ಭ್ರಷ್ಟಾಚಾರಮುಕ್ತ ಸಮಾಜಕ್ಕೆ ಯುವಜನರ ಪಾತ್ರ ಮುಖ್ಯ

KannadaprabhaNewsNetwork |  
Published : Oct 30, 2025, 01:15 AM IST
ಪೋಟೋ: 29ಎಸ್‌ಎಂಜಿಕೆಪಿ01ಶಿವಮೊಗ್ಗದ ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಸಿಂಗಾರ ಸಭಾಂಗಣದಲ್ಲಿ ಯುವ ರೆಡ್‌ಕ್ರಾಸ್ ಘಟಕದಿಂದ ನಟ ಡಾ. ಪುನೀತ್ ರಾಜ್‌ಕುಮಾರ್ ಅವರ ಸ್ಮರಣಾರ್ಥ ಆಯೋಜಿಸಿದ್ದ ಸ್ವಯಂಪ್ರೇರಿತ ರಕ್ತದಾನ ಮತ್ತು ನೇತ್ರ ತಪಾಸಣೆ ಹಾಗೂ ನೇತ್ರದಾನ ನೋಂದಣಿ ಶಿಬಿರವನ್ನು ಕರ್ನಾಟಕ ಲೋಕಾಯುಕ್ತ ಡಿವೈಎಸ್ಪಿ ಡಾ. ಬಿ.ಪಿ.ಚಂದ್ರಶೇಖರ್ ಉದ್ಘಾಟಿಸಿದರು. | Kannada Prabha

ಸಾರಾಂಶ

ಭ್ರಷ್ಟಚಾರಮುಕ್ತ ಸಮಾಜ ನಿರ್ಮಿಸುವಲ್ಲಿ ಯುವಜನರ ಪಾತ್ರ ಅಪಾರ ಎಂದು ಕರ್ನಾಟಕ ಲೋಕಾಯುಕ್ತ ಡಿವೈಎಸ್ಪಿ ಡಾ.ಬಿ.ಪಿ.ಚಂದ್ರಶೇಖರ್ ಅನಿಸಿಕೆ ವ್ಯಕ್ತಪಡಿಸಿದರು.

ಶಿವಮೊಗ್ಗ: ಭ್ರಷ್ಟಚಾರಮುಕ್ತ ಸಮಾಜ ನಿರ್ಮಿಸುವಲ್ಲಿ ಯುವಜನರ ಪಾತ್ರ ಅಪಾರ ಎಂದು ಕರ್ನಾಟಕ ಲೋಕಾಯುಕ್ತ ಡಿವೈಎಸ್ಪಿ ಡಾ.ಬಿ.ಪಿ.ಚಂದ್ರಶೇಖರ್ ಅನಿಸಿಕೆ ವ್ಯಕ್ತಪಡಿಸಿದರು.ಇಲ್ಲಿನ ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಸಿಂಗಾರ ಸಭಾಂಗಣದಲ್ಲಿ ಯುವ ರೆಡ್‌ಕ್ರಾಸ್ ಘಟಕದಿಂದ ನಟ ಡಾ.ಪುನೀತ್ ರಾಜ್‌ಕುಮಾರ್ ಅವರ ಸ್ಮರಣಾರ್ಥ ಆಯೋಜಿಸಿದ್ದ ಸ್ವಯಂಪ್ರೇರಿತ ರಕ್ತದಾನ ಮತ್ತು ನೇತ್ರ ತಪಾಸಣೆ ಹಾಗೂ ನೇತ್ರದಾನ ನೋಂದಣಿ ಶಿಬಿರ ಉದ್ಘಾಟಿಸಿ ಮಾತನಾಡಿದರು.ಯುವಜನರು ಕಡ್ಡಾಯವಾಗಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಉತ್ತಮ ಸಮಾಜ ನಿರ್ಮಾಣ ಮಾಡಲು ಕೈಜೋಡಿಸಬೇಕು. ಮತದಾನ ಮಾಡಲು ಯಾವುದೇ ಹಣ ಪಡೆಯಬಾರದು. ಚುನಾವಣಾ ಸಂದರ್ಭದಲ್ಲಿ ಯಾವುದೇ ಆಮಿಷಗಳಿಗೆ ಬಲಿಯಾಗಿ ಮತದಾನ ಮಾಡಬಾರದು. ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಸದೃಢ ಸಮಾಜ ನಿರ್ಮಿಸಬೇಕು ಎಂದು ತಿಳಿಸಿದರು.ದೇಶೀಯ ವಿದ್ಯಾಶಾಲಾ ಸಮಿತಿಯು ಶಿಕ್ಷಣದ ಜತೆಯಲ್ಲಿ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ. ನಾನೂ ಸಂಸ್ಥೆಯ ವಿದ್ಯಾರ್ಥಿಯಾಗಿದ್ದು, ಶಿಕ್ಷಣ ಪಡೆದಿರುವ ಸಾವಿರಾರು ವಿದ್ಯಾರ್ಥಿಗಳು ಸಮಾಜದಲ್ಲಿ ಉನ್ನತ ಸ್ಥಾನ ಅಲಂಕರಿಸಿದ್ದಾರೆ. ನೀವೂ ಜೀವನದಲ್ಲಿ ಉನ್ನತ ಸಾಧನೆ ಮಾಡಬೇಕು ಎಂದರು.ದೇಶೀಯ ವಿದ್ಯಾಶಾಲಾ ಸಮಿತಿಯ ಉಪಾಧ್ಯಕ್ಷ ಎಸ್.ಪಿ.ದಿನೇಶ್ ಮಾತನಾಡಿ, ರಕ್ತದಾನ ಅತ್ಯಂತ ಶ್ರೇಷ್ಠ ಕಾರ್ಯ ಆಗಿದ್ದು, ಒಮ್ಮೆ ರಕ್ತದಾನ ಮಾಡುವುದರಿಂದ ನಾಲ್ಕು ಜೀವ ಉಳಿಸಲು ಸಾಧ್ಯವಿದೆ. ದೇಹದಲ್ಲಿ ಹೊಸ ರಕ್ತ ಉತ್ಪತ್ತಿಯಾಗುತ್ತದೆ. ಯುವಜನರು ರಕ್ತದಾನ ಮಾಡಲು ಮುಂದಾಗಬೇಕು ಎಂದು ಸಲಹೆ ನೀಡಿದರು.ದೇಶೀಯ ವಿದ್ಯಾಶಾಲಾ ಸಮಿತಿಯ ಕಾರ್ಯದರ್ಶಿ ಎಸ್.ರಾಜಶೇಖರ್ ಮಾತನಾಡಿ, ಪ್ರತಿ ಆರೋಗ್ಯವಂತ ವ್ಯಕ್ತಿ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು. ರಕ್ತದಾನ ಮಾಡುವುದರಿಂದ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳಿದ್ದು, ಯುವಜನರು ರಕ್ತದಾನದ ಮಹತ್ವ ಅರಿತುಕೊಳ್ಳಬೇಕು ಎಂದರು.ದೇಶೀಯ ವಿದ್ಯಾಶಾಲಾ ಸಮಿತಿಯ ಅಧ್ಯಕ್ಷ ಕೆ.ಎನ್.ರುದ್ರಪ್ಪ ಕೊಳಲೆ ಅಧ್ಯಕ್ಷತೆ ವಹಿಸಿದ್ದರು. ದೇಶೀಯ ವಿದ್ಯಾಶಾಲಾ ಸಮಿತಿಯ ಖಜಾಂಚಿ ಬಿ.ಗೋಪಿನಾಥ್, ರಕ್ತನಿಧಿ ಕೇಂದ್ರದ ಸಂಯೋಜಕ ಡಾ.ನಾಗೇಶ್, ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ.ಎಂ.ವೆಂಕಟೇಶ್, ಐಕ್ಯೂಎಸಿ ಸಂಯೋಜಕ ಪ್ರೊ.ಎನ್.ಕುಮಾರಸ್ವಾಮಿ, ಯುವ ರೆಡ್‌ಕ್ರಾಸ್ ಘಟಕದ ಸಂಯೋಜಕ ಡಾ.ಶ್ರೀನಿವಾಸ್ ಲಮಾಣಿ, ಮೆಗ್ಗಾನ್ ಆಸ್ಪತ್ರೆ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ಯು.ಗೀತಾಲಕ್ಷ್ಮೀ, ರೆಡ್‌ಕ್ರಾಸ್ ಸಂಜೀವಿನಿ ರಕ್ತನಿಧಿ ಕೇಂದ್ರದ ಕಾರ್ಯದರ್ಶಿ ಮಂಜುನಾಥ ಅಪ್ಪಾಜಿ, ಶಂಕರ ಕಣ್ಣಿನ ಆಸ್ಪತ್ರೆಯ ವೈದ್ಯೆ ಡಾ.ಸ್ಪಂದನಾ ಮತ್ತಿತರರು ಇದ್ದರು.ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕ, ಐಕ್ಯೂಎಸಿ ಘಟಕ, ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆ ರಕ್ತನಿಧಿ ಕೇಂದ್ರ, ರೆಡ್‌ಕ್ರಾಸ್ ಸಂಜೀವಿನಿ ರಕ್ತನಿಧಿ ಕೇಂದ್ರ, ಶಂಕರ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು. ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ರಕ್ತದಾನ ಮಾಡಿದರು.

PREV

Recommended Stories

ನವೆಂಬರ್‌ ಕ್ರಾಂತಿ ಬಗ್ಗೆ ಚರ್ಚಿಸಿ ದಣಿವು ಮಾಡ್ಕೊಬೇಡಿ - ಶಿವಕುಮಾರ್‌ ಸಲಹೆ
ಹಣೆಯಲ್ಲಿ ಬರೆದಿದ್ದರೆ ಡಿಕೆಶಿ ಸಿಎಂ ಆಗ್ತಾರೆ ಇಲ್ದಿದ್ರೆ ಇಲ್ಲ : ಡಿಕೆಸು