ಕನ್ನಡಪ್ರಭ ವಾರ್ತೆ ಜಮಖಂಡಿ
ಪ್ರವಾಹ ಪರಿಸ್ಥಿತಿ ಎದುರಿಸಲು ತಾಲೂಕು ಆಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ತಾಲೂಕಲ್ಲಿ 23 ಕಾಳಜಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ತಹಸೀಲ್ದಾರ ಸದಾಶಿವ ಮುಕ್ಕೊಜಿ ಮಾಹಿತಿ ನೀಡಿದರು.ತಮ್ಮ ಕಚೇರಿಯಲ್ಲಿ ಗುರುವಾರ ಕನ್ನಡಪ್ರಭಕ್ಕೆ ಮಾಹಿತಿ ನೀಡಿದ ಅವರು, ನದಿಗೆ ಹೊಂದಿಕೊಂಡಿರುವ ಪ್ರತಿ ಗ್ರಾಮಗಳಲ್ಲಿ ತಲಾ ಒಂದು ಕಾಳಜಿ ಕೇಂದ್ರದ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಕೇಂದ್ರಕ್ಕೆ ಒಬ್ಬ ನೋಡಲ್ ಅಧಿಕಾರಿ ನೇಮಿಸಲಾಗಿದೆ ಎಂದರು.
ಹಿಪ್ಪರಗಿ ಜಲಾಶಯದಿಂದ ಕೃಷ್ಣಾ ನದಿಗೆ 1.60 ಲಕ್ಷ ಕ್ಯುಸೆಕ್ ನೀರನ್ನು ಹರಿಬಿಡಲಾಗಿದೆ. ಸದ್ಯ ಯಾವುದೇ ಪ್ರವಾಹ ಪರಿಸ್ಥಿತಿ ಇಲ್ಲ. ನೀರಿನ ಒಳ ಹರಿವು 2.50 ಲಕ್ಷ ಕ್ಯುಸೆಕ್‌ನಷ್ಟು ಹೆಚ್ಚಿದರೆ ಮಾತ್ರ ತಾಲೂಕಿನಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗುತ್ತದೆ. ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು ಪ್ರವಾಹ ಪರಿಸ್ಥಿತಿ ಉಂಟಾದರೆ ತಾಲೂಕು ಆಡಳಿತ ಸಿದ್ಧತೆ ಮಾಡಿಕೊಂಡಿದೆ ಎಂದು ಮಾಹಿತಿ ನೀಡಿದರು.ಜಿಲ್ಲಾಧಿಕಾರಿಗಳ ಸಭೆ:
ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲಾಧಿಕಾರಿಗಳು ಆಲಮಟ್ಟಿ ಜಲಾಶಯದ ಮುಖ್ಯ ಎಂಜಿನಿಯರ್ ಜತೆ ಗುರುವಾರ ಸಭೆ ನಡೆಸಿದ್ದಾರೆ. ಉಭಯ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗದಿರಲು ಜಲಾಶಯದ ಒಳ ಹರಿವಿನ ಪ್ರಮಾಣಕ್ಕನುಗುಣವಾಗಿ ಹೆಚ್ಚಿನ ನೀರನ್ನು ನದಿಪಾತ್ರಕ್ಕೆ ಹರಿ ಬಿಡುವುದರ ಕುರಿತು ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಚರ್ಚೆ ನಡೆಸಿದ್ದಾರೆ ಎಂದು ತಹಸೀಲ್ದಾರ್ ತಿಳಿಸಿದರು. ಸದ್ಯ ಆಲಮಟ್ಟಿ ಜಲಾಶಯ ದಿಂದ 2.5 ಲಕ್ಷ ಕ್ಯುಸೆಕ್ ನೀರನ್ನು ಹರಿಬಿಡಲಾಗುತ್ತಿದೆ. ಈ ಪ್ರಮಾಣವನ್ನು ಹೆಚ್ಚಿಸಿ 3 ಲಕ್ಷ ಕ್ಯುಸೆಕ್ ನೀರನ್ನು ಹರಿಬಿಡಲು ಸಾಧ್ಯವೇ ಎಂಬುದರ ಕುರಿತು ಸಭೆಯಲ್ಲಿ ಚರ್ಚಿಸಿದ್ದಾರೆ ಎನ್ನಲಾಗಿದೆ. ಇದರಿಂದ ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಪ್ರವಾಹದ ಆತಂಕವನ್ನು ಕಡಿಮೆ ಗೊಳಿಸಬಹುದೆಂದು ಅಂದಾಜಿಸಲಾಗಿದೆ. ಮುತ್ತೂರು ನಡುಗಡ್ಡೆ ಪ್ರದೇಶದ 20 ಮನೆಗಳನ್ನು ಸ್ಥಳಾಂತರಿಸಲಾಗಿದೆ ಎಂದ ಅವರು ಬಾಕಿ ಇರುವ ಮನೆಗಳ ಹಿರಿಯರಿಗೆ ಮತ್ತು ರೈತರಿಗೆ ಸಾಧ್ಯವಾದಷ್ಟು ಬೇಗನೆ ಸ್ಥಳಾಂತರವಾಗುವಂತೆ ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.