ರಾಜ್ಯದಲ್ಲಿ ಸದ್ಯಕ್ಕೆ ಲೋಡ್‌ ಶೆಡ್ಡಿಂಗ್‌ ಪರಿಸ್ಥಿತಿ ಇಲ್ಲ: ಸಚಿವ ಕೆ.ಜೆ.ಜಾರ್ಜ್‌

KannadaprabhaNewsNetwork |  
Published : Jan 10, 2025, 12:45 AM IST
ಬೆಂ.ಗ್ರಾ ಜಿಲ್ಲೆಗೆ ಭೇಟಿ ನೀಡಿದ್ದ ಇಂಧನ ಸಚಿವ ಕೆ.ಜೆ.ಜಾರ್ಜ್‌ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಸಚಿವ ಕೆ.ಎಚ್.ಮುನಿಯಪ್ಪ ಮತ್ತಿತರರು ಇದ್ದಾರೆ. | Kannada Prabha

ಸಾರಾಂಶ

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಕೃಷಿ ಪಂಪ್ ಸೆಟ್ ಗಳ ಅಕ್ರಮ- ಸಕ್ರಮ ಯೋಜನೆಯಡಿ 4.5 ಲಕ್ಷ ಅರ್ಜಿಗಳು ಬಾಕಿ ಇದ್ದವು. ಕಳೆದ ಒಂದೂವರೆ ವರ್ಷದಲ್ಲಿ 2.5 ಲಕ್ಷ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದೆ. ಇನ್ನುಳಿದ ಪಂಪ್ ಸೆಟ್ ಗಳನ್ನು ಮುಂದಿನ ಒಂದು ವರ್ಷದೊಳಗೆ ಸಕ್ರಮಗೊಳಿಸಲಾಗುವುದು.

ಮುಂಬರುವ ಬೇಸಿಗೆಯಲ್ಲಿ 19 ಸಾವಿರ ಮೆ.ವ್ಯಾ ವಿದ್ಯುತ್ ಬೇಡಿಕೆ ನಿರೀಕ್ಷೆ । ರಾಜ್ಯದಲ್ಲಿ ಅಗತ್ಯ ವಿದ್ಯುತ್‌ ಲಭ್ಯ । ಹೆಚ್ಚು ವಿದ್ಯುತ್ ಉತ್ಪಾದನೆ, ದೀರ್ಘಾವಧಿ ಖರೀದಿ ಒಪ್ಪಂದದ ಮೂಲಕ ಅಗತ್ಯ ವಿದ್ಯುತ್ ಪೂರೈಸಲು ಕ್ರಮ

ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ

ಮುಂಬರುವ ಬೇಸಿಗೆಯ ಗರಿಷ್ಠ ಬೇಡಿಕೆ ಅವಧಿಯಲ್ಲಿ 19 ಸಾವಿರ ಮೆಗಾವ್ಯಾಟ್ ವಿದ್ಯುತ್ ಅಗತ್ಯವಿದೆ ಎಂದು ನಿರೀಕ್ಷಿಸಲಾಗಿದ್ದು, ಅದನ್ನು ಪೂರೈಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಹೀಗಾಗಿ ಸದ್ಯಕ್ಕೆ ಲೋಡ್ ಶೆಡ್ಡಿಂಗ್ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು.

ಇಂಧನ ಇಲಾಖೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು, ಬೆಸ್ಕಾಂ ಮತ್ತು ಕೆಪಿಟಿಸಿಎಲ್ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಮಾತನಾಡಿದರು.

ಬೇಸಿಗೆಯಲ್ಲಿ ಅಗತ್ಯವಿರುವ ವಿದ್ಯುತ್ ಪೂರೈಸಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅದಕ್ಕೆ ತಕ್ಕಂತೆ ವಿತರಣೆಯಲ್ಲಿ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.

ಕಳೆದ ಬೇಸಿಗೆಯಲ್ಲಿ 17 ಸಾವಿರ ಮೆಗಾವ್ಯಾಟ್ ಗರಿಷ್ಠ ಬೇಡಿಕೆ ಬಂದಿತ್ತು. ಅದರಂತೆ ಮುಂಬರುವ ಬೇಸಿಗೆಯಲ್ಲಿ ಎಷ್ಟು ವಿದ್ಯುತ್ ಬೇಕಾಗಬಹುದು ಎಂಬ ಬಗ್ಗೆ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಬಳಸಿಕೊಂಡು ಕೆಪಿಟಿಸಿಎಲ್, ಪಿಸಿಕೆಎಲ್ ಮತ್ತು ಎಸ್ ಎಲ್ ಡಿಸಿ ವತಿಯಿಂದ ನಡೆಸಿದ ಸಮೀಕ್ಷೆ ಪ್ರಕಾರ ಗರಿಷ್ಠ ಬೇಡಿಕೆ ಅವಧಿಯಲ್ಲಿ 19 ಸಾವಿರ ಮೆಗಾವ್ಯಾಟ್ ವಿದ್ಯುತ್ ಅವಶ್ಯಕತೆ ಬರಬಹುದು ಎಂದು ಅಂದಾಜಿಸಲಾಗಿದೆ ಎಂದು ತಿಳಿಸಿದರು.

ಅದರಂತೆ ಅಗತ್ಯ ವಿದ್ಯುತ್ ಪೂರೈಸಲು ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜತೆಗೆ ದೀರ್ಘಾವಧಿ ವಿದ್ಯುತ್ ಖರೀದಿ ಒಪ್ಪಂದದ ಮೂಲಕ ಹೆಚ್ಚುವರಿ ಅಗತ್ಯವಿರುವ ವಿದ್ಯುತ್ಅನ್ನು ಕಡಿಮೆ ದರಕ್ಕೆ ಖರೀದಿಸಲು ಅನ್ಯ ರಾಜ್ಯಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ. ಹೀಗಾಗಿ ಸದ್ಯದ ಪರಿಸ್ಥಿತಿಯಲ್ಲಿ ಲೋಡ್ ಶೆಡ್ಡಿಂಗ್ ಮಾಡುವ ಪ್ರಶ್ನೆ ಉದ್ಭವವಾಗುವುದಿಲ್ಲ ಎಂದರು.

ಜಿಲ್ಲೆಯಲ್ಲಿ ಅಗತ್ಯ ವಿದ್ಯುತ್ ಪೂರೈಕೆಗೆ ಕ್ರಮ:

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೈಗಾರಿಕೆಗಳು ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಕೃಷಿ ಚಟುವಟಿಕೆ ಜತೆಗೆ ಕೈಗಾರಿಕೆಗಳಿಗೂ ಸಮರ್ಪಕ ವಿದ್ಯುತ್ ಪೂರೈಸಬೇಕಾಗಿದೆ. ಹೀಗಾಗಿ ಸುಗಮ ವಿದ್ಯುತ್ ವಿತರಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಅದಕ್ಕಾಗಿ ಫೀಡರ್ ಗಳು, ಟ್ರಾನ್ಸ್ ಫಾರ್ಮರ್ ಗಳನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಫೀಡರ್ ಮಟ್ಟದ ಸೌರೀಕರಣದ ಮೂಲಕ ರೈತರ ಕೃಷಿ ಪಂಪ್ಸೆಟ್ ಗಳಿಗೆ ವಿದ್ಯುತ್ ಪೂರೈಸಲು ಕುಸುಮ್- ಸಿ ಯೋಜನೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿಯೂ ಅನುಷ್ಠಾನಗೊಳಿಸಲಾಗುತ್ತಿದೆ. ಬೇಸಿಗೆಯಲ್ಲಿ ರೈತರಿಗೆ ಸಮಸ್ಯೆಯಾಗದಂತೆ ಈ ಫೀಡರ್ ಮಟ್ಟದ ಸೌರೀಕರಣ ಕಾಮಗಾರಿಯನ್ನು ಎಲ್ಲಾ ಕಡೆ ಏಕಕಾಲದಲ್ಲಿ ಕೈಗೊಂಡು ನಿಗದಿತ ಗಡುವಿನಲ್ಲಿ ಪೂರ್ಣಗೊಳಿಸಬೇಕು ಎಂದು ಅನುಷ್ಠಾನ ಏಜನ್ಸಿಗಳಿಗೆ ಸಚಿವರು ಸೂಚನೆ ನೀಡಿದರು.

2.5 ಲಕ್ಷ ಪಂಪ್‌ಸೆಟ್‌ಗಳ ಸಕ್ರಮ:

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಕೃಷಿ ಪಂಪ್ ಸೆಟ್ ಗಳ ಅಕ್ರಮ- ಸಕ್ರಮ ಯೋಜನೆಯಡಿ 4.5 ಲಕ್ಷ ಅರ್ಜಿಗಳು ಬಾಕಿ ಇದ್ದವು. ಕಳೆದ ಒಂದೂವರೆ ವರ್ಷದಲ್ಲಿ 2.5 ಲಕ್ಷ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದೆ. ಇನ್ನುಳಿದ ಪಂಪ್ ಸೆಟ್ ಗಳನ್ನು ಮುಂದಿನ ಒಂದು ವರ್ಷದೊಳಗೆ ಸಕ್ರಮಗೊಳಿಸಲಾಗುವುದು ಎಂದರು.

ಟ್ರಾನ್ಸ್ ಫಾರ್ಮರ್ ಗಳಲ್ಲಿ ಸಮಸ್ಯೆ ಉದ್ಭವವಾದರೆ ತಕ್ಷಣ ಅದನ್ನು ಬದಲಾಯಿಸಲು ಅನುಕೂಲವಾಗುವಂತೆ ಜಿಲ್ಲೆಯಲ್ಲಿ ಟ್ರಾನ್ಸ್ ಫಾರ್ಮರ್ ಬ್ಯಾಂಕ್ ಗಳನ್ನು ಸ್ಥಾಪಿಸಲಾಗಿದ್ದು, ಅಲ್ಲಿ 213 ಟ್ರಾನ್ಸ್ ಫಾರ್ಮರ್ ಗಳು ಲಭ್ಯವಿದೆ. ಜತೆಗೆ ವಿದ್ಯುತ್ ಕಂಬಗಳು, ಕಂಡಕ್ಟರ್ ಗಳನ್ನು ಕೂಡ ಸಾಕಷ್ಟು ಪ್ರಮಾಣದಲ್ಲಿ ಸಂಗ್ರಹಿಸಿಡಲಾಗಿದೆ ಎಂದರು.

ಶಾಸಕರುಗಳ ಮನವಿಗೆ ಸ್ಪಂದನೆ:

ನೆಲಮಂಗಲ ನಗರದಲ್ಲಿ ವಿದ್ಯುತ್ ತಂತಿಗಳನ್ನು ಭೂಗತವಾಗಿ ಅಳವಡಿಸಬೇಕು ಎಂಬ ಶಾಸಕ ಎನ್.ಶ್ರೀನಿವಾಸ್ ಅವರ ಮನವಿಗೆ ಸ್ಪಂದಿಸಿದ ಸಚಿವರು, ಈ ಬಗ್ಗೆ ಯೋಜನೆ ರೂಪಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಹೊಸಕೋಟೆ ತಾಲೂಕಿನಲ್ಲಿ ಕುಸುಮ್-ಸಿ ಯೋಜನೆಯಡಿ ಕೆರೆಗಳ ಅಂಗಳಗಳಲ್ಲಿ ನಡೆಯುತ್ತಿರುವ ಫೀಡರ್ ಸೌರೀಕರಣ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸೇಕು ಎಂಬ ಶಾಸಕ ಶರತ್ ಬಚ್ಚೇಗೌಡ ಅವರ ಮನವಿಗೆ ಪ್ರತಿಕ್ರಿಯಿಸಿ, ಈ ಬಗ್ಗೆ ತ್ವರಿತ ಕ್ರಮ ಕೈಗೊಳ್ಳುವಂತೆ ಬೆಸ್ಕಾಂ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಸ್ಥಿತಿ ಸುಧಾರಣೆ:

ಗ್ಯಾರಂಟಿ ಯೋಜನೆಗಳಿಂದ ಕುಟುಂಬಗಳ ಆರ್ಥಿಕ ಸ್ಥಿತಿಗತಿ ಸುಧಾರಿಸಿದೆ. ಪ್ರತಿ ತಿಂಗಳು ಅಂದಾಜು ₹5000 ಗಳಷ್ಟು ಒಂದು ಕುಟುಂಬಕ್ಕೆ ಸಿಗುತ್ತಿದೆ. 200 ಯೂನಿಟ್ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿಗೆ ₹18,000 ಕೋಟಿಗಳು ಪ್ರತಿ ವರ್ಷ ಖರ್ಚಾಗುತ್ತದೆ ಎಂದರು.

ಶಾಸಕರಾದ ಶ್ರೀನಿವಾಸ್‌, ಕಿಯೋನಿಕ್ಸ್‌ ಅಧ್ಯಕ್ಷ ಶರತ್‌ ಬಚ್ಚೇಗೌಡ, ಇಂಧನ‌ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ನ ವ್ಯವಸ್ಥಾಪಕ ನಿರ್ದೇಶಕ ಮಾಂತೇಶ್ ಬೀಳಗಿ, ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ, ಜಿಪಂ ಸಿಇಒ ಡಾ.ಕೆ ಎನ್ ಅನುರಾಧ, ಇಂಧನ ಸಚಿವರ ಆಪ್ತ ಕಾರ್ಯದರ್ಶಿ ಸತೀಶ್ ಕುಮಾರ್, ಬಯಪ ಅಧ್ಯಕ್ಷ ಶಾಂತಕುಮಾರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಾಜಣ್ಣ, ದೇವನಹಳ್ಳಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಜಗನ್ನಾಥ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು, ಮುಖಂಡರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ
ಪುಷ್ಪಗಿರಿ ಜೇಸಿಗೆ 50 ವರ್ಷ: ಸಂಭ್ರಮ ಆಚರಣೆ