ಬಾಲಕಾರ್ಮಿಕ ಪದ್ಧತಿ ವಿರೋದಿ ದಿನಾಚರಣೆ, ಕಾನೂನು ಅರಿವು-ನೆರವು ಕಾರ್ಯಕ್ರಮಕನ್ನಡಪ್ರಭ ವಾರ್ತೆ ಕೊಪ್ಪಳ
ಬಾಲ ಕಾರ್ಮಿಕ ಪದ್ಧತಿ ತೊಲಗಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಲಕಾರಿ ರಾಮಪ್ಪ ಒಡೆಯರ್ ಹೇಳಿದರು.ಕೊಪ್ಪಳ ತಾಲೂಕು ಆಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಕಾರ್ಮಿಕ ಇಲಾಖೆ, ಜಿಲ್ಲಾ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನೆ ಇವುಗಳ ಸಂಯುಕ್ತ ಆಶ್ರಯದಲ್ಲಿ ನಗರದ ಬಹದ್ದೂರ್ ಬಂಡಿ ರಸ್ತೆಯ ಸರಸ್ವತಿ ವಿದ್ಯಾ ಮಂದಿರದಲ್ಲಿ ನಡೆದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಹಾಗೂ ಕಾನೂನು ಅರಿವು-ನೆರವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮಕ್ಕಳು ಶಿಕ್ಷಣದಿಂದ ಹೇಗೆ ವಂಚಿತರಾಗುತ್ತಾರೆ ಎಂಬುದನ್ನು ಪ್ರತಿಯೊಬ್ಬ ಶಿಕ್ಷಕರು ಅರಿಯಬೇಕು. ಕಲಿಕೆ ಮಾಡುವುದರ ಜತೆಗೆ ಮಕ್ಕಳ ಪಾಲಕರ ಮನವೊಲಿಸಿ ಮಕ್ಕಳನ್ನು ಶಾಲೆಗೆ ಕರೆತರುವ ಮಹತ್ವದ ಈ ಸಮಾಜ ಸೇವಾ ಕಾರ್ಯವನ್ನು ಶಿಕ್ಷಕ ಸಮೂಹ ಸಂಸ್ಥೆಯಿಂದ ಮಾಡುವಂತಾಗಬೇಕು ಎಂದ ಅವರು, ಬಾಲ ಕಾರ್ಮಿಕ ಕಾಯ್ದೆಯ ತಿದ್ದುಪಡಿ ನಂತರ ಕಠಿಣ ಕ್ರಮ ವಹಿಸಲಾಗಿದೆ. ಮಕ್ಕಳನ್ನು ಬಳಸಿಕೊಳ್ಳುವ ಮಾಲೀಕರ ಮೇಲೆ ಎಫ್ಐಆರ್ ದಾಖಲೆ ಮಾಡಲಾಗುತ್ತಿದೆ. ಶಿಕ್ಷಣದಿಂದ ಯಾರು ಕೂಡಾ ವಂಚಿತರಾಗಬೇಡಿ ಎಂದು ತಿಳಿಸಿದರು.ಜಿಲ್ಲಾ ಕಾರ್ಮಿಕ ಅಧಿಕಾರಿ ಸುಧಾ ಗರಗ ಮಾತನಾಡಿ, ಬಾಲ ಕಾರ್ಮಿಕರು ಕಂಡುಬಂದಲ್ಲಿ ನಮ್ಮ ಇಲಾಖೆಗೆ ಮಾಹಿತಿ ನೀಡಿ, ನಮ್ಮ ಇಲಾಖೆ ವಿವಿಧ ಇಲಾಖೆಗಳ ಸಹಯೋಗ ಪಡೆದು ಮಕ್ಕಳನ್ನು ರಕ್ಷಣೆ ಮಾಡುತ್ತೇವೆ ಎಂದು ತಿಳಿಸಿದರು.
ಬಾಲಕಾರ್ಮಿಕ ಮತ್ತು ಕಿಶೋರಾವಸ್ಥೆಯ ನಿಷೇಧ ಮತ್ತು ನಿಯಂತ್ರಣ ಕಾಯ್ದೆ(1986)-2016 ಜಾರಿಯಲ್ಲಿದೆ. 14 ವರ್ಷದೊಳಗಿನ ಮಕ್ಕಳನ್ನು ಯಾವುದೇ ಕ್ಷೇತ್ರದಲ್ಲಿ ಹಾಗೂ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಳ್ಳುವವರಿಗೆ ಕಾನೂನಿನಲ್ಲಿ ಕಠಿಣ ಶಿಕ್ಷೆ ಇದ್ದು, ಅಂತಹ ಕ್ಷೇತ್ರಗಳಲ್ಲಿ ಮಕ್ಕಳನ್ನು ದುಡಿಸಿಕೊಳ್ಳುತ್ತಿರುವುದು ಕಂಡುಬಂದಲ್ಲಿ 1098 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ದೂರು ನೀಡಿ, ಮಕ್ಕಳ ರಕ್ಷಣೆ ಮಾಡಬೇಕು ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಎ.ವಿ. ಕಣವಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಜಯಶ್ರೀ ಆರ್., ಸರಸ್ವತಿ ವಿದ್ಯಾಮಂದಿರದ ಮುಖ್ಯೋಪಾಧ್ಯಾಯಿನಿ ರೇಣುಕಾ ಎಚ್. ಅತ್ತನೂರ್, ಕೊಪ್ಪಳ ಕಾರ್ಮಿಕ ನಿರೀಕ್ಷಕ ಶಿವಶಂಕರ್ ತಳವಾರ ಸೇರಿದಂತೆ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಹಾಗೂ ವಿದ್ಯಾಮಂದಿರದ ಸಿಬ್ಬಂದಿ ಉಪಸ್ಥಿತರಿದ್ದರು.