ಯುವ ಸಮೂಹ ಒಳ್ಳೆಯ ಹವ್ಯಾಸ ರೂಢಿಸಿಕೊಳ್ಳಬೇಕು-ಸದಾನಂದಸ್ವಾಮಿ

KannadaprabhaNewsNetwork | Published : Jun 28, 2024 12:53 AM

ಇತ್ತೀಚಿನ ದಿನಗಳಲ್ಲಿ ಯುವ ಜನಾಂಗದಲ್ಲಿ ಮಾದಕ ವಸ್ತುಗಳ ಬಳಕೆ ಹೆಚ್ಚಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಇಂದಿನ ಯುವ ಸಮೂಹ ಮಾದಕ ವಸ್ತುಗಳ ದುಶ್ಚಟಗಳಿಗೆ ದಾಸರಾಗದೇ ಒಳ್ಳೆಯ ಹವ್ಯಾಸಗಳನ್ನು ರೂಢಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಸಿ. ಸದಾನಂದಸ್ವಾಮಿ ಅವರು ಹೇಳಿದರು.

ಹಾವೇರಿ: ಇತ್ತೀಚಿನ ದಿನಗಳಲ್ಲಿ ಯುವ ಜನಾಂಗದಲ್ಲಿ ಮಾದಕ ವಸ್ತುಗಳ ಬಳಕೆ ಹೆಚ್ಚಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಇಂದಿನ ಯುವ ಸಮೂಹ ಮಾದಕ ವಸ್ತುಗಳ ದುಶ್ಚಟಗಳಿಗೆ ದಾಸರಾಗದೇ ಒಳ್ಳೆಯ ಹವ್ಯಾಸಗಳನ್ನು ರೂಢಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಸಿ. ಸದಾನಂದಸ್ವಾಮಿ ಅವರು ಹೇಳಿದರು.ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಹಾವೇರಿ ನ್ಯಾಯಾಂಗ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ, ಪೊಲೀಸ್ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಬಕಾರಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಸಹಯೋಗದಲ್ಲಿ ಆಯೋಜಿಸಲಾದ ಅಂತಾರಾಷ್ಟ್ರೀಯ ಮಾದಕ ವಸ್ತು ವ್ಯಸನ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಮಾದಕ ವಸ್ತುಗಳ ಸೇವನೆಯಿಂದ ಆರೋಗ್ಯದ ಮೇಲೆ ಅನೇಕ ದುಷ್ಪರಿಣಾಮಗಳು ಉಂಟಾಗುತ್ತವೆ. ಹಾಗಾಗಿ ಮಾದಕ ವಸ್ತುಗಳ ವಸ್ತುಗಳಿಂದ ದೂರವಿರಬೇಕು ಹಾಗೂ ನಿಮ್ಮ ಸುತ್ತಮುತ್ತ ಅನಧಿಕೃತವಾಗಿ ಮಾದಕ ವಸ್ತುಗಳ ಮಾರಾಟ ಹಾಗೂ ಸಾಗಾಣಿಕೆ ಕಂಡುಬಂದರೆ ಕೂಡಲೇ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಹೇಳಿದರು.ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಸಿ.ಜೆ.ಎಂ. ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಶ ವಿ ಅವರು ಮಾತನಾಡಿ, ಯುವ ಸಮೂಹ ಮೊಬೈಲ್ ಗೀಳಿನಿಂದ ಹೊರಬಂದು ಓದುವ ಹವ್ಯಾಸ ರೂಢಿಸಿಕೊಳ್ಳಬೇಕು, ಇದರಿಂದ ಜ್ಞಾನ ವೃದ್ಧಿಯಾಗುತ್ತದೆ. ಇಂದು ಸೈಬರ್ ಅಪರಾಧಗಳು ಹೆಚ್ಚಾಗಿರುವುದರಿಂದ ಮೊಬೈಲ್‌ಗೆ ಬರುವ ಅಪರಿಚಿತರ ಕರೆ ಹಾಗೂ ಸಂದೇಶಗಳನ್ನು ಸ್ವೀಕರಿಸಬಾರದು ಎಂದು ಸಲಹೆ ನೀಡಿದರು.ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗದ ಮನೋವೈದ್ಯ ಡಾ. ವಿಜಯಕುಮಾರ ಬಿ. ಅವರು ಮಾದಕ ವಸ್ತುಗಳ ದುಷ್ಪರಿಣಾಮ ಮತ್ತು ಮಾನಸಿಕ ರೋಗದ ಲಕ್ಷಣ ಕುರಿತು ಉಪನ್ಯಾಸ ನೀಡಿದರು.ಕಾಲೇಜು ಪ್ರಾಂಶುಪಾಲ ಡಾ.ಅರುಣಕುಮಾರ ಪಿ.ಜೆ. ಅಧ್ಯಕ್ಷತೆ ವಹಿಸಿದ್ದರು. ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಗೋಪಾಲ, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್.ಎಚ್. ಜತ್ತಿ, ಕಾರ್ಯದರ್ಶಿ ಪಿ.ಎಸ್. ಹೆಬ್ಬಾಳ, ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರಭಾಕರ ಕುಂದೂರ ಹಾಗೂ ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿ ಚನ್ನಪ್ಪ ಲಮಾಣಿ ಇತರರು ಉಪಸ್ಥಿತರಿದ್ದರು. ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ. ಚನ್ನಬಸಯ್ಯ ವಿರಕ್ತಮಠ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.