- ಗುರುವಾರದಿಂದ ಆಯಾ ತಾಲೂಕು ಮಟ್ಟದಲ್ಲಿ ನೌಕರರ ಮುಷ್ಕರ: ಚಂದ್ರಪ್ರಕಾಶ್ ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು
ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಗ್ರಾಮೀಣ ಅಂಚೆ ನೌಕರರು ನಡೆಸುತ್ತಿರುವ ಪ್ರತಿಭಟನೆ ಬುಧವಾರ ಎರಡನೇ ದಿನಕ್ಕೆ ಕಾಲಿಟ್ಟಿತು.ಇದೇ ಸಂದರ್ಭದಲ್ಲಿ ಮಾತನಾಡಿದ ಅಖಿಲ ಭಾರತ ಗ್ರಾಮೀಣ ಅಂಚೆ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಟಿ.ಸಿ. ಚಂದ್ರ ಪ್ರಕಾಶ್, ಚಿಕ್ಕಮಗಳೂರು ಹಾಗೂ ಕೊಪ್ಪ ತಾಲೂಕುಗಳಲ್ಲಿ ಅಂಚೆ ನೌಕರರ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಗುರುವಾರದಿಂದ ಆಯಾ ತಾಲೂಕು ಮಟ್ಟದಲ್ಲಿ ನೌಕರರು ಮುಷ್ಕರ ಮುಂದುವರೆಸಲಿದ್ದಾರೆ ಎಂದು ಹೇಳಿದರು.
ಸರ್ಕಾರ ಎಲ್ಲಿಯವರೆಗೆ ನೌಕರರ ಬೇಡಿಕೆಗಳನ್ನು ಈಡೇರಿಸುವುದಿಲ್ಲವೋ ಅಲ್ಲಿಯವರೆಗೂ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಕಾರ್ಯನಿರ್ವಹಿಸುವ ನೌಕರರು ತಮ್ಮ ಕೆಲಸವನ್ನು ತ್ಯಜಿಸುವ ಮೂಲಕ ಪ್ರತಿಭಟನೆ ನಡೆಸಲಿದ್ದಾರೆ. ಇದರಿಂದ ಪ್ರತಿನಿತ್ಯ ಜಿಲ್ಲೆಯಲ್ಲಿ 250 ಗ್ರಾಮೀಣ ಅಂಚೆ ಕಚೇರಿಗಳನ್ನು ಬಂದ್‌ಗೊಳಿಸಿ ಸೇವೆ ಸ್ಥಗಿತಗೊಳಿಸಲಾಗುತ್ತಿದೆ ಎಂದರು.ಚಿಕ್ಕಮಗಳೂರು ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಒಟ್ಟು 1.55 ಲಕ್ಷ ಅಂಚೆ ಕಚೇರಿಗಳಲ್ಲಿ ಕಳೆದ ಎರಡು ದಿನಗಳಿಂದ ತಮ್ಮೆಲ್ಲಾ ಸೇವೆಗಳನ್ನು ಸ್ಥಗಿತಗೊಳಿಸಿ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ನೌಕರರ ಬೇಡಿಕೆಗೆ ಸಂಬಂಧ ರಾಜ್ಯದ 26 ಸಂಸದರಿಗೆ ಹಲವಾರು ಬಾರಿ ಮನವಿ ಸಲ್ಲಿಸಿದರೂ ಸಮಸ್ಯೆ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ಹೇಳಿದರು.
ಕೂಡಲೇ ಸರ್ಕಾರಗಳು ಮಧ್ಯ ಪ್ರವೇಶಿಸಿ ನೌಕರರ ಮೂಲ ಬೇಡಿಕೆ ಈಡೇರಿಸಬೇಕು. ಇಲ್ಲವಾದಲ್ಲಿ ಮುಂಬರುವ ದಿನಗಳಲ್ಲಿ ತೀವ್ರ ಸ್ವರೂಪದಲ್ಲಿ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಸಿದರು.ಈ ಸಂದರ್ಭದಲ್ಲಿ ಸಂಘದ ವಿಭಾಗೀಯ ಕಾರ್ಯದರ್ಶಿ ಟಿ.ಹನುಮಂತಪ್ಪ, ಖಜಾಂಚಿ ಎ.ಒ.ಭರತ್, ಕಾರ್ಯಕಾರಿ ಸಮಿತಿ ಸದಸ್ಯರಾದ ಗಂಗಾಧರ್, ಸುರೇಶ್, ಶಿವಣ್ಣ, ಹರ್ಷ ಹಾಗೂ ನೌಕರರು ಹಾಜರಿದ್ದರು.13 ಕೆಸಿಕೆಎಂ 3
ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಗ್ರಾಮೀಣ ಅಂಚೆ ನೌಕರರು ಚಿಕ್ಕಮಗಳೂರಿನ ಅಂಚೆ ಕಚೇರಿ ಎದುರು ಬುಧವಾರ ಧರಣಿ ನಡೆಸಿದರು.