ಬಾಣಂತಿಯರ ಸಾವಿಗೆ ರಾಜ್ಯ ಸರ್ಕಾರವೇ ನೇರ ಹೊಣೆ: ಸಿ.ಬಿ. ಸುರೇಶ್ ಬಾಬು

KannadaprabhaNewsNetwork | Published : Dec 5, 2024 12:31 AM

ಸಾರಾಂಶ

ಬಳ್ಳಾರಿಯಲ್ಲಿ ಸಂಭವಿಸಿದ ಬಾಣಂತಿಯರ ಸಾವಿಗೆ ರಾಜ್ಯ ಸರ್ಕಾರವೇ ನೇರ ಹೊಣೆಯಾಗಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ. ಸುರೇಶ್ ಬಾಬು ಆರೋಪಿಸಿದರು.

ಬಳ್ಳಾರಿ: ನಗರದಲ್ಲಿ ಸಂಭವಿಸಿದ ಬಾಣಂತಿಯರ ಸಾವಿಗೆ ರಾಜ್ಯ ಸರ್ಕಾರವೇ ನೇರ ಹೊಣೆಯಾಗಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ. ಸುರೇಶ್ ಬಾಬು ಆರೋಪಿಸಿದರು.

ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳಪೆ ಔಷಧಿಯಿಂದಾಗಿಯೇ ನಾಲ್ವರು ಬಾಣಂತಿಯರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ರಾಜ್ಯ ಸರ್ಕಾರ ಕಳಪೆ ಔಷಧಿಗಳನ್ನು ಪೂರೈಕೆ ಮಾಡಿದ್ದು ಹೇಗೆ? ಇದರ ಹಿಂದೆ ಯಾರ ಕೈವಾಡವಿದೆ ಎಂಬುದು ಬಯಲಾಗಬೇಕು. ಮೃತ ಕುಟುಂಬಗಳಿಗೆ ನ್ಯಾಯ ಸಿಗಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಈ ವರೆಗೆ ಬಳ್ಳಾರಿಗೆ ಬಂದು ಮೃತರ ಕುಟುಂಬಕ್ಕೆ ಸಾಂತ್ವನ ಹೇಳುವ ಕನಿಷ್ಠ ಸೌಜನ್ಯವನ್ನು ತೋರಿಸಿಲ್ಲ. ಇದು ಅತ್ಯಂತ ನಾಚಿಕೆಗೇಡಿನ ಸಂಗತಿಯಾಗಿದೆ. ಬಡ ಬಾಣಂತಿಯರ ಸಾವಿನ ಬಗ್ಗೆ ಅಧಿವೇಶನದಲ್ಲಿ ಹೊರಾಟ ಮಾಡುತ್ತೇವೆ. ಮೃತ ಕುಟುಂಬಕ್ಕೆ ಸರ್ಕಾರ ₹25 ಲಕ್ಷ ಪರಿಹಾರ ನೀಡಬೇಕು ಎಂದು ಆಗ್ರಹಿಸುತ್ತೇವೆ. ಬಳ್ಳಾರಿಯಷ್ಟೇ ಅಲ್ಲ; ರಾಜ್ಯದ ನಾನಾ ಕಡೆ ಈ ರೀತಿಯ ಅವಘಡಗಳು ನಡೆದಿವೆ ಎಂಬ ಮಾಹಿತಿ ಇದ್ದು, ಪರಿಶೀಲಿಸಲಾಗುತ್ತಿದೆ. ಸಾವಿನ ಪ್ರಕರಣಗಳನ್ನು ಸೂಕ್ತ ತನಿಖೆಗೆ ವಹಿಸಬೇಕು ಎಂಬುದು ನಮ್ಮ ಒತ್ತಾಯವಾಗಿದೆ. ಸರ್ಕಾರದ ಜನವಿರೋಧಿ ನೀತಿಯ ವಿರುದ್ಧ ಜೆಡಿಎಸ್ ಸಂಘಟಿತ ಹೋರಾಟ ರೂಪಿಸಲಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿ ಮುನ್ನ ನಗರದ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ. ಸುರೇಶ್ ಬಾಬು ನೇತೃತ್ವದ ನಿಯೋಗ ವಿವಿಧ ವಾರ್ಡ್‌ಗಳಿಗೆ ಭೇಟಿ ನೀಡಿ ಪರಿಶೀಲಿಸಿತು. ಜಿಲ್ಲಾ ಸರ್ಜನ್ ಡಾ. ಬಸಾರೆಡ್ಡಿ ಸೇರಿದಂತೆ ಆಸ್ಪತ್ರೆಯ ವೈದ್ಯರಿಂದ ಮಾಹಿತಿ ಪಡೆದರು. ಬಳಿಕ ಜಿಲ್ಲಾಸ್ಪತ್ರೆಯ ಹೆರಿಗೆ ವಾರ್ಡ್ ಹಾಗೂ ಐಸಿಯು ವಾರ್ಡ್ ಪರಿಶೀಲಿಸಿದರು.

ಶಾಸಕರಾದ ನೇಮಿರಾಜ್ ನಾಯ್ಕ, ಕರೆಮ್ಮ ಜಿ. ನಾಯಕ, ಮಾಜಿ ಶಾಸಕ ವೆಂಕಟರಾವ್ ನಾಡಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ಮೀನಳ್ಳಿ ತಾಯಣ್ಣ ಸೇರಿದಂತೆ ಪಕ್ಷದ ಮುಖಂಡರು ಇದ್ದರು.

Share this article