ದೊಡ್ಡಬಳ್ಳಾಪುರ: ಸರ್ಕಾರಿ ಸೌಲಭ್ಯಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಕಾರ್ಯದಲ್ಲಿ ಅಧಿಕಾರಿಗಳು ಕಟ್ಟುನಿಟ್ಟಾಗಿ ಕೆಲಸ ಮಾಡಬೇಕು. ನಿರ್ಲಕ್ಷ್ಯ ತೋರುವ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಅಭಿವೃದ್ಧಿ ಪರ ಕಾರ್ಯಕ್ರಮಗಳಿಗಾಗಿ ಸರ್ಕಾರವು ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ಜನಸಾಮಾನ್ಯರಿಗೆ ಸೌಲಭ್ಯಗಳು ಪಾರದರ್ಶಕವಾಗಿ, ಜವಾಬ್ದಾರಿಯುತವಾಗಿ ಅಧಿಕಾರಿಗಳು ಕಾರ್ಯನಿರ್ವಹಿಸುವ ಮೂಲಕ ಜಿಲ್ಲೆ, ರಾಜ್ಯದ ಅಭಿವೃದ್ಧಿಗೆ ಶ್ರಮಿಸಬೇಕು. ಯಾವುದೇ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸುವಾಗ ಜನಪ್ರತಿನಿಧಿಗಳ ಗಮನಕ್ಕೆ ತಂದು ಪ್ರತಿಯೊಬ್ಬರಿಗೂ ತಲುಪುವಂತೆ ಕೆಲಸ ಮಾಡಬೇಕು ಎಂದು ಹೇಳಿದರು.
ಪೋಡಿ ಮುಕ್ತ ಜಿಲ್ಲೆ ಗುರಿ:ಜಿಲ್ಲೆಯನ್ನು ಪೋಡಿ ಮುಕ್ತ ಜಿಲ್ಲೆಯನ್ನಾಗಿ ಮಾಡುವ ಗುರಿ ಹೊಂದಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಈ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಜಿಲ್ಲೆಯ ಕೆಲವು ಗ್ರಾಮಗಳಲ್ಲಿ ಸ್ಮಶಾನ ಭೂಮಿ ಸಮಸ್ಯೆ, ಸ್ಮಶಾನ ಸಂಪರ್ಕಿಸುವ ರಸ್ತೆ ಇಲ್ಲದಿರುವ ಬಗ್ಗೆ ಸಾರ್ವಜನಿಕರಿಂದ ದೂರು ಕೇಳಿ ಬಂದಿದೆ. ಈ ಬಗ್ಗೆ ಸಂಬಂಧಪಟ್ಟ ತಹಸೀಲ್ದಾರ್ ಹಾಗೂ ತಾಪಂ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳ ನೇತೃತ್ವದಲ್ಲಿ ಸ್ಥಳ ಪರಿಶೀಲನೆ ನಡೆಸಿ ಸಮಸ್ಯೆ ಬಗೆ ಹರಿಸಿಬೇಕು ಎಂದರು.
ಬಡವರಿಗೆ ಮನೆ ಕಲ್ಪಿಸಲು, ನಿವೇಶನ ಹಂಚಲು ಕ್ರಮ ವಹಿಸಲಾಗುವುದು. ಈಗಾಗಲೇ ಜಿಲ್ಲೆಯ ಹಲವು ಭಾಗಗಳಲ್ಲಿ ನಿವೇಶನಕ್ಕಾಗಿ ಜಾಗ ಗುರ್ತಿಸಿಲಾಗಿದೆ. ಶೀಘ್ರವೇ ನಿವೇಶನಗಳನ್ನು ನಿರ್ಮಾಣ ಮಾಡಲಾಗುವುದು ಎಂದರು.
ಪ್ರತಿ ವರ್ಷ ಅರಣ್ಯ ಇಲಾಖೆಯವರು ಸಾವಿರಾರು ಸಸಿಗಳನ್ನು ನೆಡುತ್ತಾರೆ. ಆದರೆ ಅದನ್ನು ಪೋಷಿಸಿ ಬೆಳೆಸುವಲ್ಲಿ ಗಮನಹರಿಸುತ್ತಿಲ್ಲ. ಸಸಿಗಳನ್ನು ಎಲ್ಲೆಂದರಲ್ಲಿ ನೆಡಬಾರದು ಬದಲಾಗಿ, ಪಂಚಾಯಿತಿ ಮಟ್ಟದಲ್ಲಿ ಸರ್ಕಾರಿ ಜಮೀನುಗಳಲ್ಲಿ ಹಾಗೂ ಗ್ರಾಮ ಠಾಣಾಗಳಲ್ಲಿ ನೆಡಬೇಕು. ಸಸಿ ನೆಟ್ಟ ನಂತರ ಕನಿಷ್ಠ ಮೂರು ವರ್ಷಗಳವರೆಗೆ ಪೋಷಿಸಿ ಬೆಳೆಸಬೇಕು ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ವಿದ್ಯುತ್ ಸಮಸ್ಯೆ, ಭೂ ಸ್ವಾಧೀನ ಪರಿಹಾರ ಹಣ, ಘನತ್ಯಾಜ್ಯ ವಿಲೇವಾರಿ, ಹಕ್ಕುಪತ್ರ ವಿವರಣೆ, ನಿವೇಶನ ಹಂಚಿಕೆ ಸಂಬಂಧಿಸಿದಂತೆ ವಿವಿಧ ಸಮಸ್ಯೆಗಳನ್ನು ಸಾರ್ವಜನಿಕರಿಂದ ಸ್ವೀಕರಿಸಲಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಕೂಲಂಕಶವಾಗಿ ಪರಿಶೀಲಿಸಿ, ಶೀಘ್ರ ಕ್ರಮವಹಿಸಿ ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದು ಸಚಿವರು ತಿಳಿಸಿದರು.
ಬೆಂ.ಗ್ರಾ. ಜಿಲ್ಲಾಡಳಿತ ಭವನದಲ್ಲಿ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಪ್ರಗತಿ ಪರಿಶೀಲನಾ ಸಭೆ ನಡೆಸಿ ವಿವಿಧ ಇಲಾಖೆಗಳ ಅಧಿಕಾರಿಗಳಿಂದ ಮಾಹಿತಿ ಪಡೆದರು.15ಕೆಡಿಬಿಪಿ2-