾಣಿಸಿಕೊಂಡು ಆಹಾರ ಕ್ರಮದಲ್ಲಿನ ಬದಲಾವಣೆ, ದೈಹಿಕ ಚಟುವಟಿಕೆ ಇಲ್ಲದ ಜೀವನ, ಹಾಗೆ ಮಾನಸಿಕ ಒತ್ತಡದಿಂದಾಗಿ ಅನೇಕ ರೋಗಗಳು ಶಾರೀರಿಕ ಹಾಗೂ ಮಾನಸಿಕವಾಗಿ ದಾಳಿ ಮಾಡುತ್ತವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ರವೀಂದ್ರನಾಥ ಎಂ.ಎಚ್., ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ಶಶಿಧರ, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ. ಪ್ರಕಾಶ ಎಚ್., ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ವೆಂಕಟೇಶ, ಕೊಪ್ಪಳ ವೈದ್ಯಕೀಯ ಮಹಾವಿದ್ಯಾಲಯದ ಮೆಡಿಸಿನ್ ಪ್ರೊಫೆಸರ್ ಡಾ. ಶಿವಕುಮಾರ ಸೇರಿದಂತೆ ಎಲ್ಲ ತಾಲೂಕು ಆರೋಗ್ಯಾಧಿಕಾರಿಗಳು, ವೈದ್ಯಾಧಿಕಾರಿಗಳು, ಸಮುದಾಯ ಆರೋಗ್ಯ ಅಧಿಕಾರಿಗಳು, ಇತರ ಸಿಬ್ಬಂದಿ ಉಪಸ್ಥಿತರಿದ್ದರು.

ಜಾಗೃತಿ ಕಾರ್ಯಕ್ರಮ

ನ. 14ರಂದು ಜಿಲ್ಲಾ ಕಾರಾಗೃಹದಲ್ಲಿ ವಿಶ್ವ ಮಧುಮೇಹ ದಿನಾಚರಣೆಯ ಅಂಗವಾಗಿ ಜಾಗೃತಿ ಕಾರ್ಯಕ್ರಮ ಮತ್ತು ಆರೋಗ್ಯ ಶಿಬಿರ ನಡೆಸಿ ನ್ಯೂನತೆಯುಳ್ಳವರಿಗೆ ಚಿಕಿತ್ಸೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಆಯುಷ್ ಅಧಿಕಾರಿ ಡಾ. ಪರ್ವತಗೌಡ ದಂತ ವೈದ್ಯಾಧಿಕಾರಿ ಡಾ. ಮಾರುತಿ, ಜಿಲ್ಲಾ ಎನ್.ಸಿ.ಡಿ. ಕಾರ್ಯಕ್ರಮ ಸಂಯೋಜಕಿ ಡಾ. ಜಯಶ್ರೀ ಕಮತೆ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ, ಜಿಲ್ಲಾ ಕಾರಾಗೃಹದ ಅಧೀಕ್ಷಕ ಶ್ರೀ ರಾಮು ಸೇರಿದಂತೆ ಇತರ ಸಿಬ್ಬಂದಿ ಭಾಗವಹಿಸಿದ್ದರು.

Share this article