ಕನ್ನಡಪ್ರಭ ವಾರ್ತೆ ಜಮಖಂಡಿ
ಜಮಖಂಡಿ ತಾಲೂಕಿನ ಹಿಪ್ಪರಗಿ ಜಲಾಶಯಕ್ಕೆ ಸಚಿವ ಆರ್.ಬಿ. ತಿಮ್ಮಾಪೂರ ಗುರುವಾರ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಮುಖ್ಯಮಂತ್ರಿಗಳ ನಿರ್ದೇಶನದಂತೆ ಜಿಲ್ಲೆಯ ಘಟಪ್ರಭಾ ಹಾಗೂ ಕೃಷ್ಣಾ ನದಿಗಳ ನೀರಿನ ಮಟ್ಟ ಹಾಗೂ ಪ್ರವಾಹ ಪರಿಸ್ಥಿತಿಯ ಸಿದ್ಧತೆಯ ಕುರಿತು ಜಿಲ್ಲಾಡಳಿತದಿಂದ ಕೈಗೊಂಡಿರುವ ಕ್ರಮಗಳ ಪರಿಶೀಲನೆ, ಅಧಿಕಾರಿಗಳಿಂದ ಮಾಹಿತಿ ಪಡೆಯಲು ಪ್ರವಾಸ ಕೈಗೊಂಡಿದ್ದೇನೆ ಎಂದು ತಿಳಿಸಿದರು.ಮುಧೋಳ ತಾಲೂಕಿನ ಮಿರ್ಜಿ, ಮಳಲಿ ಗ್ರಾಮಗಳಿಗೆ ಭೇಟಿ ನೀಡಿದ್ದೇನೆ, ಸದ್ಯ ಉತ್ತಮ ಮಳೆಯಾಗಿದ್ದು, ಕೃಷಿ ಚಟುವಟಿಕೆಗಳು ಭರದಿಂದ ನಡೆದಿವೆ, ಬೀಜ, ಗೊಬ್ಬರದ ಕೊರತೆ ಇಲ್ಲ. ಡಿಎಪಿ ಬದಲು ಕಾಂಪ್ಲೆಕ್ಸ್ ಗೊಬ್ಬರ ಬಳಕೆಯ ಕುರಿತು ರೈತರಿಗೆ ಮಾಹಿತಿ ನೀಡಲಾಗಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ 21 ಪುನರ್ವಸತಿ ಕೇಂದ್ರಗಳನ್ನು ಅಭಿವೃದ್ಧಿ ಪಡಿಸಲಾಗಿತ್ತು. ಆದರೆ ಜನರು ಮೂಲ ಮನೆ ಬಿಟ್ಟು ಬಾರದ್ದರಿಂದ ಅಭಿವೃದ್ಧಿಯ ಸದುಪಯೋಗವಾಗುತ್ತಿಲ್ಲ, ಕಟ್ಟಡಗಳು,ರಸ್ತೆ, ಚರಂಡಿಗಳು ಹಾಳಾಗುತ್ತಿವೆ ಎಂದ ಅವರು, ಶೇ.60ರಷ್ಟು ಜನರು ಪುನರ್ವಸತಿ ಕೇಂದ್ರಗಳಿಗೆ ಸ್ಥಳಾಂತರವಾದರೆ ಅವರಿಗೆ ಎಲ್ಲಾಸೌಲಭ್ಯ ಒದಗಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಪ್ರತಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ₹10 ಕೋಟಿ ಅನುದಾನ ಮಂಜೂರಾಗಿದ್ದು, ಕ್ಷೇತ್ರಗಳ ಅವಶ್ಯಕ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುವುದು, ಪೌರಕಾರ್ಮಿಕರು ನಡೆಸುತ್ತಿರುವ ಮುಷ್ಕರಕ್ಕೆ ಸರ್ಕಾರ ಶೀಘ್ರದಲ್ಲಿಯೇ ಸೂಕ್ತ ಪರಿಹಾರ ನೀಡಲಿದೆ ಎಂದ ಅವರು, ವಿವಿಧ ಇಲಾಖೆಗಳಲ್ಲಿಯ ಸಿಬ್ಬಂದಿಯ ಕೊರತೆ ನೀಗಿಸಲು ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದರು.ಮಾಜಿ ಶಾಸಕ ಆನಂದ ನ್ಯಾಮಗೌಡ, ಜಿಲ್ಲಾಧಿಕಾರಿ ಜಾನಕಿ ಕೆ.ಎಂ., ಜಿಪಂ ಸಿಇಒ ಶಶಿಧರ ಕುರೇರ, ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ಡಿವೈಎಸ್‌ಪಿ ಎಸ್. ರೋಷನ್ ಜಮೀರ, ತಹಸೀಲ್ದಾರ ಸದಾಶಿವ ಮಕ್ಕೊಜಿ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.