ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿಕೆ
ಬಸವಣ್ಣನವರ ಕರ್ಮಭೂಮಿ ಬಸವಕಲ್ಯಾಣದಲ್ಲಿ ನಿರ್ಮಾಣವಾಗುತ್ತಿರುವ ಆಧುನಿಕ ಅನುಭವ ಮಂಟಪ ಕಟ್ಟಡಕ್ಕೆ ಸರ್ಕಾರದಲ್ಲಿ ಅನುದಾನದ ಕೊರತೆಯಿಲ್ಲ. ಕಾಲ ಮಿತಿಯಲ್ಲಿ ಕಟ್ಟಡ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.
ಇಲ್ಲಿನ ಚನ್ನಬಸವಾಶ್ರಮ ಪರಿಸರದಲ್ಲಿ ಹಿರೇಮಠ ಸಂಸ್ಥಾನದ ವತಿಯಿಂದ ನಡೆದ ಶತಾಯಷಿ ಡಾ.ಚನ್ನಬಸವ ಪಟ್ಟದ್ದೇವರ 135ನೇ ಜಯಂತ್ಯುತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಹಿಂದೆ ಕಾಂಗ್ರೆಸ್ ಸರ್ಕಾರದ ಆಡಳಿತಾವದಿಯಲ್ಲಿ ಅನುಭವ ಮಂಟಪಕ್ಕೆ ಗೊರುಚ ನೇತೃತ್ವದಲ್ಲಿ ನೀಲ ನಕಾಶೆ ಸಿದ್ಧಪಡಿಸಿ ಸುಮಾರು ₹650 ಕೋಟಿ ವೆಚ್ಚದ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಈಗಾಗಲೇ ₹300 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಕಟ್ಟಡ ಕಾಮಗಾರಿ ಅರ್ಧ ಪೂರ್ಣಗೊಂಡಿದೆ ಎಂದರು.ಇತ್ತೀಚೆಗೆ ಕಲಬುರಗಿಯ ಜಯದೇವ ಆಸ್ಪತ್ರೆ ಕಟ್ಟಡ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಆಗಮಿಸಿದ ಸಂದರ್ಭದಲ್ಲಿ ಅನುಭವ ಮಂಟಪ ಕಟ್ಟಡ ಕಾಮಗಾರಿಗೆ ಉಳಿದ ಅನುದಾನ ಬಿಡುಗಡೆಗೆ ಮನವಿ ಮಾಡಲಾಗಿದೆ. ಸಿಎಂ ಅವರು ಕಾಲ ಕಾಲಕ್ಕೆ ಅನುದಾನ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.
ಯುವ ಮುಖಂಡ ಚನ್ನಬಸವಣ್ಣ ಬಳತೆ ಬಸವ ಗುರುವಿನ ಪೂಜೆ ನೆರವೇರಿಸಿದರು. ಡಾ.ಜಿ.ವಿ.ಮಂಜುನಾಥ ಅನುಭಾವ ನೀಡಿದರು. ಬಸವಕಲ್ಯಾಣ ತಾಲೂಕು ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಗುರುನಾಥ ಗಡ್ಡೆ ಅಧ್ಯಕ್ಷತೆ ವಹಿಸಿದರು.
ಕಾರ್ಯಕ್ರಮದಲ್ಲಿ ಜಯರಾಜ ಖಂಡ್ರೆ, ಬಸವರಾಜ ಧನ್ನೂರು, ಚಂದ್ರಶೇಖರ ಹೆಬ್ಬಾಳೆ, ಚಂದ್ರಶೇಖರ ಬನ್ನಾಳೆ, ರಾಜಕುಮಾರ ಪಾಟೀಲ್ ಇದ್ದರು.