ರಾಣಿಬೆನ್ನೂರು: ಜನರ ಸಮಸ್ಯೆಗಳನ್ನು ಹೊತ್ತು ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿಗಳಿಗೆ ಅಹವಾಲು ಸಲ್ಲಿಸುವುದನ್ನು ತಪ್ಪಿಸಿ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಅವುಗಳಿಗೆ ಪರಿಹಾರ ಕಲ್ಪಿಸುವ ಚಿಂತನೆಯಿಂದ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.
ನಗರದ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಶುಕ್ರವಾರ ತಾಲೂಕು ಮತ್ತು ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಈ ಸಮಯದಲ್ಲಿ ಜಿಲ್ಲಾಧಿಕಾರಿ ಉಪಸ್ಥಿತರಿರುವುದರಿಂದ ಜನರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಲಭಿಸುತ್ತದೆ. ಆದ್ದರಿಂದ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಿ ಅವುಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದರು.ತಹಸೀಲ್ದಾರ್ ಎಚ್.ಎನ್. ಶಿರಹಟ್ಟಿ ಮಾತನಾಡಿ, ಜನರು ಅರ್ಜಿಗಳನ್ನು ಜನತಾ ದರ್ಶನದ ಆವರಣದಲ್ಲಿ ತೆರೆಯಲಾಗಿರುವ ಸರ್ಕಾರದ ವಿವಿಧ ಇಲಾಖೆಗಳ ಕೌಂಟರ್‌ಗಳಲ್ಲಿ ಸಲ್ಲಿಸಬಹುದು. ಅರ್ಜಿ ಹಾಕಿದರೆ ತಕ್ಷಣವೇ ಪರಿಹಾರ ರೂಪಿಸಬೇಕು. ಅರ್ಜಿ ಹಾಕಿದ ಜನರಿಗೆ ಸಂದೇಶ ಹೋಗುತ್ತದೆ. ಜನತಾ ದರ್ಶನದಲ್ಲಿ ತಾಲೂಕು ಮಟ್ಟದ ಎಲ್ಲ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದು ಪರಿಹಾರ ರೂಪಿಸುತ್ತಾರೆ ಎಂದರು.
ಜಿಲ್ಲಾಧಿಕಾರಿ ರಘುನಂದನಮೂರ್ತಿ, ಜಿಪಂ ಸಿಇಒ ಅಕ್ಷಯ ಶ್ರೀಧರ, ಎಡಿಸಿ ಪೂಜಾರ ವೀರಮಲ್ಲಪ್ಪ, ಎಸ್‌ಪಿ ಅನ್ಶುಕುಮಾರ, ಉಪ ಅರಣ್ಯ ಸಂರಕ್ಷಣಾಧಿಕಾರಿ ಬಾಲಕೃಷ್ಣ, ಹಾವೇರಿ ಉಪ ವಿಭಾಗಾಧಿಕಾರಿ ಚೆನ್ನಪ್ಪ, ಸವಣೂರು ಉಪ ವಿಭಾಗಾಧಿಕಾರಿ ನಾಗರಾಜ, ತಾಪಂ ಇಒ ಸುಮಲತಾ ಎಸ್.ಪಿ., ನಗರಸಭೆ ಪೌರಾಯುಕ್ತ ನಿಂಗಪ್ಪ ಕುಮ್ಮಣ್ಣನವರ ಉಪಸ್ಥಿತರಿದ್ದರು.ನೂರಾರು ಸಮಸ್ಯೆಗಳನ್ನು ಹೊತ್ತು ತಂದ ಜನತೆ: ಜನತಾ ದರ್ಶನಕ್ಕೆ ನಗರ ಹಾಗೂ ಗ್ರಾಮೀಣ ಭಾಗ ಸೇರಿದಂತೆ ತಾಲೂಕಿನ ಜನತೆ ನೂರಾರು ಸಮಸ್ಯೆಗಳನ್ನು ಹೊತ್ತು ತಂದರು. ನಗರದ ಮಾಗೋಡ ರಸ್ತೆಯಲ್ಲಿನ ಕರ್ನಾಟಕ ಗೃಹ ಮಂಡಳಿ ಮೊದಲ ಹಂತದ ನಿವಾಸಿಗಳು ತಾವು ವಾಸಿಸುವ ಪ್ರದೇಶದಲ್ಲಿ ಸುಮಾರು 15 ವರ್ಷಗಳ ಹಿಂದೆ ಅಭಿವೃದ್ಧಿ ಪಡಿಸಲಾಗಿದ್ದು, ಅಲ್ಲಿಂದ ಇಲ್ಲಿಯವರೆಗೂ ತಾವು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಆದರೆ ನಮ್ಮ ಸಮಸ್ಯೆಗಳಿಗೆ ಪರಿಹಾರ ಎಂಬುದು ಮರಿಚಿಕೆಯಾಗಿದೆ. ಇದರ ಬಗ್ಗೆ ಈ ಹಿಂದೆ ಜಿಲ್ಲಾ ಕೇಂದ್ರದಲ್ಲಿ ನಡೆದ ಜನತಾ ದರ್ಶನದಲ್ಲಿ ಅರ್ಜಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ನಮಗೆ ಅತ್ಯಗತ್ಯವಾಗಿರುವ ಕುಡಿಯುವ ನೀರು, ರಸ್ತೆ, ಒಳಚರಂಡಿ ಸೇರಿದಂತೆ ಕೆಲವೊಂದು ಮೂಲಭೂತ ಸೌಲಭ್ಯಗಳನ್ನು ಪಡೆಯುವಲ್ಲಿ ವಂಚಿತರಾಗಿದ್ದೇವೆ ಎಂದು ಜಿಲ್ಲಾಧಿಕಾರಿ ಎದುರು ತಮ್ಮ ಅಳಲು ತೋಡಿಕೊಂಡರು. ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ ರಘುನಂದನಮೂರ್ತಿ ಸ್ಥಳಕ್ಕೆ ಬರುವಂತೆ ಕರ್ನಾಟಕ ಗೃಹ ಮಂಡಳಿ ಅಧಿಕಾರಿಯನ್ನು ಕರೆಯಿಸಿ ಅವರಿಗೆ ಇಲ್ಲಿನ ನಿವಾಸಿಗಳ ಸಮಸ್ಯೆಗಳ ಪರಿಹಾರ ಕುರಿತಾಗಿ ಅಗತ್ಯ ದಾಖಲಾತಿಗಳೊಂದಿಗೆ ಹಾವೇರಿ ಕಚೇರಿಗೆ ಬಂದು ವರದಿ ನೀಡುವಂತೆ ಆದೇಶಿಸಿದರು.
ನಗರದ ಸರ್ಕಾರಿ ಆಸ್ಪತ್ರೆಯ ವೈದ್ಯ ಡಾ. ಶಾಂತಾ ಅವರಿಂದ ಅನಗತ್ಯವಾಗಿ ಗರ್ಭಕೋಶದ ಶಸ್ತ್ರಚಿಕಿತ್ಸೆಗೆ ಒಳಗಾಗಿ ತೊಂದರೆ ಅನುಭವಿಸುತ್ತಿರುವ ಮಹಿಳೆಯರು ತಮಗೆ ಸರ್ಕಾರದಿಂದ ಪರಿಹಾರ ಕಲ್ಪಿಸುವಂತೆ ಕೋರಿ ಜಿಲ್ಲಾಧಿಕಾರಿಗೆ ಅರ್ಜಿ ಸಲ್ಲಿಸಿದರು. ಹಲವು ವರ್ಷಗಳಿಂದ ಹೋರಾಟ ನಡೆಸುತ್ತಾ ಬಂದಿದ್ದರೂ ತಮ್ಮ ಸಮಸ್ಯೆಗೆ ಇದುವರೆಗೂ ಪರಿಹಾರ ಲಭಿಸಿಲ್ಲ. ಪರಿಸ್ಥಿತಿ ಇದೇ ರೀತಿ ಮುಂದವರಿದರೆ ತಾವೆಲ್ಲರೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಎದುರು ತಮ್ಮ ಅಳಲು ತೋಡಿಕೊಂಡರು. ಇದರ ಬಗ್ಗೆ ಆದಷ್ಟು ಶೀಘ್ರ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸ್ಥಳದಲ್ಲಿದ್ದ ಜಿಲ್ಲಾ ಆರೋಗ್ಯಾಧಿಕಾರಿಗೆ ಸೂಚನೆ ನೀಡಿದರು.ವ್ಯಕ್ತಿಯೊಬ್ಬ ಕೆಲವು ಗೂಂಡಾಗಳನ್ನು ಛೂ ಬಿಟ್ಟು ಮಾಹಿತಿ ಹಕ್ಕಿನ ದುರ್ಬಳಕೆ ಮಾಡಿಕೊಂಡು ನಮ್ಮಿಂದ ಹಣ ವಸೂಲಿ ಮಾಡುತ್ತಿದ್ದಾನೆ. ಅವರ ವಿರುದ್ಧ ಸೂಕ್ತ ಕ್ರಮ ಜರುಗಿಸಿ ಎಂದು ಆಶಾ ಕಾರ್ಯಕರ್ತೆಯರು ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದರು.
ನಗರದಲ್ಲಿ ತಾಲೂಕು ಕ್ರೀಡಾಂಗಣವನ್ನು ಅಭಿವೃದ್ಧಿಪಡಿಸುವಂತೆ ವ್ಯಕ್ತಿಯೊಬ್ಬರು ಅರ್ಜಿ ಸಲ್ಲಿಸಿದರು.ಮೆಡ್ಲೇರಿ ಗ್ರಾಮದಲ್ಲಿ ದೇವಸ್ಥಾನದ ಪಕ್ಕದಲ್ಲಿಯೇ ಮದ್ಯದಂಗಡಿಯಿದ್ದು, ಅದನ್ನು ತೆರವುಗೊಳಿಸುವಂತೆ ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸಿದರು.
ಚಿಕ್ಕಮಾಗನೂರು ಗ್ರಾಮದಲ್ಲಿ ಎಸ್‌ಟಿ ಜನಾಂಗದವರಿಗೆ ಮೀಸಲಿದ್ದ ಜಾಗದಲ್ಲಿ ಅತಿಕ್ರಮಿಸಿ ಸೊಸೈಟಿ ಗೋದಾಮು ನಿರ್ಮಿಸಲಾಗಿದೆ ಎಂದು ಗ್ರಾಮದ ಜನರು ದೂರು ಸಲ್ಲಿಸಿದರು.ನಗರದ ಪೂರ್ವ ಮತ್ತು ಪಶ್ಚಿಮ ಬಡಾವಣೆಗಳ ಜನರಿಗೆ ಮಾಲೀಕತ್ವದ ಹಕ್ಕು ಕಲ್ಪಿಸಲು ತುರ್ತು ಕ್ರಮ ಜರುಗಿಸಬೇಕು ಎಂದು ಅಲ್ಲಿನ ನಿವಾಸಿಗಳು ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸಿದರು.
ನಗರದ ಕೆಲವು ಕಡೆಗಳಲ್ಲಿ 30 ಅಡಿ ರಸ್ತೆಗಳನ್ನು 15 ಅಡಿ ಮಾಡಿ ಅತಿಕ್ರಮಣ ಮಾಡಿದ್ದಾರೆ. ಇದಲ್ಲದೆ ನಗರದ ವಿವಿಧ ಕಡೆಗಳಲ್ಲಿ ಅನಧಿಕೃತವಾಗಿ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದ್ದು, ನಗರಸಭೆ ಅಧಿಕಾರಿಗಳು ಇದನ್ನು ಕಂಡು ಕಾಣದಂತೆ ಸುಮ್ಮನಿದ್ದಾರೆ. ಇದರ ಬಗ್ಗೆ ಕ್ರಮ ಜರುಗಿಸುವಂತೆ ರೈತ ಮುಖಂಡ ಹನುಮಂತಪ್ಪ ಕಬ್ಬಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.ವಿವಿಧ ಮಾಸಿಕ ಪಿಂಚಣಿಗಳ ಆದೇಶ ಪ್ರತಿ ವಿತರಣೆ: ಜನತಾ ದರ್ಶನದಲ್ಲಿ ಸಾಮಾಜಿಕ ಭದ್ರತಾ ಯೋಜನೆಯಡಿ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿದ ಕೆಲವು ಅರ್ಹ ಫಲಾನುಭವಿಗಳಿಗೆ ಸ್ಥಳದಲ್ಲಿಯೇ ಜಿಲ್ಲಾಧಿಕಾರಿ ಆದೇಶ ಪ್ರತಿ ವಿತರಿಸಿದರು.