ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮದಲ್ಲಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶಕನ್ನಡಪ್ರಭ ವಾರ್ತೆ ಕುಷ್ಟಗಿ
ದೇಶದ ಅಭಿವೃದ್ಧಿಯಲ್ಲಿ ಕಾರ್ಮಿಕರ ಪಾತ್ರವು ಬಹುಮುಖ್ಯವಾಗಿದೆ ಎಂದು ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮಹಾಂತೇಶ ಚೌಳಗಿ ಹೇಳಿದರು.ಪಟ್ಟಣದ ನ್ಯಾಯಾಲಯದ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ಕಾರ್ಮಿಕ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಡೆದ ಅಂತಾರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಹಾಗೂ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮದಲ್ಲಿ ಮಾತನಾಡಿದರು.ನಮ್ಮ ದೇಶಕ್ಕೆ ರೈತ ಬೆನ್ನೆಲುಬು ಹೇಗೆಯೋ ಅದೇ ತರಹ ದೇಶದ ಅಭಿವೃದ್ಧಿಯಲ್ಲಿ ಕಾರ್ಮಿಕನು ಸಹ ಬೆನ್ನೆಲುಬು ಇದ್ದಂತೆ. ದೇಶದಲ್ಲಿ ಬಹಳಷ್ಟು ಜನರು ಕಾರ್ಮಿಕರಾಗಿ ಕೆಲಸ ನಿರ್ವಹಿಸುತ್ತಿದ್ದು, ಸಂಘಟಿತರಾಗುವ ಮೂಲಕ ಅಭಿವೃದ್ಧಿ ಹೊಂದಬೇಕು ಇವರ ಶ್ರಮದಿಂದ ನಮ್ಮ ದೇಶದ ಅಭಿವೃದ್ಧಿ ಸಾಧ್ಯವಾಗುತ್ತಿದೆ ಎಂದರು.
ಕಾರ್ಮಿಕರು ನೋಂದಣಿಯನ್ನು ಮಾಡಿಸುವ ಮೂಲಕ ಸರ್ಕಾರದಿಂದ ಲಭ್ಯವಿರುವ ಸೌಲಭ್ಯಗಳನ್ನು ಪಡೆದುಕೊಂಡು ಜೀವನದ ಮಟ್ಟ ಸುಧಾರಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.ಕಾರ್ಮಿಕ ಇಲಾಖೆಯ ನಿರೀಕ್ಷಕ ಶಿವಶಂಕರ ತಳವಾರ ಮಾತನಾಡಿ, ಕಟ್ಟಡ ಕಾರ್ಮಿಕರು ಕಟ್ಟಡ ಕಾರ್ಮಿಕ ಮಂಡಳಿಯಲ್ಲಿ ನೋಂದಣಿ ಮಾಡಿಸಬೇಕು ಹಾಗೂ ಎಲ್ಲ ಕೂಲಿಕಾರ್ಮಿಕರು ಈ ಶ್ರಮ ಕಾರ್ಡ್‌ನ್ನು ಮಾಡಿಸುವ ಮೂಲಕ ಸರ್ಕಾರದಿಂದ ದೊರೆಯುವ ಅನೇಕ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು. ಸಂಘಟಿತ ಕಾರ್ಮಿಕರಿಗೆ ಅನೇಕ ಕಾನೂನುಗಳು ಅನ್ವಯವಾಗುತ್ತವೆ. ಈ ಕಾನೂನಿನ ಅಡಿಯಲ್ಲಿ ನೋಂದಣಿ ಮಾಡಿಕೊಂಡವರಿಗೆ ಕಾರ್ಮಿಕ ಕಲ್ಯಾಣ ನಿಧಿಯಿಂದ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಾಧ್ಯವಿದೆ. ಕಾರ್ಮಿಕರು ತಮ್ಮ ಕಾಯಕವನ್ನು ನಿಷ್ಠೆಯಿಂದ ಮಾಡಿ ಪ್ರತಿಫಲ ಪಡೆಯಬೇಕು ಎಂದರು.
ಮಕ್ಕಳಿಗೆ ಉನ್ನತ ಶಿಕ್ಷಣ, ಉತ್ತಮ ಜೀವನ ನಡೆಸುವಂತೆ ಪ್ರೇರಣೆ ನೀಡಬೇಕು. ಶ್ರಮಜೀವಿಗಳ ಪ್ರಯತ್ನ, ಕೆಲಸದಲ್ಲಿಯೇ ದೇಶದ ಅಭಿವೃದ್ಧಿ ಅಡಗಿದೆ. ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಿದ್ದು, ಅವರಿಗಾಗಿ ಸರ್ಕಾರ ಅನೇಕ ಸೌಲಭ್ಯಗಳನ್ನು ನೀಡಿದೆ. ಅವುಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಕೀಲರ ಸಂಘದ ಅಧ್ಯಕ್ಷ ವಿಜಯಮಹಾಂತೇಶ ವಹಿಸಿದ್ದರು. ಸಹಾಯಕ ಸರ್ಕಾರಿ ಅಭಿಯೋಜಕ ಎಲ್. ರಾಯನಗೌಡ, ವಕೀಲರ ಸಂಘದ ಜಂಟಿ ಕಾರ್ಯದರ್ಶಿ ಮೈನುದ್ದೀನ್, ಯೋಜನಾ ನಿರ್ದೇಶಕ ಬಸವರಾಜ ಹಿರೇಗೌಡ್ರು ಸೇರಿದಂತೆ ಅನೇಕರು ಇದ್ದರು.