ಸ್ಥಳೀಯ ವಿಚಾರ ನಡೆಯಲ್ಲ, ಜಾತಿ ಪ್ರಭಾವ ಬೀರಲ್ಲ: ಜಗದೀಶ ಶೆಟ್ಟರ್‌

KannadaprabhaNewsNetwork |  
Published : Apr 13, 2024, 01:07 AM ISTUpdated : Apr 13, 2024, 01:45 PM IST
ಬೆಳಗಾವಿಯಲ್ಲಿ ಬಿಜೆಪಿ ಮಾಧ್ಯಮ ಕಚೇರಿಯನ್ನು ಮಾಜಿ ಸಿಎಂ ಜಗದೀಶ ಶೆಟ್ಟರ್‌ ಉದ್ಘಾಟಿಸಿದರು | Kannada Prabha

ಸಾರಾಂಶ

ಬೆಳಗಾವಿ ಲೋಕಸಭಾ ಚುನಾವಣೆ ರಾಷ್ಟ್ರೀಯತೆ, ನಾಯಕತ್ವದ ಆಧಾರದ ಮೇಲೆಯೇ ನಡೆಯುತ್ತದೆ. ಸ್ಥಳೀಯ ವಿಚಾರ ನಡೆಯಲ್ಲ. ಜಾತಿ ಪ್ರಭಾವ ಬೀರಲ್ಲ ಎಂದು ಬೆಳಗಾವಿ ಬಿಜೆಪಿ ಅಭ್ಯರ್ಥಿ, ಮಾಜಿ ಸಿಎಂ ಜಗದೀಶ ಶೆಟ್ಟರ್‌ ಹೇಳಿದರು.

 ಬೆಳಗಾವಿ : ಲೋಕಸಭಾ ಚುನಾವಣೆ ರಾಷ್ಟ್ರೀಯತೆ, ನಾಯಕತ್ವದ ಆಧಾರದ ಮೇಲೆಯೇ ನಡೆಯುತ್ತದೆ. ಸ್ಥಳೀಯ ವಿಚಾರ ನಡೆಯಲ್ಲ. ಜಾತಿ ಪ್ರಭಾವ ಬೀರಲ್ಲ ಎಂದು ಬೆಳಗಾವಿ ಬಿಜೆಪಿ ಅಭ್ಯರ್ಥಿ, ಮಾಜಿ ಸಿಎಂ ಜಗದೀಶ ಶೆಟ್ಟರ್‌ ಹೇಳಿದರು.

ಸದಾಶಿವ ನಗರದ ಲಕ್ಷ್ಮೀ ಕಾಂಪ್ಲೆಕ್ಸ್‌ನಲ್ಲಿ ಶುಕ್ರವಾರ ಬಿಜೆಪಿ ಮಾಧ್ಯಮ ವಿಭಾಗದ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ಜಾತಿಯನ್ನು ಮೀರಿ ದೇಶದ ಭದ್ರತೆಯ ವಿಚಾರದ ಮೇಲೆ ಈ ಚುನಾವಣೆ ನಡೆಯುತ್ತದೆ. ಜಾತಿ ರಾಜಕಾರಣದ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಸ್ಪಷ್ಟಪಡಿಸಿದರು.

ಬೆಳಗಾವಿ ಅಭಿವೃದ್ಧಿಗೆ ನಾನು ಸಾಕಷ್ಟು ಶ್ರಮಿಸಿದ್ದೇನೆ. ಬೆಳಗಾವಿ ಜೊತೆಗೆ 30 ವರ್ಷಗಳಿಂದ ಸಂಬಂಧ ಹೊಂದಿದ್ದೇನೆ. ಆದರೆ, ಕಾಂಗ್ರೆಸ್‌ ನನ್ನ ವಿರುದ್ಧ ಮಾಡುತ್ತಿರುವ ಆರೋಪಗಳಲ್ಲಿ ಯಾವುದೇ ಸತ್ಯಾಂಶ ಇಲ್ಲ. ಬೆಳಗಾವಿ ಜನಪ್ರತಿನಿಧಿಯಾಗಿ ದಿನದ 24 ಗಂಟೆಗಳ ಕಾಲ ಕೆಲಸ ಮಾಡುತ್ತೇನೆ. ಈ ಬಾರಿಯೂ ಬಿಜೆಪಿ ನೂರಕ್ಕೆ ನೂರರಷ್ಟು ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಗೆದ್ದೇ ಗೆಲ್ಲುತ್ತದೆ. ಕ್ಷೇತ್ರದಲ್ಲಿ ಪರಿಣಾಮಕಾರಿ ಪ್ರಚಾರ ನಡೆಯುತ್ತಿದೆ. ಎಲ್ಲೆಡೆ ಬಿಜೆಪಿಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಬೆಳಗಾವಿ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರಕ್ಕೆ ಪಿಎಂ ನರೇಂದ್ರ ಮೋದಿ, ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ, ಕೇಂದ್ರ ಸಚಿವ ನಿತಿನ್‌ ಗಡ್ಕರಿ, ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವೀಸ್‌ ಸೇರಿದಂತೆ ರಾಷ್ಟ್ರೀಯ ನಾಯಕರಿಗೆ ಆಗಮಿಸುವಂತೆ ಕೋರಲಾಗಿದೆ. ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೂ ಪ್ರಚಾರಕ್ಕೆ ಆಗಮಿಸುವಂತೆ ಕೋರಲಾಗಿದ್ದು, ಅವರು ಕೂಡ ಕ್ಷೇತ್ರಕ್ಕೆ ಆಗಮಿಸಿ ಬಿಜೆಪಿ ಪರವಾಗಿ ಪ್ರಚಾರ ಕಾರ್ಯ ಕೈಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.

ಬೆಳಗ್ಗೆ ಚಾ ಪೇ ಚರ್ಚೆ ಮಾಡಿ ಮತದಾರರ ಸಮಸ್ಯೆ ಆಲಿಸಲಾಗುತ್ತಿದೆ. ಅಲ್ಲದೇ, ಪ್ರತಿಯೊಂದು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಈ ಬಾರಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಮಂತ್ರಿಯನ್ನಾಗಿಸಲು ಎಲ್ಲರೂ ಕೈಜೋಡಿಸಿ, ಆಶೀರ್ವದಿಸಬೇಕು ಎಂದು ಕೋರಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್‌ ಸದಸ್ಯ ಹನುಮಂತ ನಿರಾಣಿ, ರಾಜ್ಯಸಭಾ ಮಾಜಿ ಸದಸ್ಯ ಡಾ.ಪ್ರಭಾಕರ ಕೋರೆ, ವಿಧಾನ ಪರಿಷತ್‌ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನಿಲ ಬೆನಕೆ, ರಮೇಶ ದೇಶಪಾಂಡೆ, ಮೇಯರ್‌ ಸವಿತಾ ಕಾಂಬಳೆ, ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ, ಮಹಾನಗರ ಜಿಲ್ಲಾಧ್ಯಕ್ಷೆ ಗೀತಾ ಸುತಾರ ಮತ್ತಿತರರು ಉಪಸ್ಥಿತರಿದ್ದರು.17 ರಂದು ನಾಮಪತ್ರ ಸಲ್ಲಿಕೆ

ಏ.17 ರಂದು ಬಿಜೆಪಿ ಕಾರ್ಯಕರ್ತರು, ಬೆಂಬಲಿಗರೊಂದಿಗೆ ಬೃಹತ್‌ ಮೆರವಣಿಗೆ ಮೂಲಕ ತೆರಳಿ, ಜಿಲ್ಲಾ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಲಾಗುವುದು. ನಾಮಪತ್ರ ಸಲ್ಲಿಸುವ ವೇಳೆ ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಮತ್ತಿತರ ನಾಯಕರು ಪಾಲ್ಗೊಳ್ಳುವರು. ಎಲ್ಲಿಂದ ಮೆರವಣಿಗೆ ಆರಂಭಿಸಬೇಕು ಎನ್ನುವುದರ ಕುರಿತು ಇನ್ನೂ ತೀರ್ಮಾನ ಮಾಡಿಲ್ಲ. ಅಂದಿನ ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಾಲ್ಗೊಳ್ಳಬೇಕು.

-ಜಗದೀಶ ಶೆಟ್ಟರ್‌, ಬೆಳಗಾವಿ ಬಿಜೆಪಿ ಅಭ್ಯರ್ಥಿ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೋಗಿಲು ನಿರಾಶ್ರಿತರಿಗೆ 5ರ ನಂತರ ವಸತಿ ಭಾಗ್ಯ
ಹೊಸ ವರ್ಷಕ್ಕೆ ಶೇ.40 ಮದ್ಯ ಮಾರಾಟ ಹೆಚ್ಚಳ!