ವ್ಯಾಪಾರಿ ದರೋಡೆ ಪ್ರಕರಣ: ಮೂವರ ಸೆರೆ

KannadaprabhaNewsNetwork |  
Published : Jul 05, 2026, 02:45 AM IST
ಬೀದಿಬದಿ ವ್ಯಾಪಾರಸ್ಥರ ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ದರ್ಶನ್‌  | Kannada Prabha

ಸಾರಾಂಶ

ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಜೂ.29ರಂದು ನಡೆದಿದ್ದ ಬಹುಕೋಟಿ ರು. ಮೌಲ್ಯದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಕೃತ್ಯಕ್ಕೆ ಸಹಕರಿಸಿದ ಆರೋಪಿಗಳನ್ನು ಒಳಗೊಂಡಂತೆ ಒಟ್ಟು ಮೂವರು ಆರೋಪಿಗಳನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು: ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಜೂ.29ರಂದು ನಡೆದಿದ್ದ ಬಹುಕೋಟಿ ರು. ಮೌಲ್ಯದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಕೃತ್ಯಕ್ಕೆ ಸಹಕರಿಸಿದ ಆರೋಪಿಗಳನ್ನು ಒಳಗೊಂಡಂತೆ ಒಟ್ಟು ಮೂವರು ಆರೋಪಿಗಳನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ.

ಗುರುವಾರ ಪ್ರಕರಣದ ಆರೋಪಿ ನಿಮಿಲ್ ಆರ್.ಕೆ. (37) ಎಂಬಾತನನ್ನು ಕೇರಳದ ಕಣ್ಣೂರು ಜಿಲ್ಲೆಯ ಚಾಲದಲ್ಲಿರುವ ಅಸ್ತೇರ್‌ ಮೀಮ್ಸ್‌ ಆಸ್ಪತ್ರೆ ಸಮೀಪ ಪಣಂಬೂರು ಠಾಣೆಯ ಪೊಲೀಸ್ ನಿರೀಕ್ಷಕ ಸಲೀಂ ಅಬ್ಬಾಸ್ ನೇತೃತ್ವದ ತಂಡ ವಶಕ್ಕೆ ಪಡೆದಿದೆ.

ಅದೇ ದಿನ ಕೃತ್ಯಕ್ಕೆ ಸಹಕರಿಸಿ ಆರೋಪಿಗಳಿಗೆ ಆಶ್ರಯ ನೀಡಿದ್ದ ಆರೋಪದಡಿ ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿ ಇರ್ಷಾದ್ (40) ಎಂಬಾತನನ್ನು ಬಂಧಿಸಲಾಗಿದೆ. ಆರೋಪಿಗಳಿಗೆ ಕಾರು ಒದಗಿಸಿ ಆಶ್ರಯ ನೀಡಿದ್ದ ಮುಸ್ತಾಫ (49) ಎಂಬಾತನನ್ನು ಮಡಿಕೇರಿ ತಾಲೂಕಿನ ಮೂರ್ನಾಡು ಜಂಕ್ಷನ್‌ ಲಯನ್ಸ್ ಕ್ಲಬ್ ಬಳಿಯ ಬಸ್ ನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪ್ರಕರಣ ವಿವರ:

ಜೂ.29ರಂದು ನಸುಕಿನ ಸುಮಾರು 2.45 ಗಂಟೆಗೆ ಮಹಾರಾಷ್ಟ್ರದಿಂದ ಕೇರಳದ ಪಯ್ಯನ್ನೂರಿಗೆ ಪತ್ನಿ ಹಾಗೂ ಮಗನೊಂದಿಗೆ ಕೇರಳ ನೋಂದಣಿಯ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವಿಕಾಸ್ ಸುಬ್ಬರಾವ್ ಧನವಡೆ (44) ಅವರ ಕಾರನ್ನು ಬೈಕಂಪಾಡಿ ಸಮೀಪ ಎರಡು ಇನ್ನೋವಾ ಹಾಗೂ ಒಂದು ಸ್ವಿಫ್ಟ್ ಕಾರಿನಲ್ಲಿ ಬಂದ 6-7 ಮಂದಿ ಮುಸುಕುಧಾರಿಗಳು ಅಡ್ಡಗಟ್ಟಿದ್ದರು.

ತಲವಾರು ತೋರಿಸಿ ಬೆದರಿಕೆ ಹಾಕಿ ದೂರುದಾರರ ಮೇಲೆ ಹಲ್ಲೆ ನಡೆಸಿ ಗಾಯಗೊಳಿಸಿದ್ದು, ಪತ್ನಿ ಹಾಗೂ ಮಗನನ್ನು ಬಲವಂತವಾಗಿ ಅಪಹರಿಸಿ ಕೆಲವು ಕಿಲೋಮೀಟರ್ ದೂರದಲ್ಲಿ ಬಿಟ್ಟು, ದೂರುದಾರರ ಕಾರು, ಕಾರಿನಲ್ಲಿದ್ದ ಸುಮಾರು 180 ಗ್ರಾಂ ಚಿನ್ನಾಭರಣ (ಅಂದಾಜು 20 ಲಕ್ಷ ರು. ಮೌಲ್ಯ), ಎರಡು ಮೊಬೈಲ್ ಫೋನ್‌ ಹಾಗೂ ಕಾರು ಸೇರಿದಂತೆ ಒಟ್ಟು 23.10 ಲಕ್ಷ ರು. ಮೌಲ್ಯದ ಸೊತ್ತುಗಳನ್ನು ದರೋಡೆ ಮಾಡಿ ಪರಾರಿಯಾಗಿದ್ದರು.

ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿತ್ತು.

ಜೂ. 30ರಂದು ಬೆಳಗ್ಗೆ ಬಂಟ್ವಾಳ ತಾಲೂಕಿನ ಪಚ್ಚಿನಡ್ಕದ ಗುಡ್ಡ ಪ್ರದೇಶದಲ್ಲಿ ಆರೋಪಿಗಳು ನಂಬರ್ ಪ್ಲೇಟ್ ತೆಗೆದು ಬಿಟ್ಟು ಹೋಗಿದ್ದ ದೂರುದಾರರ ಕಾರನ್ನು ಪೊಲೀಸರು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದರು.

ಪ್ರಾಥಮಿಕ ತನಿಖೆಯಲ್ಲಿ ಪ್ರಕರಣದಲ್ಲಿ ಒಟ್ಟು 16 ಮಂದಿ ಭಾಗಿಯಾಗಿದ್ದು, ಅವರಲ್ಲಿ 14 ಮಂದಿ ನೇರವಾಗಿ ದರೋಡೆಯಲ್ಲಿ ಭಾಗವಹಿಸಿದ್ದರೆ, ಇಬ್ಬರು ಆರೋಪಿಗಳಿಗೆ ಸಹಕಾರ ಹಾಗೂ ಆಶ್ರಯ ನೀಡಿರುವುದು ಬೆಳಕಿಗೆ ಬಂದಿದೆ.

ಬಂಧಿತರು ಕಸ್ಟಡಿಗೆ:

ಇದುವರೆಗೆ ಮೂವರು ಆರೋಪಿಗಳನ್ನು ಬಂಧಿಸಿ ಶುಕ್ರವಾರ ಮಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ 10 ದಿನಗಳ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಪ್ರಕರಣದ ಪ್ರಮುಖ ಆರೋಪಿಗಳು ಸೇರಿದಂತೆ ಇನ್ನೂ 13 ಮಂದಿ ಆರೋಪಿಗಳ ಬಂಧನ ಬಾಕಿಯಿದೆ.

ಉತ್ತರ ವಿಭಾಗದ ಎಸಿಪಿ ಶ್ರೀಕಾಂತ ಕೆ. ಹಾಗೂ ಮಂಗಳೂರು ನಗರ ಸಿಸಿಬಿ ಎಸಿಪಿ ಮನೋಜ್ ಕುಮಾರ್ ನಾಯ್ಕ್ ಅವರ ಮಾರ್ಗದರ್ಶನದಲ್ಲಿ ಪಣಂಬೂರು ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಲೀಂ ಅಬ್ಬಾಸ್, ಪಿಎಸ್ಐಗಳಾದ ಶ್ರೀಕಲಾ ಕೆ.ಟಿ., ಜ್ಞಾನಶೇಖರ ಹಾಗೂ ವಿವಿಧ ಪೊಲೀಸ್ ಠಾಣೆಗಳು ಮತ್ತು ಸಿಸಿಬಿ ಸಿಬ್ಬಂದಿ ಆರೋಪಿಗಳ ಪತ್ತೆ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತಾಳಿಕೋಟೆ ಪುರಸಭೆಯಿಂದ ಭೀಮನಬಾವಿ ಸ್ವಚ್ಛತಾ ಕಾರ್ಯ
ಪ್ರಸ್ತುತ ದಿನದಲ್ಲಿ ಸಂಸ್ಕಾರಯುತ ಶಿಕ್ಷಣ ಅತ್ಯವಶ್ಯಕ