ಹಾವೇರಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯುವ ಸಮೂಹದ ಪಾತ್ರ ಬಹಳ ಪ್ರಮುಖವಾಗಿದೆ. ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು, ದೇಶದ ಏಕತೆ ಕಾಪಾಡುವುದರ ಜೊತೆಗೆ ರಾಷ್ಟ್ರಭಕ್ತಿ ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಮಾನಪ್ಪ ಲಮಾಣಿ ಹೇಳಿದರು.ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ‘ಯುವ ಸಂಸತ್ತು’ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಸಂವಿಧಾನ ಪೀಠಿಕೆಗೆ ಪುರ್ಷ್ಪಾಚನೆ ಮಾಡಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಕಾಲೇಜು ಹಂತದಿಂದಲೇ ಸಂಘಟನೆ, ನಾಯಕತ್ವ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅರಿತುಕೊಳ್ಳಬೇಕು ಹಾಗೂ ಯುವ ಸಮೂಹ ರಾಷ್ಟ್ರಾಭಿಮಾನ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ರಾಜ್ಯ ಮಟ್ಟದ ಯುವ ಸಂಸತ್: ಈ ವರ್ಷ ‘ಯುವ ಸಂಸತ್’ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಮೊದಲ ಹಂತದಲ್ಲಿ ತಾಲೂಕು ಮಟ್ಟದಲ್ಲಿ ಯುವ ಸಂಸತ್ ನಡೆಸಲಾಗುವುದು. ತಾಲೂಕು ಮಟ್ಟದಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಂದ ಜಿಲ್ಲಾ ಮಟ್ಟದ ಯುವ ಸಂಸತ್ ನಡೆಸಲಾಗುವುದು. ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರದಿಂದ ಒಬ್ಬ ವಿದ್ಯಾರ್ಥಿಯನ್ನು ಆಯ್ಕೆ ಮಾಡಿ ರಾಜ್ಯಮಟ್ಟದ ಯುವ ಸಂಸತ್ತಿಗೆ ಕಳುಹಿಸಲಾಗುವುದು. ರಾಜ್ಯದ ೨೨೪ ವಿಧಾನಸಭಾ ಕ್ಷೇತ್ರಗಳಿಂದ ಒಟ್ಟು ೨೨೪ ವಿದ್ಯಾರ್ಥಿಗಳು ರಾಜ್ಯಮಟ್ಟದ ಯುವ ಸಂಸತ್ತಿನಲ್ಲಿ ಭಾಗವಹಿಸಲಿದ್ದಾರೆ ಎಂದರು.ಯುವ ಸಂಸತ್ತಿನಲ್ಲಿ ಪ್ರಜಾಪ್ರಭುತ್ವ ಹಾಗೂ ಆಯಾ ಜಿಲ್ಲೆಗಳಿಗೆ ಸಂಬಂಧಿಸಿದ ಪ್ರಮುಖ ವಿಷಯಗಳ ಕುರಿತು ಚರ್ಚಿಸಲು ಅವಕಾಶ ಕಲ್ಪಿಸಲಾಗುವುದು. ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯ ಸಮಿತಿ ಸಭೆ ನಡೆಸಿ ಚರ್ಚಿಸಬೇಕಾದ ವಿಷಯಗಳ ಕುರಿತು ಅಂತಿಮಗೊಳಿಸಲಾಗುವುದು. ಮೊದಲು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗುವುದು. ನಂತರ ಪದವಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಆಸಕ್ತ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತಮ್ಮ ಸ್ನೇಹಿತರಿಗೂ ಮಾಹಿತಿ ನೀಡಬೇಕು ಎಂದು ಸಲಹೆ ನೀಡಿದರು.ಉಪನ್ಯಾಸಕರಾಗಿ ಭಾಗವಹಿಸಿದ ಹಂಸಭಾವಿ ಮಹಾಂತಸ್ವಾಮಿ ಕಲಾ ಮತ್ತು ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಸಹ ಪ್ರಾಧ್ಯಾಪಕ ಡಾ.ವೈ.ಕೆ. ವೀರೂಪಾಕ್ಷಪ್ಪ ಅವರು ಪ್ರಜಾಪ್ರಭುತ್ವ ವ್ಯವಸ್ಥೆ, ಮೂಲಭೂತ ಹಕ್ಕು ಹಾಗೂ ಮೂಲಭೂತ ಕರ್ತವ್ಯಗಳ ಕುರಿತು ಸವಿಸ್ತಾರವಾಗಿ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರಭುಗೌಡ ಬಿಷ್ಟನಗೌಡ್ರ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹನುಮಂತಪ್ಪ ಈ. ಮರಗಡಿ, ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಂ.ಎಂ. ಮೈದೂರು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಲ್ಜಿತ ಕುಮಾರ್, ನಗರಸಭೆ ಮಾಜಿ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಕೆಸಿಸಿ ಬ್ಯಾಂಕ್ ನಿರ್ದೇಶಕ ಕೊಟ್ರೇಶಪ್ಪ ಬಸೇಗಣ್ಣಿ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಬೇವಿನಮರದ, ರಮೇಶ ಆನವಟ್ಟಿ, ಮಂಜುಳಾ ಕರಬಸಮ್ಮನವರ, ಸುನೀಲ ಬೇಟಗೇರಿ, ಎಂ.ಎನ್. ಗಾಳೆಮ್ಮನವರ, ದಯಾನಂದ ಸುತ್ತಕೋಟಿ, ಮಂಜುನಾಥ ಪಾಟೀಲ, ನಾಗರಾಜ, ಪೃಥ್ವಿರಾಜ ಬೆಟಗೇರಿ, ಎಂ. ಆಂಜನೇಯ, ಮಲ್ಲಿಕಾರ್ಜುನ ಬೂದಗಟ್ಟಿ, ಶಂಭು ಕಳಸದ, ಶಿವಕುಮಾರ, ಗುಡ್ಡಪ್ಪ ನೆಲೋಗಲ್, ಸಣ್ಣಪ್ಪ, ಜಗದೀಶ, ಮಲ್ಲೇಶ, ಸೇರಿದಂತೆ ಇತರರು ಉಪಸ್ಥಿತರಿದ್ದರು.ಶ್ರೀಕಾಂತ ಮೇಗಳಮನಿ ಸಂವಿಧಾನ ಪೀಠಿಕೆ ವಾಚಿಸಿದರು. ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಪ್ರಶಾಂತ್ ವರ್ಗಪ್ಪನವರ ಸ್ವಾಗತಿಸಿದರು. ಶರಣಯ್ಯ ವಂದಿಸಿದರು.