ಕನ್ನಡಪ್ರಭ ವಾರ್ತೆ ಚಾಮರಾಜನಗರಪ್ರಸ್ತುತ ಸನ್ನಿವೇಶದಲ್ಲಿ ಜೀವನ ರೂಪಿಸಿಕೊಳ್ಳಲು ಹಲವು ಅವಕಾಶಗಳಿವೆ. ಆದ್ದರಿಂದ ಬಂದ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಿ ಎಂದು ಮೈಸೂರಿನ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕಿ ಕುಮುದ ಶರತ್ ಹೇಳಿದರು.ನಗರದ ಜೆಎಸ್‌ಎಸ್ ಮಹಿಳಾ ಕಾಲೇಜು ಆವರಣದಲ್ಲಿ ಹಮ್ಮಿಕೊಂಡಿದ್ದ ಜೆಎಸ್‌ಎಸ್ ಪದವಿ ಪೂರ್ವ ಕಾಲೇಜಿ ಸಾಂಸ್ಕೃತಿಕ ಕ್ರೀಡಾ ವೇದಿಕೆಗಳು ಮತ್ತು ರಾಷ್ಟ್ರೀಯ ಸೇವಾ ಯೋಜನೆ ಸಮಾರೋಪ ಸಮಾರಂಭದಲ್ಲಿ ಸಮಾರೋಪ ಭಾಷಣ ಮಾಡಿ ಅವರು ಮಾತನಾಡಿದರು. ಪ್ರತಿಭ ಎನ್ನುವುದು ಯಾರ ಸ್ವತ್ತಲ್ಲ, ಪ್ರತಿಯೊಬ್ಬರಲ್ಲೂ ಒಂದಲ್ಲ ಒಂದು ರೀತಿಯ ಪ್ರತಿಭೆ ಇದ್ದೇ ಇರುತ್ತದೆ. ಇದನ್ನು ಹೊರ ಸೂಸಲು ಹಿಂಜರಿಯಬೇಡಿ, ಇಂತಹ ಸಾಂಸ್ಕೃತಿಕ ಮತ್ತು ಕ್ರೀಡಾ ವೇದಿಕೆಗಳ ಮೂಲಕ ಭಾಗವಹಿಸಿ ಪ್ರತಿಭೆ ಹೊರ ಹಾಕಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಈ ಕಾಲೇಜು ನಿಮಗೆ ಎಲ್ಲ ಅವಕಾಶಗಳನ್ನು ಮಾಡಿಕೊಟ್ಟಿದೆ ಇದನ್ನು ಸದುಪಯೋಗಪಡಿಸಿಕೊಳ್ಳಿ, ಮುಜುಗರ ಬೇಡ, ಕೆಲವರಿಗೆ ಪ್ರತಿಭೆ ಬೇಗ ಹೊರ ಬಂದರೆ, ಕೆಲವರಿಗೆ ಪ್ರತಿಭೆ ನಿಧಾನವಾಗಿ ಹೊರ ಬರುತ್ತದೆ ಆದ್ದರಿಂದ ಚಟುವಟಿಕೆಗಳಲ್ಲಿ ಹಿಂಜರಿಯದೇ ಭಾಗವಹಿಸಿ ಎಂದರು.ಅಧ್ಯಕ್ಷತೆ ವಹಿಸಿದ್ದ ಶಾಲಾ ಶಿಕ್ಷಣ ಇಲಾಖೆ (ಪ.ಪೂ.ವಿಭಾಗ)ಯ ಉಪ ನಿರ್ದೇಶಕ, ಸಿ.ಮಂಜುನಾಥ ಪ್ರಸನ್ನ ಮಾತನಾಡಿ, ವಿದ್ಯಾರ್ಥಿನಿಯರು ಮುಂದೆ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಉತ್ತಮ ಫಲಿತಾಂಶ ತಂದು ಜಿಲ್ಲೆ ಹಾಗೂ ಕಾಲೇಜಿಗೆ ಒಳ್ಳೆಯ ಹೆಸರನ್ನು ತನ್ನಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ವಿವಿಧ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ವಿಜೇತರಾಗಿದ್ದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಎಸ್.ಬಸವರಾಜು, ಕಾಲೇಜಿನ ಪ್ರಾಂಶುಪಾಲ ದೇವರಾಜಮೂರ್ತಿ, ಕ್ರೀಡಾ, ಸಾಂಸ್ಕೃತಿಕ ವೇದಿಕೆ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಸಂಚಾಲಕ ಸಿ.ಗಿರೀಶ್, ಕ್ರೀಡಾ ವೇದಿಕೆ ಸಂಚಾಲಕ ಜೆ. ರವಿಕುಮಾರ್, ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಕು.ರಿಫಾ ಇರಮ್ ಉಪಸ್ಥಿತರಿದ್ದರು.