ಕನ್ನಡಪ್ರಭ ವಾರ್ತೆ ಹೊಸಪೇಟೆ
ನಗರದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಅಬ್ದುಲ್ ರಹೀಮಾನ ಎ. ನಂದಗಡಿ ಅವರು ಸಸಿ ನೆಡುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಯಾವುದೇ ದೇಶದ ಅಭಿವೃದ್ಧಿಗೆ ಆ ದೇಶದ ಆರ್ಥಿಕ ಸಂಪನ್ಮೂಲಗಳ ಜೊತೆಗೆ ಪರಿಸರ ಸಹ ತಳಪಾಯವಾಗಿರುತ್ತದೆ. ಈ ನಿಟ್ಟಿನಲ್ಲಿ ಭವಿಷ್ಯದ ಬಗ್ಗೆ ಯೋಚಿಸಿ ನಾವೆಲ್ಲರೂ ಪರಿಸರ ಸಂರಕ್ಷಣೆಯಲ್ಲಿ ತೊಡಗಬೇಕು. ಪ್ರಾಣಿ ಮತ್ತು ಪಕ್ಷಿಗಳು ಸಹ ಪರಿಸರದ ಭಾಗವಾಗಿದ್ದು, ಹಣ್ಣು ಹಂಪಲು ಸಸಿ ನೆಡಲು ಹೆಚ್ಚಿನ ಒತ್ತು ನೀಡಬೇಕು ಎಂದರು.
ಆರೋಗ್ಯದ ದೃಷ್ಟಿಯಿಂದ ಔಷಧಿ ಗುಣದ ಸಸಿಗಳನ್ನು ಸಹ ಹೆಚ್ಚಿನ ಪ್ರಮಾಣದಲ್ಲಿ ಬೆಳೆಯುವುದು ಇಂದಿನ ಅತೀ ಅಗತ್ಯವಾಗಿದೆ. ಆಯುಷ್ ಇಲಾಖೆ, ಅರಣ್ಯ ಇಲಾಖೆಗಳು ಈ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಬೇಕು.ಪರಿಸರದ ಸಂರಕ್ಷಣೆಯಲ್ಲಿ ನನ್ನ ಪಾತ್ರ ಸಹ ಇದೆ ಎಂದು ಯೋಚಿಸಿ ಪ್ರತಿಯೊಬ್ಬರು ತಮ್ಮ ಮನೆ ಅಂಗಳದಲ್ಲಿ, ತಾವುಗಳು ಕೆಲಸ ಮಾಡುವ ಸ್ಥಳದಲ್ಲಿ ಕನಿಷ್ಟ ಒಂದು ಸಸಿಯನ್ನಾದರೂ ನೆಟ್ಟು ಅದನ್ನು ಬೆಳೆಸಿದಲ್ಲಿ ಪರಿಸರ ದಿನಾಚರಣೆಗೆ ಅರ್ಥ ಬರಲಿದೆ ಎಂದರು.
ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷೆ ಹೇಮಲತಾ ಬಿ ಹುಲ್ಲೂರು, ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ ಪ್ರಶಾಂತ್ ನಾಗಲಾಪುರ, ಅಪರ ಸಿವಿಲ್ ನ್ಯಾಯಾಧೀಶ ಅಶೋಕ ಎಚ್.ಆರ್., 2ನೇ ಅಪರ ಸಿವಿಲ್ ನ್ಯಾಯಾಧೀಶ ಸಂಜೀವಕುಮಾರ್, 3ನೇ ಅಪರ ಸಿವಿಲ್ ನ್ಯಾಯಾಧೀಶರಾದ ಚೈತ್ರಾ ಜೆ., ಹೊಸಪೇಟೆ ವಕೀಲರ ಸಂಘದ ಅಧ್ಯಕ್ಷ ಕೆ. ಪ್ರಹ್ಲಾದ್, ಸಂಘದ ಪ್ರಧಾನ ಕಾರ್ಯದರ್ಶಿ ಪಿ. ಶ್ರೀನಿವಾಸಮೂರ್ತಿ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಚಿದಾನಂದ, ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿ ರಾಜೇಶ ನಾಯಕ, ವಿಜಯನಗರ ವಲಯ ಅರಣ್ಯಾಧಿಕಾರಿ ಭರತ್‌ರಾಜ್ ಎಂ.ಎ., ಜಿಲ್ಲಾ ಆಯುಷ್ ಅಧಿಕಾರಿ ಸುಜಾತಾ ಪಾಟೀಲ, ಅರಣ್ಯ ಇಲಾಖೆ ಅಧಿಕಾರಿಗಳು ಇದ್ದರು. ತಾಲೂಕು ಕಾನೂನು ಸೇವಾ ಸಮಿತಿಯ ಆಡಳಿತ ಸಹಾಯಕ ಎಸ್.ಬಿ. ಕಮತಗಿ ನಿರ್ವಹಿಸಿದರು.