ಕನ್ನಡಪ್ರಭ ವಾರ್ತೆ ರಾಮನಗರ
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಅನ್ನಭಾಗ್ಯ ಯೋಜನೆಯಲ್ಲಿ ಅಕ್ಕಿ ಕಾಳಸಂತೆಯಲ್ಲಿ ಮಾರಾಟವಾದರೆ, ಶಕ್ತಿ ಯೋಜನೆಯಲ್ಲಿ ಸರ್ಕಾರಿ ನೌಕರಿಯಲ್ಲಿರುವ ಮಹಿಳೆಯರು ಸಾರಿಗೆ ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಇಂತಹ ಕೆಲವು ಪ್ರಕರಣಗಳನ್ನು ಪರಿಶೀಲನೆ ಮಾಡುತ್ತಿದ್ದು, ಕೆಲವೊಂದು ಬದಲಾವಣೆ ತರಲು ಉದ್ದೇಶಿಸಲಾಗಿದೆ ಎಂದರು.
ಗ್ಯಾರಂಟಿ ಕಿತ್ತಾಕಲು ಬಿಜೆಪಿ ಷಡ್ಯಂತ್ರ:ಪಂಚ ಗ್ಯಾರಂಟಿ ಯೋಜನೆಗಳು ಜನರ ಬದುಕಿನ ದಿಕ್ಕನ್ನೇ ಬದಲಾಯಿಸಿದೆ. ಒಂದೆಡೆ ಪ್ರಧಾನಿ ಮೋದಿಯವರು ಹಲವು ರಾಜ್ಯಗಳಲ್ಲಿ ಗ್ಯಾರಂಟಿ ಕಾರ್ಯಕ್ರಮಗಳನ್ನು ಕಾಪಿ ಮಾಡುತ್ತಿದ್ದಾರೆ. ಬಿಹಾರ, ಮಹಾರಾಷ್ಟ್ರ ರಾಜ್ಯಗಳಲ್ಲಿ ಮಹಿಳೆಯರಿಗೆ ಹಣ ಕೊಡುತ್ತಿದ್ದಾರೆ. ಇಲ್ಲಿನ ಬಿಜೆಪಿ ನಾಯಕರು ತಮ್ಮ ಸರ್ಕಾರ ಬಂದರೆ ಎಲ್ಲವನ್ನೂ ರದ್ದು ಮಾಡುವುದಾಗಿ ಹೇಳುತ್ತಿದ್ದಾರೆ. ಇಂಟರ್ ನಲ್ ಮೀಟಿಂಗ್ ಮಾಡಿ ಗ್ಯಾರಂಟಿ ಕಿತ್ತಾಕಲು ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಗ್ಯಾರಂಟಿ ಯೋಜನೆಗಳ ಜಾರಿಯಾದರೆ ಬಿಜೆಪಿಯವರು ಅತ್ತೆ- ಸೊಸೆಗೆ ಜಗಳ ತಂದಿಡುತ್ತಿದ್ದಾರೆಂದು ಟೀಕೆ ಮಾಡಿದರೆ, ಕುಮಾರಸ್ವಾಮಿಯವರು ಹೆಣ್ಣು ಮಕ್ಕಳು ದಾರಿ ತಪ್ಪಿಬಿಡುತ್ತಾರೆಂದು ಹೇಳಿದ್ದರು. ಈಗ ಗೃಹಲಕ್ಷ್ಮೀ, ಶಕ್ತಿ ಯೋಜನೆಯಿಂದಾಗಿ ಮಹಿಳೆಯರ ಸಾಮಾಜಿಕ, ಆರ್ಥಿಕ, ಬದುಕಿನಲ್ಲಿ ಬದಲಾವಣೆಗೊಂಡಿದ್ದು, ಸ್ವಾವಲಂಬಿ ಜೀವನ ನಡೆಸುವಂತಾಗಿದೆ ಎಂದು ತಿಳಿಸಿದರು.
ವೇದಿಕೆ ಕಾರ್ಯಕ್ರಮವನ್ನು ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳೇ ಉದ್ಘಾಟಿಸಿದ್ದು ವಿಶೇಷವಾಗಿತ್ತು. ವೇದಿಕೆ ಕಾರ್ಯಕ್ರಮ ಮುನ್ನ ಜಿಲ್ಲಾ ಪಂಚಾಯತ್ ಆವರಣದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಮಾಹಿತಿ ನೀಡುವ ಮಳಿಗೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ಉದ್ಘಾಟಿಸಿದರು.
---------------------------------------
ರಾಮನಗರ: ರಾಜ್ಯದ ಜನರಿಗೆ ಸ್ವಾವಲಂಬಿ ಬದುಕು ಕಟ್ಟಿಕೊಟ್ಟ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ಯಾರಂಟಿ ಸಮಾವೇಶಗಳನ್ನು ಆಯೋಜಿಸುವಂತೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಿಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಲಹೆ ನೀಡಿದರು.
ಗ್ಯಾರಂಟಿ ಯೋಜನೆಯ ಸದಸ್ಯರು ಗ್ಯಾರಂಟಿ ರಾಯಭಾರಿಗಳಾಗಿದ್ದು, ಯೋಜನೆಗಳ ಪರಿಶೀಲನೆ ಹಾಗೂ ಪರಿಣಾಮಕಾರಿ ಅನುಷ್ಠಾನಕ್ಕಾಗಿ ರಾಜ್ಯ, ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯನ್ನು ರಚಿಸಲಾಗಿದ್ದು, ಇವರು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯಾಗಾರವನ್ನು ಆಯೋಜಿಸಿ, ಜನರಲ್ಲಿ ಜಾಗೃತಿ ಮೂಡಿಸಿ ಪ್ರತಿಯೊಬ್ಬರ ಅಭಿಪ್ರಾಯಗಳನ್ನು ಹಂಚಿಕೊಳ್ಳುವಂತೆ ಕಾರ್ಯಕ್ರಮ ಆಯೋಜನೆ ಮಾಡಬೇಕು. ಇದರಿಂದ ಸರ್ಕಾರದ ಅಭಿವೃದ್ಧಿ ಕೆಲಸಗಳನ್ನು ಜನರಿಗೆ ಮನದಟ್ಟು ಮಾಡಬೇಕು ಎಂದು ಡಿ.ಕೆ.ಶಿವಕುಮಾರ್ ಹೇಳಿದರು.