ಗೃಹಲಕ್ಷ್ಮೀ ಯೋಜನೆ ಸೌಲಭ್ಯ ವಿತರಣೆಯಲ್ಲಿ ವಿಳಂಬ ಸಲ್ಲದು: ಅಸೂಟಿ

KannadaprabhaNewsNetwork |  
Published : Jun 12, 2026, 02:30 AM IST
ಗದಗ ನಗರದ ಜಿಲ್ಲಾಡಳಿತ ಭವನದಲ್ಲಿ ಗುರುವಾರ ಗೃಹಲಕ್ಷ್ಮೀ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಬಿ.ಬಿ. ಅಸೂಟಿ ಮಾತನಾಡಿದರು. | Kannada Prabha

ಸಾರಾಂಶ

ಮಹಿಳೆಯರಿಗೆ ಸ್ವಾವಲಂಬಿ ಜೀವನ ನಡೆಸಲು ಹಾಗೂ ಆರ್ಥಿಕ ಸಬಲೀಕರಣಕ್ಕೆ ರಾಜ್ಯ ಸರ್ಕಾರ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೊಳಿಸಿದೆ.

ಗದಗ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮೀ ಯೋಜನೆಯ ಸೌಲಭ್ಯ ವಿತರಣೆಯಲ್ಲಿ ವಿನಾಕಾರಣ ವಿಳಂಬವಾಗಬಾರದು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ ಹೇಳಿದರು.

ನಗರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಗುರುವಾರ ಜರುಗಿದ ಗೃಹಲಕ್ಷ್ಮೀ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ಮಹಿಳೆಯರಿಗೆ ಸ್ವಾವಲಂಬಿ ಜೀವನ ನಡೆಸಲು ಹಾಗೂ ಆರ್ಥಿಕ ಸಬಲೀಕರಣಕ್ಕೆ ರಾಜ್ಯ ಸರ್ಕಾರ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೊಳಿಸಿದೆ. ಈ ಸೌಲಭ್ಯದಿಂದ ಯಾವ ಅರ್ಹ ಫಲಾನುಭವಿಯೂ ವಂಚಿತರಾಗದಂತೆ ನೋಡಿಕೊಳ್ಳಬೇಕು. ಗದಗ ಜಿಲ್ಲೆಯಲ್ಲಿ ಶೇ. 100ರಷ್ಟು ಪ್ರಗತಿ ಸಾಧಿಸಲು ಇಲಾಖೆಯ ಅಧಿಕಾರಿಗಳು ವಿಶೇಷ ಆಸಕ್ತಿ ಕಾರ್ಯನಿರ್ವಹಿಸಬೇಕು ಎಂದರು.

ಜಿಲ್ಲಾ ಗ್ಯಾರಂಟಿ ಯೋಜನೆ ಪ್ರಾಧಿಕಾರದ ಸದಸ್ಯ ಅಶೋಕ ಮಂದಾಲಿ ಮಾತನಾಡಿ, ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಆಧಾರ್ ಸೀಡಿಂಗ್ ಸಮಸ್ಯೆ ಹಾಗೂ ತಾಂತ್ರಿಕ ತೊಂದರೆಗಳೇನಾದರೂ ಇದ್ದಲ್ಲಿ ಪರಿಶೀಲನೆ ನಡೆಸಬೇಕು. ಯೋಜನೆಯ ಸೌಲಭ್ಯದ ಫಲಾನುಭವಿಗಳ ಮನೆ ಮನೆ ಸರ್ವೆ ಕಾರ್ಯ ಮಾಡುವಲ್ಲಿ ವಿಳಂಬ ಮಾಡಬಾರದು. ಗೃಹಲಕ್ಷ್ಮೀ ಯೋಜನೆಯ ಹಣ ಪಾವತಿ ಮಾಡುವ ಸಂದರ್ಭದಲ್ಲಿ ಅನುದಾನದ ಕೊರತೆಯಿದ್ದರೆ ಸರ್ಕಾರಕ್ಕೆ ತ್ವರಿತವಾಗಿ ಅನುದಾನ ಬಿಡುಗಡೆಗಾಗಿ ಪತ್ರ ಬರೆಯಬೇಕು ಎಂದರು.

ಗೃಹಲಕ್ಷ್ಮೀ ಯೋಜನೆಯಡಿ ಗದಗ ಜಿಲ್ಲೆಯಲ್ಲಿ ಫೆಬ್ರುವರಿ 2026 ಮಾಹೆಯಲ್ಲಿ 2,61,860 ಅರ್ಜಿಗಳು ನೋಂದಣಿಯಾಗಿದ್ದು, ಅದರಲ್ಲಿ 2,52,843 ಅರ್ಜಿಗಳು ಮಂಜೂರಾಗಿವೆ. ಶೇ. 96.56ರಷ್ಟು ಪ್ರಗತಿ ಸಾಧಿಸಲಾಗಿದೆ. ಗದಗ- ಶೇ. 96.50, ಗಜೇಂದ್ರಗಡ- ಶೇ. 96.14, ಲಕ್ಷ್ಮೇಶ್ವರ- ಶೇ. 96.83, ಮುಂಡರಗಿ- ಶೇ. 96.52, ನರಗುಂದ –ಶೇ. 96.62, ರೋಣ- ಶೇ. 96.53 ಹಾಗೂ ಶಿರಹಟ್ಟಿ- ಶೇ. 96.97ರಷ್ಟು ಸಾಧನೆಯಾಗಿದೆ ಎಂದು ಅಧಿಕಾರಿಗಳು ಸಭೆಗೆ ವಿವರಿಸಿದರು.

ಇದೇ ಸಂದರ್ಭದಲ್ಲಿ ಗೃಹಲಕ್ಷ್ಮೀ ಯೋಜನೆ ಸೌಲಭ್ಯ ವಿತರಣೆ ಸಂಬಂಧಿಸಿದಂತೆ ಉಂಟಾಗುತ್ತಿರುವ ಇ-ಕೆವೈಸಿ, ಎನ್‌ಪಿಸಿಐ, ಜಿಎಸ್‌ಟಿ ಮುಂತಾದ ತಾಂತ್ರಿಕ ಸಮಸ್ಯೆಗಳ ಕುರಿತು ವಿವರವಾದ ಚರ್ಚೆ ನಡೆಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ರಾಧಾ ಮಣ್ಣೂರ ಪ್ರಾಸ್ತಾವಿಕವಾಗಿ ಮಾತನಾಡಿದರು.

ಜಿಲ್ಲಾ ಗ್ಯಾರಂಟಿ ಯೋಜನಾ ಪ್ರಾಧಿಕಾರದ ಉಪಾಧ್ಯಕ್ಷ ಫಕ್ರುಸಾಬ ಚಿಕ್ಕಮಣ್ಣೂರ, ಪಿ.ಬಿ. ಅಳಗವಾಡಿ, ಸದಸ್ಯರಾದ ವೀರಣ್ಣ ಪಠಪತಿ, ವಿವೇಕ ಯಾವಗಲ್, ಸಂಗನಗೌಡ ಪಾಟೀಲ, ಶರಣಪ್ಪ ಬೆಟಗೇರಿ, ಮಹಿಳಾ ಇಲಾಖೆಯ ನಿರೂಪಣಾಧಿಕಾರಿ ಮಹಾಂತೇಶ ಪೂಜಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಆಧಿಕಾರಿ ಜಯಶ್ರೀ ಆರ್., ರಾಜು ಕಂಠಿಗೊಣ್ಣನವರ ಇದ್ದರು. ರೇಣುಕಾ ಪ್ರಾರ್ಥಿಸಿದರು. ವಿಜಯಲಕ್ಷ್ಮೀ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಹಿಳಾ - ಮಕ್ಕಳ ಇಲಾಖೆಯ ಸಿಬ್ಬಂದಿಗಳಿಗೆ ಮಾಹಿತಿ ಕಾರ್ಯಾಗಾರ
ಎಂಐಟಿಕೆ ವಿದ್ಯಾರ್ಥಿನಿಯರಿಂದ ಸ್ಮಾರ್ಟ್ ಹೈಡ್ರೋಪೋನಿಕ್ಸ್