ಕನ್ನಡಪ್ರಭ ವಾರ್ತೆ ಮಂಡ್ಯ
ಮಂಡ್ಯ ಕೃಷಿ ವಿಶ್ವವಿದ್ಯಾಲಯ ಕುರಿತು ನನ್ನ ಬಗ್ಗೆ ಹುಟ್ಟಿಕೊಂಡಿರುವ ಸಂದೇಹಾತ್ಮಕ, ರಾಜಕೀಯ ದುರುದ್ದೇಶದ ಅಪಪ್ರಚಾರದ ನಡವಳಿಕೆ ದುಃಖಕರ ಎಂದು ಪತ್ರಿಕಾ ಹೇಳಿಕೆಯಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯಲ್ಲಿ ಕೃಷಿ ವಿವಿ ಸ್ಥಾಪನೆಗೆ ನನ್ನ ಹೃದಯಪೂರ್ವಕ ಸ್ವಾಗತವಿದೆ. ಅಭಿವೃದ್ಧಿ ವಿಷಯದಲ್ಲಿ ನಾನೆಂದೂ ರಾಜಕೀಯ ಬೆರೆಸಿಲ್ಲ, ಇದು ನನ್ನ ವ್ಯಕ್ತಿತ್ವಕ್ಕೆ ಸಲ್ಲದ ನಡವಳಿಕೆ. ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದವನು ನಾನು. ಮಂಡ್ಯ ಜಿಲ್ಲೆ ಹಿತಕ್ಕೆ ಸಂಬಂಧಿಸಿ ಅಲ್ಲಿನ ಜನಪ್ರತಿನಿಧಿಯಾಗಿ ನನ್ನದೂ ಹೊಣೆಗಾರಿಕೆ ಇದೆ. ಈ ಬಗ್ಗೆ ನನ್ನಲ್ಲಿ ಗೊಂದಲ ಇಲ್ಲ, ಇದು ಸ್ಪಷ್ಟ ಎಂದು ಹೇಳಿದ್ದಾರೆ.ಮುಖ್ಯಮಂತ್ರಿಯಾಗಿ ಮಂಡ್ಯ ಜಿಲ್ಲೆಗೆ ನೀಡಿರುವ ಬಜೆಟ್ ಕೊಡುಗೆ ಬಗ್ಗೆ ನಾನು ಹೊಸದಾಗಿ ಹೇಳಬೇಕಿಲ್ಲ. ನನಗೆ ರಾಜಕೀಯವಾಗಿ ಶಕ್ತಿ ತುಂಬಿದ, ರಕ್ತಸಂಬಂಧಕ್ಕೂ ಮೀರಿ ಅವಿನಾಭಾವ ಬಾಂಧವ್ಯದ ದ್ಯೋತಕವಾಗಿರುವ ಮಂಡ್ಯ ಜನರ- ನನ್ನ ನಡುವೆ ಹುಳಿ ಹಿಂಡುವ ವ್ಯರ್ಥ ಪ್ರಯತ್ನ ಬೇಡ ಎಂದು ಅವರು ಕಿವಿಮಾತು ಹೇಳಿದ್ದಾರೆ.
ಜಾಲತಾಣಗಳಲ್ಲಿ ಅಪಪ್ರಚಾರ ಮಾಡುತ್ತಿರುವ ತಿಳಿಗೇಡಿಗಳು, ಅದಕ್ಕೆ ತುಪ್ಪ ಸುರಿಯುವ ಸೋಗಲಾಡಿಗಳು ಸತ್ಯ ಅರಿತುಕೊಳ್ಳಲಿ ಎಂದು ಆಶಿಸುತ್ತೇನೆ ಎಂದು ಅವರು ಕೋರಿದ್ದಾರೆ.