ಬಳ್ಳಾರಿ: ದಾಸ ಶ್ರೇಷ್ಠರಾಗಿದ್ದ ಶ್ರೀಕನಕದಾಸರ ಜಯಂತಿ ನಗರ ಸೇರಿದಂತೆ ಜಿಲ್ಲಾದ್ಯಂತ ಭಕ್ತಿಯಿಂದ ಆಚರಿಸಲಾಯಿತು.
ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಜಿಲ್ಲಾಡಳಿತ ಶನಿವಾರ ಆಯೋಸಿದ್ದ ಭಕ್ತ ಶ್ರೇಷ್ಠ
ಶ್ರೀ ಕನಕದಾಸರ ಜಯಂತಿಯನ್ನು ನಗರ ಶಾಸಕ ನಾರಾ ಭರತ್ ರೆಡ್ಡಿ ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು, ಭಕ್ತಶ್ರೇಷ್ಠ ಕನಕದಾಸರ ಕೀರ್ತನೆಗಳಲ್ಲಿ ಪ್ರತಿಯೊಂದು ಪದಕ್ಕೂ ಜೀವನಾಂಶದ ಮೌಲ್ಯವಿದೆ. ಕನಕದಾಸರು ತಮ್ಮ ಕೀರ್ತನೆಗಳಲ್ಲಿ ದೇವರನ್ನು ಕೊಂಡಾಡಿ ದಾಸಶ್ರೇಷ್ಠ ಎನಿಸಿಕೊಂಡರು. ಅವರ ಕೀರ್ತನೆಗಳು ಸಾಮಾಜಿಕ ಕಳಕಳಿ ಹೊಂದಿದ್ದವು ಎಂದು ತಿಳಿಸಿದರು.
ವೀರಶೈವ ಪದವಿ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಡಾ.ಕೆ. ನೀಲಮ್ಮ ವಿಶೇಷ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಗಣ್ಯರು ಭಕ್ತ ಕನಕದಾಸರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಜಯಂತಿ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಕವಿತಾ ಗಂಗೂರು ತಂಡದವರು ದಾಸರ ಪದಗಳನ್ನು ಹಾಡಿದರು. ಜಯಂತಿ ಅಂಗವಾಗಿ ಮೆರವಣಿಗೆ ಜರುಗಿತು.
ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಮಹಾನಗರ ಪಾಲಿಕೆಯ ಆಯುಕ್ತ ಮಂಜುನಾಥ ಪಿ.ಎಸ್., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಲಾಲಪ್ಪ, ಡಿಡಿಪಿಐ ಉಮಾದೇವಿ, ಸಮಾಜದ ಮುಖಂಡ ಬೆಣಕಲ್ ಬಸವರಾಜ ಸೇರಿದಂತೆ ಮಹಾನಗರ ಪಾಲಿಕೆಯ ಸದಸ್ಯರು, ಸಮಾಜದ ಮುಖಂಡರು, ಸಾರ್ವಜನಿಕರು ಹಾಗು ಇತರರು ಉಪಸ್ಥಿತರಿದ್ದರು.
ನಗರದಲ್ಲಿ ರಾಯಣ್ಣನವರ ಪುತ್ಥಳಿ ಕೆಲವೇ ದಿನಗಳಲ್ಲಿ ಅನಾವರಣಗೊಳ್ಳಲಿದೆ ಎಂದು ನಗರ ಶಾಸಕ ನಾರಾ ಭರತ್ ರೆಡ್ಡಿ ಭರವಸೆ ನೀಡಿದರು. ನಗರದಲ್ಲಿ ರಸ್ತೆ, ಕುಡಿಯುವ ನೀರು ಸೇರಿದಂತೆ ಹಲವಾರು ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಬಳ್ಳಾರಿ ನಗರ ಅಭಿವೃದ್ಧಿಯತ್ತ ಸಾಗಿದೆ. ಬಳ್ಳಾರಿ ಜನರ ನಿರೀಕ್ಷೆಯಂತೆಯೇ ಕಾರ್ಯನಿರ್ವಹಿಸುತ್ತಿದ್ದೇವೆ. ರಾಜ್ಯ ಸರ್ಕಾರ ಜನಪರ ಯೋಜನೆಗಳನ್ನು ರೂಪಿಸಿ, ಬಡ ಹಾಗೂ ಮಧ್ಯಮ ವರ್ಗದ ಹಿತ ಕಾಯುವ ಕೆಲಸ ಮಾಡುತ್ತಿದೆ ಎಂದು ಶಾಸಕ ರೆಡ್ಡಿ ತಿಳಿಸಿದರು.